

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಚವ್ಹಾಣ್ ಅವರಿಂದ ₹2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಸಂಬಂಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತು ವಿಚಾರಣಾ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಪಡಿಸಿದೆ.
ವಿಜಯಪುರದ ಮಾಜಿ ಶಾಸಕ ದೇವಾನಂದ ಚವ್ಹಾಣ್ ಪತ್ನಿ ಸುನೀತಾ ಚವ್ಹಾಣ್ ದಾಖಲಿಸಿರುವ ಎಫ್‌ಐಆರ್ ಹಾಗೂ ವಿಚಾರಣಾಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಲು ಕೋರಿ ಹುಬ್ಬಳ್ಳಿಯ ಗೋಪಾಲ್ ಜೋಶಿ, ಪುತ್ರ ಅಜಯ್ ಜೋಶಿ ಹಾಗೂ ವಿಜಯಲಕ್ಷ್ಮೀ ಜೋಶಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
“ಅರ್ಜಿಯನ್ನು ಪುರಸ್ಕರಿಸಲಾಗಿದೆ. ಅಪರಾಧ ಪ್ರಕರಣವನ್ನು ವಜಾಗೊಳಿಸಲಾಗಿದೆ. ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯವು ಹಾಲಿ ಪ್ರಕರಣಕ್ಕೆ ಮಾತ್ರ ಸಂಬಂಧಿಸಿದ್ದು, ಉಭಯ ಪಕ್ಷಕಾರರ ನಡುವೆ ಬಾಕಿ ಇರುವ ಪ್ರಕರಣಗಳ ಮೇಲೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಪ್ರಕರಣದ ಹಿನ್ನೆಲೆ: ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ ₹2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಸಂಬಂಧ ಸುನೀತಾ ಚವ್ಹಾಣ್ ನೀಡಿದ ದೂರಿನ ಅನ್ವಯ ಬೆಂಗಳೂರಿನ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ದೇವಾನಂದ್ ಚವ್ಹಾಣ್ ಅವರು ಗೋಪಾಲ ಜೋಶಿ ಅವರನ್ನು ಹುಬ್ಬಳ್ಳಿಯ ನಿವಾಸದಲ್ಲಿ ಭೇಟಿ ಮಾಡಿದ್ದರು. ಸೋಮಶೇಖರ್ ನಾಯಕ್ ಅವರು ಗೋಪಾಲ ಜೋಶಿ ಅವರನ್ನು ಭೇಟಿ ಮಾಡಿಸಿದ್ದರು. ಕೇಂದ್ರದಲ್ಲಿ ನನ್ನ ಸಹೋದರ ಪ್ರಲ್ಹಾದ್ ಜೋಶಿ ಅವರ ವರ್ಚಸ್ಸು ಚೆನ್ನಾಗಿದ್ದು, ವಿಜಯಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಗೋಪಾಲ ಜೋಶಿ ಆಮಿಷವೊಡ್ಡಿದ್ದರು. ಇದಕ್ಕಾಗಿ ₹5 ಕೋಟಿ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚಿಸಿದ್ದರು. ಗೋಪಾಲ ಜೋಶಿ ಸೂಚಿಸಿದ್ದ ವಿಜಯ ಲಕ್ಷ್ಮಿ ಜೋಶಿ ಅವರ ಖಾತೆಗೆ ₹1.25 ಕೋಟಿ ಹಾಗೂ ಮನೆಗೆ ₹75 ಲಕ್ಷ ತಲುಪಿಸಲಾಗಿತ್ತು. ಅಲ್ಲದೇ, ₹5 ಕೋಟಿ ಮೌಲ್ಯ ನಮೂದಿಸಿದ್ದ ಚೆಕ್ ಸಹ ಪಡೆದುಕೊಂಡಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.
ಟಿಕೆಟ್ ಸಂಬಂಧ ಅಮಿತ್ ಶಾ ಅವರ ಆಪ್ತ ಸಹಾಯಕರ ಜೊತೆಗೆ ಮಾತನಾಡಿರುವುದಾಗಿ ಗೋಪಾಲ ಜೋಶಿ ಹೇಳಿದ್ದರು. ಆದರೆ, ಟಿಕೆಟ್ ಕೊಡಿಸದೇ ವಂಚಿಸಿದ್ದಾರೆ. ಅದಾದ ಮೇಲೆ ಬಸವೇಶ್ವರನಗರದ ವಿಜಯಲಕ್ಷ್ಮಿ ಜೋಶಿ ಅವರ ಮನೆಗೆ ಕರೆಸಿಕೊಂಡು ಚೆಕ್ ವಾಪಸ್ ನೀಡಿದ್ದರು. ₹25 ಲಕ್ಷ ವಾಪಸ್ ನೀಡುವಂತೆ ಕೇಳಿದಾಗ ₹200 ಕೋಟಿ ಮೊತ್ತದ ಯೋಜನೆಗಳ ಬಿಲ್ ತೋರಿಸಿ ₹1.75 ಕೋಟಿ ನೀಡಿದರೆ 20 ದಿನಗಳಲ್ಲಿ ಎಲ್ಲಾ ಹಣವನ್ನೂ ವಾಪಸ್ ನೀಡುವುದಾಗಿ ಹೇಳಿದ್ದರು. ಅವರ ಮಾತು ನಂಬಿ ಹಂತ ಹಂತವಾಗಿ ₹1.75 ಕೋಟಿ ನೀಡಿದ್ದೆ ಎಂದು ದೇವಾನಂದ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ ನೀಡಿರುವ ದೂರಿನಲ್ಲಿ ವಿವರಿಸಿರುವುದನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.
ಬೆಂಗಳೂರಿನ ಬಸವೇಶ್ವರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ಗಳಾದ 126(2), 115(2), 118(1), 316(2), 318(4), 61, 3(5) ಎಸ್‌ಸಿ/ಎಸ್‌ಟಿ ದೌರ್ಜನ್ಯ ನಿಷೇಧ ಕಾಯಿದೆ ಸೆಕ್ಷನ್ 3(1)(R) (S), 3(2)(V-A) ಅಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.