ಸಾರ್ವಜನಿಕ ಸಮಾರಂಭದಲ್ಲಿ ಮಾತಿನ ಚಕಮಕಿ: ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧದ ಪ್ರಕರಣ ರದ್ದು

ಮಂಗಳೂರಿನ ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ 2025ರ ಮಾರ್ಚ್ 2ರಂದು ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಆಡಿದ್ದರೆ ಎನ್ನಲಾದ ಮಾತುಗಳು ದೂರು ಪ್ರತಿದೂರಿಗೆ ಕಾರಣವಾಗಿದ್ದವು.
ಸಾರ್ವಜನಿಕ ಸಮಾರಂಭದಲ್ಲಿ ಮಾತಿನ ಚಕಮಕಿ: ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧದ ಪ್ರಕರಣ ರದ್ದು
Published on

ರಾಜಕೀಯ ವೈಷಮ್ಯ ಹಾಗೂ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಡೆದ ಮಾತಿನ ಚಕಮಕಿಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಿ ವೇದವ್ಯಾಸ್ ಕಾಮತ್ ಮತ್ತು ಅವರ ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ರದ್ದುಪಡಿಸಿದೆ.

ತಮ್ಮ ವಿರುದ್ಧ ಮಂಗಳೂರಿನ ಕಂಕನಾಡಿ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮತ್ತು ಜನಪ್ರತಿನಿಧಿಗಳ ಮ್ಯಾಜಿ‌ಸ್ಟ್ರೇಟ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರಶ್ನಿಸಿ ವೇದವ್ಯಾಸ ಕಾಮತ್​ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

“ಪ್ರಕರಣಕ್ಕೆ ಸಂಬಂಧಿಸಿದ ದೂರಿಗೆ ಪ್ರತಿ ದೂರು ದಾಖಲಾಗಿದೆ. ಪ್ರತಿ ದೂರಿಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ 'ಬಿ' ರಿಪೋರ್ಟ್ ಸಲ್ಲಿಸಿದ್ದಾರೆ. ಕೇವಲ ರಾಜಕೀಯ ದ್ವೇಷಕ್ಕಾಗಿ ಈ ದೂರನ್ನು ದಾಖಲಿಸಲಾಗಿದೆ ಮತ್ತು ಇದರಲ್ಲಿ ಯಾವುದೇ ಕ್ರಿಮಿನಲ್​ ಅಪರಾಧದ ಅಂಶಗಳಿಲ್ಲ. ಇಂತಹ ಪ್ರಕರಣದ ತನಿಖೆ ಮುಂದುವರೆಸುವುದಕ್ಕೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಲಿದೆ” ಎಂದು ಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ: ಮಂಗಳೂರಿನ ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ 2025ರ ಮಾರ್ಚ್ 2ರಂದು ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಆಡಿದ್ದರೆ ಎನ್ನಲಾದ ಮಾತುಗಳು ದೂರು ಪ್ರತಿದೂರಿಗೆ ಕಾರಣವಾಗಿದ್ದವು. ಈ ಸಂಬಂಧ ವಿಚಾರಣಾ ನ್ಯಾಯಾಲಯದಲ್ಲಿ ನ್ಯಾಯಿಕ ಪ್ರಕ್ರಿಯೆ ನಡೆಯುತ್ತಿತ್ತು.

Kannada Bar & Bench
kannada.barandbench.com