Karnataka HC
Karnataka HC

ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧದ ಆರೋಪ ನಿಗದಿಗೆ ಹೈಕೋರ್ಟ್‌ ತಡೆ

ದ್ವೇಷ ಭಾವನೆಯಿಂದ ಅರ್ಜಿದಾರರ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ. ವಿಚಾರಣಾಧೀನ ನ್ಯಾಯಾಲಯವು ಆರೋಪಿಗಳ ವಿರುದ್ಧ ಆರೋಪ ನಿಗದಿಪಡಿಸುವ ಪ್ರಕ್ರಿಯೆ ತಡೆಯಬೇಕು ಎಂದು ಕೋರಿದ ಅರ್ಜಿದಾರರು.
Published on

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಕುಣಿಗಲ್‌ ತಾಲ್ಲೂಕಿನ ಹುಲಿಯೂರು ದುರ್ಗ ಹೋಬಳಿ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧ ವಿಚಾರಣಾಧೀನ ನ್ಯಾಯಾಲಯವು ಆರೋಪ ನಿಗದಿಪಡಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ಗುರುವಾ ತಡೆ ನೀಡಿದೆ.

ಎಫ್‌ಐಆರ್ ಮತ್ತು ವಿಚಾರಣಾಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಬಾಲ ಮಂಜುನಾಥ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಸಂದೇಶ್‌ ಚೌಟ ಅವರು “ಪ್ರಕರಣದಲ್ಲಿ ಆರೋಪಿಸಿರುವ ಅಪರಾಧ ಕೃತ್ಯಗಳು ಬಹಳ ವರ್ಷಗಳ ಹಿಂದೆ ನಡೆದಿದೆ. ದ್ವೇಷ ಭಾವನೆಯಿಂದ ಅರ್ಜಿದಾರರ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ. ವಿಚಾರಣಾಧೀನ ನ್ಯಾಯಾಲಯವು ಆರೋಪಿಗಳ ವಿರುದ್ಧ ಆರೋಪ ನಿಗದಿಪಡಿಸುವ ಪ್ರಕ್ರಿಯೆಯನ್ನು ಆಗಸ್ಟ್‌ 30ಕ್ಕೆ (ಶುಕ್ರವಾರ) ನಿಗದಿಪಡಿಸಿದೆ. ಆ ಪ್ರಕ್ರಿಯೆಗೆ ತಡೆ ನೀಡಬೇಕು” ಎಂದು ಕೋರಿದರು.

Also Read
ಸಂತ್ರಸ್ತೆಗೆ ಬೆದರಿಕೆ ಪ್ರಕರಣ: ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧದ ವಿಚಾರಣಾಧೀನ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಹುಲಿಯೂರು ದುರ್ಗ ಠಾಣಾ ಪೊಲೀಸರು ಮತ್ತು ಪ್ರಕರಣದ ದೂರುದಾರೆಗೆ ನ್ಯಾಯಾಲಯವು ನೋಟಿಸ್‌ ಜಾರಿಗೊಳಿಸಿತು. ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅರ್ಜಿಯ ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪೊಲೀಸರಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅರ್ಜಿದಾರರ ವಿರುದ್ಧ 2024ರ ಮಾರ್ಚ್‌ 7ರಂದು ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆ ಅಡಿ ದೂರು ದಾಖಲಾಗಿತ್ತು.

Kannada Bar & Bench
kannada.barandbench.com