ಕಳೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಹಂಚಲು ಅಡುಗೆ ಕುಕ್ಕರ್‌ಗಳನ್ನು ಶೇಖರಿಸಿ ಇಡಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್ ಅಖಂಡ ಶ್ರೀನಿವಾಸ್ ಮೂರ್ತಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ರದ್ದುಪಡಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಬೆಂಗಳೂರಿನ ಅಖಂಡ ಶ್ರೀನಿವಾಸಮೂರ್ತಿ ಮತ್ತು ಟಿ ಎನ್ ಆರ್ ರೋಹಿತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಗಮನಿಸಿದರೆ ಆರೋಪಿಗಳನ್ನು ನ್ಯಾಯಿಕ ವಿಚಾರಣೆಗೆ ಗುರಿಪಡಿಸಬಹುದಾದ ಯಾವುದೇ ಸಾಕ್ಷ್ಯಗಳಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧದ ಪ್ರಕರಣದಲ್ಲಿ ನ್ಯಾಯಾಲಯ ಈಗಾಗಲೇ ತೀರ್ಮಾನಿಸಿರುವಂತೆ ಯಾವುದೇ ಆಧಾರ ಅಥವಾ ಸಾಕ್ಷ್ಯ ಇಲ್ಲದೆ, ಕ್ರಿಮಿನಲ್ ಪ್ರಕರಣ ಮುಂದುವರಿಸಿದರೆ ಅದು ಕಾನೂನಿನ ದುರುಪಯೋಗವಾಗಲಿದೆ ಎಂದು ಪೀಠ ಅಭಿಪ್ರಾಯಪಟ್ಟು, ಪ್ರಕರಣ ರದ್ದುಪಡಿಸಿದೆ.