ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

“ಪೊಲೀಸ್‌ ಕಾಯಿದೆ ಇರಬೇಕಾದರೆ ಈ ಸರ್ಕಾರಿ ಆದೇಶ ಏಕೆ? ನೀವು ಏನನ್ನೋ ಸಾಧಿಸಲು ಹೊರಟಿದ್ದೀರಿ” ರಾಜ್ಯ ಸರ್ಕಾರವನ್ನು ಮೌಖಿಕವಾಗಿ ಪ್ರಶ್ನಿಸಿದ ಹೈಕೋರ್ಟ್‌.
ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ
Published on

ರಸ್ತೆ, ಉದ್ಯಾನ, ಆಟದ ಮೈದಾನ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಂಗಳವಾರ ಮಧ್ಯಂತರ ತಡೆ ನೀಡಿದೆ. ಇದೇ ವೇಳೆ ನ್ಯಾಯಾಲಯವು, "ಪೊಲೀಸ್‌ ಕಾಯಿದೆ ಇರಬೇಕಾದರೆ ಈ ಸರ್ಕಾರಿ ಆದೇಶ ಏಕೆ? ನೀವು ಏನನ್ನೋ ಸಾಧಿಸಲು ಹೊರಟಿದ್ದೀರಿ" ಎಂದು ರಾಜ್ಯ ಸರ್ಕಾರವನ್ನು ಮೌಖಿಕವಾಗಿ ಪ್ರಶ್ನಿಸಿದೆ.

ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 2025ರ ಅಕ್ಟೋಬರ್ 18ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಹುಬ್ಬಳ್ಳಿಯ ಪುನಶ್ಚೇತನ ಸೇವಾ ಟ್ರಸ್ಟ್, ವಿ ಕೇರ್ ಫೌಂಡೇಷನ್ ಸೇರಿ ನಾಲ್ವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

Justice M Nagaprasanna
Justice M Nagaprasanna

ವಾದ-ಪ್ರತಿವಾದ ಆಲಿಸಿದ ಪೀಠವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಧಾರವಾಡ ನಗರ ಪೊಲೀಸ್ ಆಯುಕ್ತರು, ಧಾರವಾಡ ಉಪ ಆಯುಕ್ತರು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿತು.

ಸಾರ್ವಜನಿಕ ಸ್ಥಳಗಳಲ್ಲಿ ಹತ್ತಕ್ಕೂ ಅಧಿಕ ಮಂದಿ ಗುಂಪು ಸೇರುವುದನ್ನು‌ ನಿರ್ಬಂಧಿಸಿ ಸರ್ಕಾರ ಹೊರಡಿಸಿರುವ ಆದೇಶವು ಮೇಲ್ನೋಟಕ್ಕೆ ಸಂವಿಧಾನದ 19(1)(ಎ) (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ಹಾಗೂ 19(1)(ಬಿ) (ಶಸ್ತ್ರಾಸ್ತ್ರರಹಿತವಾಗಿ, ಶಾಂತಿಯುತವಾಗಿ ಒಟ್ಟುಗೂಡುವ) ವಿಧಿ ಅಡಿಯಲ್ಲಿ ಸಾರ್ವಜನಿಕರಿಗೆ ದೊರೆತಿರುವ ಹಕ್ಕುಗಳನ್ನು ಕಸಿದುಕೊಳ್ಳುವಂತಿವೆ. ಸಂವಿಧಾನ ಪ್ರದತ್ತ ಹಕ್ಕನ್ನು ಕಾನೂನು ಜಾರಿಗೊಳಿಸುವ ಮೂಲಕ ಕಸಿದುಕೊಳ್ಳಬಹುದೇ ಹೊರತು ಸರ್ಕಾರಿ ಆದೇಶ ಹೊರಡಿಸುವ ಮೂಲಕವಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಒಂದೊಮ್ಮೆ, ಸರ್ಕಾರದ ಆದೇಶವನ್ನು ಹೀಗೇ ಬಿಟ್ಟರೆ, ಸಾರ್ವಜನಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶವನ್ನು ಕಾರ್ಯಗತಗೊಳಿಸಲು ಅನುಮತಿಸಲು ಸಾಧ್ಯವಿಲ್ಲ. ಅದಾಗ್ಯೂ, ಸರ್ಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹಾಗೂ ಈ ಸಂಬಂಧ ಸೂಕ್ತ ಮಾಹಿತಿ ಪಡೆದು ತಿಳಿಸಲು ಕಾಲಾವಕಾಶ ಕೋರಿದ್ದಾರೆ. ಸರ್ಕಾರದ ಆದೇಶವು ಸಂವಿಧಾನದ 13(2)ನೇ ವಿಧಿಯನ್ನು (ಸಂವಿಧಾನದಲ್ಲಿ ಖಾತ್ರಿಪಡಿಸಿದ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ಅಥವಾ ಸಂಕ್ಷೇಪಿಸುವ ಯಾವುದೇ ಕಾನೂನನ್ನು ರಾಜ್ಯ ರಚಿಸಬಾರದು) ಉಲ್ಲಂಘಿಸುವ ಹಿನ್ನೆಲೆಯಲ್ಲಿ, ಅಕ್ಟೋಬರ್ 18ರ ಸರ್ಕಾರದ ಆದೇಶ ಹಾಗೂ ಆ ನಂತರದ ಎಲ್ಲ ಆದೇಶಗಳಿಗೆ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.

ಸರ್ಕಾರದ ಆದೇಶದಲ್ಲಿ ಏನಿದೆ?

ರಾಜ್ಯದಲ್ಲಿ ಹಲವು ಖಾಸಗಿ ಸಂಸ್ಥೆಗಳು. ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಉತ್ಸವ ಹಾಗೂ ಸದಸ್ಯರು ಮತ್ತು ಬೆಂಬಲಿಗರ ಸಭೆ ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು/ಸರ್ಕಾರದ ಆಸ್ತಿ, ಜಮೀನು, ಆಟದ ಮೈದಾನ, ಸಾರ್ವಜನಿಕ ರಸ್ತೆ ಇತ್ಯಾದಿಗಳನ್ನು ಸರ್ಕಾರದ ಅಥವಾ ಸಂಬಂಧಿತ ಇಲಾಖೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದೆ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ.

ಇಂತಹ ಕ್ರಿಯೆಗಳು ಅಕ್ರಮ ಪ್ರವೇಶ ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆ ಉಂಟು ಮಾಡುತ್ತವೆ. ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿ/ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಂತ್ರಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆ, ಸಂಘವು ಆಯಾ ಸಾರ್ವಜನಿಕ ಆಸ್ತಿ/ಸ್ಥಳದ ಮಾಲೀಕತ್ವದ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳು ಅನುಮತಿ ನೀಡುವುದು ಕಡ್ಡಾಯವಾಗಿರುತ್ತದೆ ಎಂದು ಸರ್ಕಾರದ ಆದೇಶದಲ್ಲಿ ಹೇಳಲಾಗಿದೆ.

ಇದನ್ನು ಉಲ್ಲಂಘಿಸಿದರೆ ಪೊಲೀಷರು ಬಿಎನ್‌ಎಸ್‌ 2023ರ ಅಡಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂದೂ ಆದೇಶದಲ್ಲಿ ವಿವರಿಸಲಾಗಿದೆ.

Kannada Bar & Bench
kannada.barandbench.com