Kambala & Karnataka HC
Kambala & Karnataka HC

ಬೆಂಗಳೂರು ಕಂಬಳ ಸ್ಪರ್ಧೆಗೆ ಪೆಟಾ ವಿರೋಧ: ನಾಳೆ ಅರ್ಜಿ ವಿಚಾರಣೆ ನಡೆಸಲಿರುವ ಹೈಕೋರ್ಟ್‌

ದಕ್ಷಿಣ ಕನ್ನಡ ಮತ್ತು ಉಡುಪಿಯ ಗ್ರಾಮೀಣ ಭಾಗಗಳಲ್ಲಿ ಹೊರತುಪಡಿಸಿ ಬೇರೆಲ್ಲೂ ಕಂಬಳ ಸ್ಪರ್ಧೆ ನಡೆಸಲು ಅನುಮತಿಸಬಾರದು. ಪ್ರಾಣಿಗಳ ಮೇಲಿನ ಕ್ರೌರ್ಯ ನಿಷೇಧ ಕಾಯಿದೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.
Published on

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 25 ಮತ್ತು 26ರಂದು ಕಂಬಳ (ಕೋಣಗಳ ಓಟ) ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಾಣಿ ದಯಾ ಸಂಘ ಪೆಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠದ ಮುಂದೆ‌ ಪೆಟಾ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು.

ಆಗ ಪೀಠವು “ಸ್ಪರ್ಧೆಯ ಕೊನೆಯ ಹಂತದಲ್ಲಿ ಅರ್ಜಿ ವಿಚಾರಣೆಗೆ ಕೋರುತ್ತಿರುವುದೇಕೆ. ಇಷ್ಟು ವಿಳಂಬವೇಕೆ” ಎಂದು ಪ್ರಶ್ನಿಸಿದರು. ಆಗ ಧ್ಯಾನ್‌ ಚಿನ್ನಪ್ಪ ಅವರು “ಜುಲೈನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅದನ್ನು ಇನ್ನೂ ವಿಚಾರಣೆಗೆ ನಿಗದಿಪಡಿಸಲಾಗಿಲ್ಲ. ಈಗ ಅಕ್ಟೋಬರ್‌ 25 ಮತ್ತು 26ಕ್ಕೆ ಕಂಬಳ ಸ್ಪರ್ಧೆ ಆಯೋಜಿಸಲಾಗಿದೆ. ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವಾರು ಕೋಣಗಳನ್ನು ಬೆಂಗಳೂರಿಗೆ ದೊಡ್ಡ ವಾಹನಗಳಲ್ಲಿ ಸಾಗಿಸಲಾಗುತ್ತಿದೆ” ಎಂದರು. ಇದನ್ನು ಆಲಿಸಿದ ಪೀಠವು ಅರ್ಜಿ ವಿಚಾರಣೆಯನ್ನು ನಾಳೆಗೆ ನಿಗದಿಗೊಳಿಸಿತು.

ದಕ್ಷಿಣ ಕನ್ನಡ ಮತ್ತು ಉಡುಪಿಯ ಗ್ರಾಮೀಣ ಭಾಗಗಳಲ್ಲಿ ಹೊರತುಪಡಿಸಿ ಬೇರೆಲ್ಲೂ ಕಂಬಳ ಸ್ಪರ್ಧೆ ನಡೆಸಲು ಅನುಮತಿಸಬಾರದು. ಪ್ರಾಣಿಗಳ ಮೇಲಿನ ಕ್ರೌರ್ಯ ನಿಷೇಧ ಕಾಯಿದೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಸಂಪ್ರದಾಯ ಮತ್ತು ಸಂಸ್ಕೃತಿಗೆ ವಿರುದ್ಧವಾಗಿ ವಾಣಿಜ್ಯ ಉದ್ದೇಶಕ್ಕಾಗಿ ಕಂಬಳ ಸ್ಪರ್ಧೆ ಆಯೋಜಿಸಲಾಗುತ್ತಿದ್ದು, ಅದಕ್ಕೆ ಅನುಮತಿಸದಂತೆ ಪೆಟಾ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದೆ.

Kannada Bar & Bench
kannada.barandbench.com