ಮುಚ್ಚಳಿಕೆ ಬರೆಸಿಕೊಂಡು ಬಿಜೆಪಿ ಕಚೇರಿ ಕಾರ್ಯದರ್ಶಿ ವಿರುದ್ಧದ ನೋಟಿಸ್‌ ರದ್ದುಪಡಿಸಿದ ಹೈಕೋರ್ಟ್‌

ಮಲ್ಲೇಶ್ವರದ ಬಿಜೆಪಿ ಕಚೇರಿಯ ಕಾರ್ಯದರ್ಶಿ ಲೋಕೇಶ ಅಂಬೆಕಲ್ಲು ವಿರುದ್ಧ ಬೆಂಗಳೂರಿನ ಪಶ್ವಿಮ ವಿಭಾಗದ ಉಪ ಪೊಲೀಸ್‌ ಆಯುಕ್ತ ಮತ್ತು ದಂಡಾಧಿಕಾರಿ ಜಾರಿ ಮಾಡಿದ್ದ ನೋಟಿಸ್‌ ಅನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ.
BJP
BJP

ಚುನಾವಣೆಯ ಸಮಯದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆ ಹಾಗೂ ಚುನಾವಣಾ ಅಕ್ರಮದಲ್ಲಿ ತೊಡಗುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡುವಂತೆ ಸೂಚಿಸಿ ಮಲ್ಲೇಶ್ವರದ ಬಿಜೆಪಿ ಕಚೇರಿಯ ಕಾರ್ಯದರ್ಶಿ ಲೋಕೇಶ ಅಂಬೆಕಲ್ಲು ವಿರುದ್ಧ ಬೆಂಗಳೂರಿನ ಪಶ್ವಿಮ ವಿಭಾಗದ ಉಪ ಪೊಲೀಸ್‌ ಆಯುಕ್ತ ಮತ್ತು ದಂಡಾಧಿಕಾರಿ ಜಾರಿ ಮಾಡಿದ್ದ ನೋಟಿಸ್‌ ಅನ್ನು ಕರ್ನಾಟಕ ಹೈಕೋರ್ಟ್‌ ಈಚೆಗೆ ರದ್ದುಪಡಿಸಿದೆ.

ಬೆಂಗಳೂರಿನ ಲೋಕೇಶ ಅಂಬೆಕಲ್ಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರ ರಜಾಕಾಲೀನ ಏಕಸದಸ್ಯ ಪೀಠ ನಡೆಸಿತು.

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅರ್ಜಿದಾರರಿಗೆ ನೋಟಿಸ್‌ ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಹೀಗಾಗಿ, ಅರ್ಜಿದಾರರ ವಿರುದ್ಧದ ನೋಟಿಸ್‌ ಮಾನ್ಯತೆ ಕಳೆದುಕೊಂಡಿದೆ. ಆದ್ದರಿಂದ, ಅದನ್ನು ರದ್ದುಪಡಿಸಲಾಗುತ್ತಿದೆ ಎಂದು ಆದೇಶದಲ್ಲಿ ಪೀಠ ತಿಳಿಸಿದೆ.

ಅರ್ಜಿದಾರರ ಪರ ವಕೀಲ ಎಂ ವಿನೋದ್‌ ಕುಮಾರ್‌ ಅವರು “ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆಯ ಮತದಾನ ಪ್ರಕ್ರಿಯೆ 2024ರ ಏಪ್ರಿಲ್‌ 26ರಂದು ಪೂರ್ಣಗೊಂಡಿದೆ. ಮೇ 15ರಂದು ಅರ್ಜಿದಾರರಿಗೆ ನೋಟಿಸ್‌ ಜಾರಿಗೊಳಿಸಿ ಮುಚ್ಚಳಿಕೆಗೆ ಸಹಿ ಹಾಕುವಂತೆ ಪಶ್ವಿಮ ವಿಭಾಗದ ಉಪ ಪೊಲೀಸ್‌ ಆಯುಕ್ತರು ಒತ್ತಾಯಿಸಿದ್ದಾರೆ. ವಾಟ್ಸ್‌ ಆ್ಯಪ್‌ ಮೂಲಕ ನೋಟಿಸ್‌ ಜಾರಿಗೊಳಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಮತ್ತು ಹಾಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿನ ಘಟನೆ ಆಧರಿಸಿ ಅರ್ಜಿದಾರರ ವಿರುದ್ಧ ಆರೋಪ ಮಾಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿನ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೀಗಾಗಿ, ಅರ್ಜಿದಾರರ ವಿರುದ್ಧ ನೋಟಿಸ್‌ ನೀಡಿರುವುದು ಕಾನೂನಿನ ದುರ್ಬಳಕೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಸರ್ಕಾರಿ ವಕೀಲರು, ರಾಜ್ಯದಲ್ಲಿ ಈಗಾಗಲೇ ಲೋಕಸಭೆ ಚುನಾವಣೆ ಮತದಾನ ಪೂರ್ಣಗೊಂಡಿದ್ದು, ಅರ್ಜಿದಾರರ ವಿರುದ್ಧ ಜಾರಿಗೊಳಿಸಿದ್ದ ನೋಟಿಸ್‌ ಮಾನ್ಯತೆ ಕಳೆದುಕೊಂಡಿದೆ ಎಂದು ಪೀಠದ ಗಮನಕ್ಕೆ ತಂದರು. ವಾದ-ಪ್ರತಿವಾದ ಆಲಿಸಿದ ಪೀಠವು ಅರ್ಜಿದಾರರ ವಿರುದ್ಧದ ನೋಟಿಸ್‌ ರದ್ದುಪಡಿಸಿ, ಅರ್ಜಿ ಇತ್ಯರ್ಥಪಡಿಸಿದೆ.

2024ರ ಏಪ್ರಿಲ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಬಿಜಿಪಿಗೆ ಸೇರಿತ್ತು ಎನ್ನಲಾದ ಸುಮಾರು ₹2.01 ಕೋಟಿ ಹಣ ಪತ್ತೆಯಾಗಿತ್ತು. ಈ ಸಂಬಂಧ ಕಾಟನ್‌ ಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಲೋಕೇಶ್‌ ಅಂಬೆಕಲ್ಲುವನ್ನು ಮೊದಲ ಆರೋಪಿಯನ್ನಾಗಿಸಿರುವುದನ್ನು ಸ್ಮರಿಸಬಹುದಾಗಿದೆ.

Kannada Bar & Bench
kannada.barandbench.com