ಗ್ರಾಮ ಪಂಚಾಯಿತಿ ಒಟ್ಟು ಸದಸ್ಯರ ಸಂಖ್ಯೆಯನ್ನು ತಿಂಗಳಲ್ಲಿ ನೋಟಿಫೈ ಮಾಡಲು ಸರ್ಕಾರಕ್ಕೆ ಹೈಕೋರ್ಟ್‌ ಗಡುವು

ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ನೀಡಬೇಕು ಎಂದು ಕೋರಿದ ರಾಜ್ಯ ಸರ್ಕಾರ.
Election
Election
Published on

ಗ್ರಾಮ ಪಂಚಾಯಿತಿಗಳ ಒಟ್ಟು ಸದಸ್ಯರ ಸಂಖ್ಯೆಯನ್ನು ಒಂದು ತಿಂಗಳಲ್ಲಿ ನೋಟಿಫೈ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೋಮವಾರ ನಿರ್ದೇಶಿಸಿರುವ ಕರ್ನಾಟಕ ಹೈಕೋರ್ಟ್‌, ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ಮುಗಿಯುವುದರೊಳಗೇ ಈ ಪ್ರಕ್ರಿಯೆ ಮುಗಿಯಬೇಕಿತ್ತು ಎಂದು ಅಸಮಾಧಾನ ದಾಖಲಿಸಿದೆ.

ರಾಜ್ಯದ 5,950 ಗ್ರಾಮ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಪೂರಕವಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ ಅವರು “ಹಾಲಿ 96 ಸಾವಿರಕ್ಕೂ ಅಧಿಕ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿದ್ದು, ಸದ್ಯದ ಜನಸಂಖ್ಯೆ ಆಧರಿಸಿ ಒಟ್ಟು ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿಪಡಿಸಲು ನಾಲ್ಕು ವಾರ ಕಾಲಾವಕಾಶ ಬೇಕಾಗುತ್ತದೆ.‌ ಅದೇ ರೀತಿ‌ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಕನಿಷ್ಠ ಮೂರು ತಿಂಗಳು ಬೇಕಾಗುತ್ತದೆ” ಎಂದರು.

ಚುನಾವಣಾ ಆಯೋಗ ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಎನ್‌ ಫಣೀಂದ್ರ ಅವರು “92 ಗ್ರಾಮ ಪಂಚಾಯಿತಿಗಳಿಗೆ ಗಡಿ ಗುರುತಿಸುವುದು ಸಮಸ್ಯೆಯಾಗಿದೆ. ಸರ್ಕಾರವು ಎಷ್ಟು ಸದಸ್ಯರು ಎಂದು ನಿರ್ಧರಿಸಬೇಕಿದೆ. ಜನಸಂಖ್ಯೆ ಆಧಾರದಲ್ಲಿ ಸದಸ್ಯರ ಸಂಖ್ಯೆ ಬದಲಾಗುವುದಿಲ್ಲ” ಎಂದರು.

Also Read
ಗ್ರಾಮ ಪಂಚಾಯಿತಿ ಚುನಾವಣೆ: ಅಂತಿಮ ಮೀಸಲಾತಿ ಅಧಿಸೂಚನೆ ಕೋರಿದ ಆಯೋಗ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಮುಂದುವರಿದು, ಫಣೀಂದ್ರ ಅವರು “ನಗರ ಸ್ಥಳೀಯ ಸಂಸ್ಥೆಗಳ ಅವಧಿಯೂ ಮುಕ್ತಾಯವಾಗಿದೆ. ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಬೇಕಿದೆ” ಎಂದರು.

ಇದಕ್ಕೆ ಪ್ರತಿಮಾ ಹೊನ್ನಾಪುರ ಅವರು “ಚುನಾವಣೆ ನಡೆಯಬೇಕಿರುವ 187 ನಗರ ನಗರ ಸ್ಥಳೀಯ ಸಂಸ್ಥೆಗಳ ಪೈಕಿ 167 ನಗರ ಸ್ಥಳೀಯ ಸಂಸ್ಥೆಗಳ ವಾಡ್೯ ಪುನರ್ ವಿಂಗಡಣೆ ಕಾರ್ಯ ಮುಗಿದಿದೆ. 23 ನಗರ ಸ್ಥಳೀಯ ಸಂಸ್ಥೆಗಳಿಗೆ ಅಂತಿಮ ಮೀಸಲಾತಿ ಪ್ರಕಟಿಸಬೇಕಿದೆ. 143 ನಗರ ಸ್ಥಳೀಯ ಸಂಸ್ಥೆಗಳಿಗೆ ಕರಡು ಮೀಸಲಾತಿ ಹೊರಡಿಸಬೇಕಿದೆ. ಎರಡೂ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಬೇಕು ಎಂದು ಕೋರಿದರು. ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಏಪ್ರಿಲ್‌ 29ಕ್ಕೆ ಮುಂದೂಡಿತು.

Kannada Bar & Bench
kannada.barandbench.com