

ಮಾಜಿ ಸಚಿವ ಜಮೀರ್ ಅಹಮ್ಮದ್ ಖಾನ್ ಆಪ್ತ ಕಾರ್ಯದರ್ಶಿಯಾಗಿದ್ದ ಸರ್ದಾರ್ ಸರ್ಫರಾಜ್ ಖಾನ್ ಮೇಲಿನ ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ ಬುಧವಾರ ಆದೇಶಿಸಿದೆ.
ಲೋಕಾಯುಕ್ತ ಪೊಲೀಸರು ದಾಖಲಿಸಿರುವ ದೂರು ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸರ್ದಾರ್ ಸರ್ಫರಾಜ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠವು ಪುರಸ್ಕರಿಸಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಪ್ರಕರಣದ ಹಿನ್ನೆಲೆ: ತೆರಿಗೆ ವಂಚನೆ ಸಂಬಂಧ ಆದಾಯ ತೆರಿಗೆ ಇಲಾಖೆಯ ದೂರಿನ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ (ಇ ಡಿ) ಅಧಿಕಾರಿಗಳು ಈ ಹಿಂದೆ ಸಚಿವ ಜಮೀರ್ ಅಹಮ್ಮದ್ ಖಾನ್ ಮನೆಯಲ್ಲಿ ಶೋಧ ನಡೆಸಿದ್ದರು. ಆಗ ಪತ್ತೆಯಾಗಿದ್ದ ಹಣಕಾಸು ವ್ಯವಹಾರದ ಲೆಕ್ಕಪತ್ರಗಳನ್ನು ಇ ಡಿ ಅಧಿಕಾರಿಗಳು, ಲೋಕಾಯುಕ್ತ ಪೊಲೀಸರಿಗೆ ಹಸ್ತಾಂತರಿಸಿ ತನಿಖೆ ನಡೆಸುವಂತೆ ಕೋರಿದ್ದರು. ಅದರಂತೆ ಲೋಕಾಯುಕ್ತ ಅಧಿಕಾರಿಗಳು, ಜಮೀರ್ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧ 2025ರ ಡಿಸೆಂಬರ್ 23ರಂದು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್ 13(1)(ಬಿ) ಮತ್ತು 13(2) ಅಡಿಯಲ್ಲಿ ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ದುನರ್ಡತೆ ತೋರಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು.
ನಂತರ ಬೆಂಗಳೂರಿನ ಹಲಸೂರಿನಲ್ಲಿರುವ ಸರ್ಫರಾಜ್ ಖಾನ್ ನಿವಾಸ ಮತ್ತು ಸಂಬಂಧಿಕರ ಮನೆ, ಕೊಡಗು ಜಿಲ್ಲೆಯಲ್ಲಿರುವ ಅವರ ಒಡೆತನದ ಕಾಫಿ ಎಸ್ಟೇಟ್‌ಗಳು ಹಾಗೂ ಎಚ್ ಡಿ ಕೋಟೆಯಲ್ಲಿನ ರೆಸಾರ್ಟ್ ಸೇರಿದಂತೆ 13 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು.
ಬಳಿಕ ಖಾನ್ ಅವರು 38 ಎಕರೆ ಭೂಮಿ ಸೇರಿದಂತೆ 14.38 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವುದು ತನಿಖೆಯಿಂದ ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದರು. ಪ್ರಕರಣವು ಲೋಕಾಯುಕ್ತರ ವಿಶೇಷ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿತ್ತು. ಹೀಗಾಗಿ, ತಮ್ಮ ವಿರುದ್ಧ ಎಫ್ಐಆರ್ ಹಾಗೂ ವಿಚಾರಣಾಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಖಾನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.