JDS and Karnataka HC
JDS and Karnataka HC

ಡಿಕೆಶಿ ಅಮಾನತು ಸುಳ್ಳು ಸುದ್ದಿ: ಜೆಡಿಎಸ್‌ ಜಾಲತಾಣ ವಿಭಾಗದ ಮುಖ್ಯಸ್ಥರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೈಗ್ರೌಂಡ್ಸ್‌ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 353(1)ಬಿ ಮತ್ತು 353 (2) ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಸಿ ಅಡಿ ದಾಖಲಾಗಿದ್ದ ಪ್ರಕರಣಕ್ಕೆ ನ್ಯಾಯಾಲಯ ತಡೆ ನೀಡಿದೆ.
Published on

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಲಾಗಿದೆ ಎಂದು ರಾಜಕೀಯ ವಿಡಂಬನೆಯ ಮಾಡುವ ರೀತಿಯಲ್ಲಿ ಟ್ವೀಟ್‌ ಮಾಡಿದ್ದ ಸಂಬಂಧ ಜೆಡಿಎಸ್‌ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಎಚ್‌ ಎಸ್‌ ಚಂದನ್‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ತಡೆ ನೀಡಿದೆ.

ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಚಂದನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ ಅವರು “ಟ್ವೀಟ್‌ ಅನ್ನು ಸರಿಪಡಿಸಲಾಗಿದೆ. ಮುಂದೆ ನಡೆಯಬಹುದಾದ, ಆದರೆ ನಡೆಯದ ಅಪರಾಧಕ್ಕೆ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದು ರಾಜಕೀಯ ವಿಡಂಬನೆಯಷ್ಟೆ” ಎಂದು ವಾದಿಸಿದರು.

ಇದನ್ ಆಲಿಸಿದ ಪೀಠವು “ಟ್ವೀಟ್‌ ಮಾಡಲಾಗಿದ್ದು, ತಕ್ಷಣ ಅದನ್ನು ಸರಿಪಡಿಸಲಾಗಿದೆ. ಅರ್ಜಿದಾರರ ವಿರುದ್ಧ ಪ್ರಕರಣಕ್ಕೆ ತಡೆ ನೀಡಲಾಗಿದೆ” ಎಂದು ಆದೇಶಿ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಕೆಲ ದಿನಗಳ ಹಿಂದೆ ವಿಧಾನಸಭೆಯಲ್ಲಿ ಮಾತನಾಡುತ್ತಾ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಆರ್‌ಎಸ್‌ಎಸ್‌ ಗೀತೆ “ನಮಸ್ತೆ ಸದಾ ವತ್ಸಲೆ..” ಹಾಡಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಟ್ವಿಟರ್‌ ಖಾತೆಯಿಂದ ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ನಕಲಿ ಲೆಟರ್‌ಹೆಡ್‌ನಲ್ಲಿ ಶಿಸ್ತು ಸಮಿತಿಯ ಶಿಫಾರಸ್ಸಿನ ಮೇರೆಗೆ ಎಐಸಿಸಿ ಒಪ್ಪಿಗೆಗೆ ಒಳಪಟ್ಟು ಶಿವಕುಮಾರ್‌ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಸುಳ್ಳು ಸುದ್ದಿ ಹರಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಸಿ ಎಂ ಧನಂಜಯ ದೂರು ನೀಡಿದ್ದರು.

ಈ ಸಂಬಂಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 353(1)ಬಿ ಮತ್ತು 353 (2) ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಸಿ ಅಡಿ ಪ್ರಕರಣ ದಾಖಲಿಸಲಾಗಿತ್ತು. ಇದಕ್ಕೆ ನ್ಯಾಯಾಲಯ ತಡೆ ನೀಡಿದೆ.

Kannada Bar & Bench
kannada.barandbench.com