
ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧ ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪದಲ್ಲಿ ಮೈಸೂರು ಜಿಲ್ಲೆಯ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆ ರದ್ದತಿ ಕೋರಿ ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ರೇವಣ್ಣ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್ ಅವರು “ವಿಚಾರಣಾಧೀನ ನ್ಯಾಯಾಲಯದಲ್ಲಿ ಸೋಮವಾರ ಆರೋಪ ನಿಗದಿಗೂ ಮುನ್ನ ವಾದ ಆಲಿಸಲು ಪ್ರಕರಣವನ್ನು ನಿಗದಿಗೊಳಿಸಲಾಗಿದೆ. ಹಾಲಿ ಅರ್ಜಿ ಇತ್ಯರ್ಥವಾಗುವವರೆಗೆ ಆರೋಪ ನಿಗದಿ ಮಾಡದಂತೆ ನಿರ್ಬಂಧಿಸಬೇಕು” ಎಂದರು.
ಇದನ್ನು ಆಲಿಸಿದ ಪೀಠವು “ವಿಚಾರಣಾಧೀನ ನ್ಯಾಯಾಲಯವು ಆರೋಪ ನಿಗದಿಗೂ ಮುನ್ನ ವಾದ-ಪ್ರತಿವಾದ ಆಲಿಸಬಹುದು. ಆದರೆ, ಜನವರಿ 30ರವರೆಗೆ ಆರೋಪ ನಿಗದಿ ಮಾಡಬಾರದು ಎಂದು ಆದೇಶಿಸಿತು. ಅಲ್ಲದೇ, ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿತು.
ಸಂತ್ರಸ್ತೆಯ ಪುತ್ರ ನೀಡಿರುವ ದೂರನ್ನು ಆಧರಿಸಿ ಮೈಸೂರಿನ ಕೆ ಆರ್ ನಗರ ಠಾಣೆಯ ಪೊಲೀಸರು ರೇವಣ್ಣ ಸೇರಿದಂತೆ ಒಂಭತ್ತು ಮಂದಿಯ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 364ಎ,365 ಮತ್ತು 34ರ ಅಡಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ವಿಶೇಷ ತನಿಖಾ ತಂಡವು ಆರೋಪ ಪಟ್ಟಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ.