MLA Abhay Kumar Patil and Karnataka HC
MLA Abhay Kumar Patil and Karnataka HC

ಶಾಸಕ ಅಭಯ್‌ ಕುಮಾರ್ ಪಾಟೀಲ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಅಭಯ್‌ ಕುಮಾರ್‌ ಪಾಟೀಲ್‌ ಅವರು ಆದಾಯ ಮೀರಿ ಶೇ.128.54ರಷ್ಟು ಅಧಿಕ ಆದಾಯ ಗಳಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
Published on

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ್‌ ಕುಮಾರ್ ಪಾಟೀಲ್‌ ಅವರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ರದ್ದುಪಡಿಸಿ ಕರ್ನಾಟಕ ಹೈಕೋರ್ಟ್‌ ಈಚೆಗೆ ಆದೇಶಿಸಿದೆ.

ತಮ್ಮ ವಿರುದ್ಧದ ಎಫ್‌ಐಆರ್‌ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣಾ ಪ್ರಕ್ರಿಯೆ ರದ್ದತಿ ಕೋರಿ ಶಾಸಕ ಅಭಯ್‌ ಕುಮಾರ್‌ ಪಾಟೀಲ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ಐ ಅರುಣ್‌ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

“ಪ್ರಕರಣ ತನಿಖೆ ಪೂರ್ಣಗೊಂಡಿದೆ ಮತ್ತು ಶಾಸಕರು ಆದಾಯ ಮೀರಿ ಶೇ.128.54ರಷ್ಟು ಅಧಿಕ ಆದಾಯ ಗಳಿಸಿದ್ದಾರೆ. ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸರ್ಕಾರಿ ವಕೀಲರು ಸುಪ್ರೀಂ ಕೋರ್ಟ್‌ಗೆ ತಪ್ಪು ಮಾಹಿತಿ ನೀಡಿದ್ದರು. ಇದರಿಂದ ಪ್ರಕರಣವನ್ನು ಮುಂದುವರಿಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ ನೀಡಿತ್ತು. ಆದರೆ, ಲೋಕಾಯುಕ್ತ ಪೊಲೀಸರು ಪ್ರಕರಣದ ಕುರಿತ ವಿಶೇಷ ನ್ಯಾಯಾಲಯದ ಮುಂದೆ ಯಾವುದೇ ಆರೋಪ ಪಟ್ಟಿ ಸಲ್ಲಿಸಿಲ್ಲ. ವಿಶೇಷ ನ್ಯಾಯಾಲಯ ಸಂಜ್ಞೇ ತೆಗೆದುಕೊಳ್ಳಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನಮತಿ ಸಹ ಪಡೆದುಕೊಂಡಿಲ್ಲ. ಹೀಗಾಗಿ, ಪ್ರಕರಣವನ್ನು ಮುಂದುವರಿಸಲು ಅನುಮತಿ ನೀಡುವ ವಿಚಾರ ಉದ್ಭವಿಸುವುದಿಲ್ಲ” ಎಂದು ಹೇಳಿ ನ್ಯಾಯಾಲಯವು ಎಫ್‌ಐಆರ್‌ ರದ್ದುಪಡಿಸಿದೆ.

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಶಾಸಕರ ವಿರುದ್ಧ 2012ರಲ್ಲಿ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ನ್ಯಾಯಾಲಯವು ಪ್ರಕರಣವನ್ನು ಲೋಕಾಯುಕ್ತ ಪೊಲೀಸರ ತನಿಖೆಗೆ ಆದೇಶಿಸಿತ್ತು. ಆದರೆ, ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವಲ್ಲಿ ಲೋಕಾಯುಕ್ತ ನ್ಯಾಯಾಲಯ ತಪ್ಪೆಸಗಿದೆ ಎಂದು ಹೇಳಿ, ತನಿಖೆಗೆ ಶಿಫಾರಸ್ಸು ಮಾಡಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿ. ಪ್ರಕರಣವನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಿಂದಿರುಗಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Kannada Bar & Bench
kannada.barandbench.com