

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪದ ಸಂಬಂಧ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್‌ಎ) ಅಡಿ ದಾಖಲಿಸಿರುವ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿ ಕರ್ನಾಟಕ ಹೈಕೋರ್ಟ್ ಗುರುವಾರ ಆದೇಶಿಸಿದೆ.
ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್‌ಎ) ಅಡಿ ಸ್ಥಾಪಿತವಾಗಿರುವ ವಿಶೇಷ ನ್ಯಾಯಾಲಯವು ತಮ್ಮ ಪ್ರಕರಣದ ವಿಚಾರಣೆ ನಡೆಸಬೇಕೆ ಹೊರತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವಲ್ಲ ಎಂದು ಆಕ್ಷೇಪಿಸಿ ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನೀಲ್ ಸತ್ ಯಾದವ್ ಅವರ ಏಕಸದಸ್ಯ ಪೀಠ ಇತ್ಯರ್ಥಪಡಿಸಿದೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಸದ್ಯ ಈ ಪ್ರಕರಣದಲ್ಲಿ ಜನಪ್ರತಿನಿಧಿಗಳಿಲ್ಲ. ಪ್ರಕರಣದಲ್ಲಿ ಆರೋಪಿಯಾಗಿರುವ ದಿನೇಶ್ ಕುಮಾರ್ ಜನಪ್ರತಿನಿಧಿಯಲ್ಲ. ಹಾಲಿ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸಿದೆ. ಹೀಗಾಗಿ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುವುದಕ್ಕಿಂತ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುವುದು ಸೂಕ್ತ ಎಂದು ಜಾರಿ ನಿರ್ದೇಶನಾಲಯದ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ” ಎಂದು ಪೀಠ ಆದೇಶಿಸಿದೆ.
ಇದಕ್ಕೂ ಮುನ್ನ, ದಿನೇಶ್ ಕುಮಾರ್ ಅವ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರು “ಅರ್ಜಿದಾರರು ಜನಪ್ರತಿನಿಧಿಯಲ್ಲ. ಜಾರಿ ನಿರ್ದೇಶನಾಲಯವು ಯಾವುದೇ ಜನಪ್ರತಿನಿಧಿಯ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಸಕ್ಷಮ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಕೆಯಾಗಿದ್ದು, ಅದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿಕೊಂಡಿದೆ. ಇಲ್ಲಿ ಪ್ರಕರಣದ ವಿಚಾರಣೆ ನಡೆಸುವ ವ್ಯಾಪ್ತಿಯ ವಿಚಾರವಿದೆ. ಹೀಗಾಗಿ, ಪ್ರಕರಣದ ವಿಚಾರಣೆ ನಡೆಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಲ್ಲಿಯವರೆಗೆ ಹೊರಡಿಸಿರುವ ಆದೇಶಗಳಿಗೆ ವ್ಯಾಪ್ತಿ ಇಲ್ಲ. ಅದರಂತೆ ಪ್ರಕರಣದ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ನ್ಯಾಯಾಲಯಕ್ಕೆ ವರ್ಗಾಯಿಸಬೇಕು” ಎಂದು ಕೋರಿದರು.
ಜಾರಿ ನಿರ್ದೇಶನಾಲಯ ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಅರವಿಂದ್ ಕಾಮತ್ ಅವರು “ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಒಪಿಕೊಂಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಅಲ್ಲದೇ, ಖಾಸಗಿ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ವಾದವನ್ನು ಆಲಿಸದೇ ನ್ಯಾಯಾಲಯ ನಿರ್ಧರಿಸಬಾರದು” ಎಂದರು. ಈ ವಾದವನ್ನು ಪೀಠವು ಒಪ್ಪಲಿಲ್ಲ.