

ಪೋಕ್ಸೊ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಸಂಜ್ಞೇ ಪರಿಗಣಿಸಿರುವುದು ಮತ್ತು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಎತ್ತಿ ಹಿಡಿದಿದೆ. ಇದರಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ವಿಚಾರಣೆ ಎದುರಿಸುವುದು ಅನಿವಾರ್ಯವಾಗಿದೆ.
ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹಾಗೂ ವೈ ಎಂ ಅರುಣ, ಎಂ ರುದ್ರೇಶ, ಜಿ ಮರಿಸ್ವಾಮಿ ಅವರು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠವು ವಿಲೇವಾರಿ ಮಾಡಿದೆ.
"ಬಿ ಎಸ್ ಯಡಿಯೂರಪ್ಪ ಮತ್ತು ಇತರ ಆರೋಪಿಗಳಿಗೆ ವಿಚಾರಣಾಧೀನ ನಾಯಾಲಯವು ಆಕ್ಷೇಪಿಸಲಾದ ಆದೇಶದ ಮೂಲಕ ಸಂಜ್ಞೇ ಪರಿಗಣಿಸಿ, ಸಮನ್ಸ್ ಜಾರಿ ಮಾಡಿರುವುದನ್ನು ಎತ್ತಿ ಹಿಡಿಯಲಾಗಿದೆ. ವಿಚಾರಣೆಯ ಹಂತದಲ್ಲಿ ಯಡಿಯೂರಪ್ಪ ಅವರ ಅಗತ್ಯವಿಲ್ಲದಿದ್ದರೆ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಒತ್ತಾಯಿಸಬಾರದು. ಬಿಎಸ್‌ವೈ ಉಪಸ್ಥಿತಿ ಅಗತ್ಯವಿಲ್ಲದಿದ್ದರೆ ಅವರ ಪರವಾಗಿ ಸಲ್ಲಿಕೆ ಮಾಡುವ ವಿನಾಯಿತಿ ಮನವಿಯನ್ನು ಪುರಸ್ಕರಿಸಬೇಕು. ಈ ನ್ಯಾಯಾಲಯ ಮತ್ತು ಸಕ್ಷಮ ನ್ಯಾಯಾಲಯ ಮಾಡಿರುವ ಆದೇಶದಲ್ಲಿ ಉಲ್ಲೇಖಿಸಿರುವ ಅಂಶಗಳ ಪ್ರಭಾವಕ್ಕೆ ಒಳಗಾಗದೇ ತನ್ನ ಮುಂದೆ ಇರುವ ಸಾಕ್ಷಿಗಳನ್ನು ಆಧರಿಸಿ ವಿಚಾರಣಾಧೀನ ನ್ಯಾಯಾಲಯ ಪ್ರಕರಣ ನಿರ್ಧರಿಸಬೇಕು. ಆರೋಪ ಮುಕ್ತಿ ಸೇರಿಯೂ ಯಾವುದೇ ಅರ್ಜಿಗಳನ್ನು ವಿಚಾರಣಾಧೀನ ನ್ಯಾಯಾಲಯದ ಮುಂದೆ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ. ಈ ನೆಲೆಯಲ್ಲಿ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ" ಎಂದು ನ್ಯಾಯಾಲಯ ಹೇಳಿದೆ.
ಈಗಾಗಲೇ ಸಮನ್ವಯ ಪೀಠವು ಆದೇಶ ಮಾಡಿರುವುದರಿಂದ ಅದನ್ನು ಮತ್ತೆ ಪರಿಶೀಲಿಸಲಾಗದು ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.
ಸುದೀರ್ಘ ಕಾಲ ವಾದ-ಪ್ರತಿವಾದ ಆಲಿಸಿ ಅಕ್ಟೋಬರ್ 25ರಂದು ಕಾಯ್ದಿರಿಸಿದ್ದ ಆದೇಶವನ್ನು ಇಂದು ನ್ಯಾಯಾಲಯ ಪ್ರಕಟಿಸಿದ್ದು, ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಬೇಕಿದೆ.
ಯಡಿಯೂರಪ್ಪ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್ ಅವರು “ಸಂತ್ರಸ್ತೆಯ ಹೇಳಿಕೆಯನ್ನು ಮಾತ್ರ ಪರಿಗಣಿಸಿ, ಸಂಜ್ಞೇ ಪರಿಗಣಿಸಲಾಗಿದೆ ಎಂದು ವಿಚಾರಣಾಧೀನ ನ್ಯಾಯಾಲಯ ಹೇಳಬೇಕಿತ್ತು. ಅದನ್ನೂ ಮಾಡಿಲ್ಲ. ಹೊಸದಾಗಿ ಪ್ರಕರಣವನ್ನು ಪರಿಗಣಿಸುವಂತೆ ಸಮನ್ವಯ ಪೀಠವು ವಿಚಾರಣಾಧೀನ ನ್ಯಾಯಾಲಯಕ್ಕೆ ಆದೇಶಿಸಿತ್ತು. ಇದನ್ನೂ ಮಾಡಲಾಗಿಲ್ಲ. ಸಂಜ್ಞೇ ಪರಿಗಣಿಸುವಾಗ ವಿಚಾರಣಾಧೀನ ನ್ಯಾಯಾಲಯದ ನ್ಯಾಯಾಧೀಶರು ವಿವೇಚನೆ ಬಳಸಿಲ್ಲ” ಎಂದಿದ್ದರು.
ಪ್ರಕರಣದ ವಿಚಾರಣೆಯ ಒಂದು ಹಂತದಲ್ಲಿ ಪೀಠವು ಇದು ವಿಚಾರಣೆಗೆ ಅರ್ಹವಾದ ಪ್ರಕರಣವಾಗಿದೆ ಎಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.
ಪ್ರಾಸಿಕ್ಯೂಷನ್ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ಅವರು “ಸಂತ್ರಸ್ತೆಯ ತಾಯಿ ಮತ್ತು ಯಡಿಯೂರಪ್ಪ ನಡುವಿನ ಆಡಿಯೊ ರೆಕಾರ್ಡಿಂಗ್ ನಾಶಪಡಿಸಲಾಗಿದೆ. ಅದು ಇಲ್ಲ ಎಂದಾದರೆ ಯಡಿಯೂರಪ್ಪ ಅವರು ಎರಡು ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಏಕೆ ನೀಡಿದ್ದರು? ಸಂತ್ರಸ್ತೆಯ ತಾಯಿಯ ಮೊಬೈಲ್ ಕಸಿದು ಸಹ ಆರೋಪಿ ಅರುಣ್ ಎಂಬವರು ಜಾಲತಾಣದಲ್ಲಿ ಅಪ್‌ಲೋಡ್ ಮಾಡಲಾಗಿದ್ದ ಆಡಿಯೊ ರೆಕಾರ್ಡಿಂಗ್ ಡಿಲೀಟ್ ಮಾಡಿಸಿದ್ದಾರೆ. ಆದರೆ, ಸಂತ್ರಸ್ತೆ ಮೊಬೈಲ್‌ನಲ್ಲಿ ಅಸಲಿ ಆಡಿಯೊ ಇದೆ” ಎಂದಿದ್ದರು.
ಮುಂದುವರಿದು, “ಈ ಆಡಿಯೊದಲ್ಲಿರುವ ಧ್ವನಿಯು ಯಡಿಯೂರಪ್ಪ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಖಾತರಿಪಡಿಸಿದೆ. ಸಂತ್ರಸ್ತೆಯನ್ನು ಖಾಸಗಿ ಕೊಠಡಿಗೆ ಕರೆದೊಯ್ದು ಬಿಎಸ್‌ವೈ ಆಕೆಯ ಎದೆಯನ್ನು ಅದುಮಿದ್ದಾರೆ. ಸಂಜ್ಞೇ ಪರಿಗಣಿಸುವಾಗ ವಿಚಾರಣಾಧೀನ ನ್ಯಾಯಾಲಯವು ಇದನ್ನು ಪರಿಣಿಸಿದೆ. ಆನಂತರ ಸಂತ್ರಸ್ತೆಯು ಅಳುತ್ತಾ ಹೊರಬಂದಿದ್ದಾರೆ. ಇದನ್ನೂ ವಿಚಾರಣಾಧೀನ ನ್ಯಾಯಾಲಯ ಪರಿಗಣಿಸಿದೆ” ಎಂದಿದ್ದರು.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಸಂತ್ರಸ್ತೆಯ ತಾಯಿ 2024ರ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಆ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ನಂತರ ಪ್ರಕರಣ ಸಿಐಡಿಗೆ ತನಿಖೆ ವರ್ಗಾವಣೆಯಾಗಿತ್ತು. ಸಿಐಡಿ ಪೊಲೀಸರು ಯಡಿಯೂರಪ್ಪ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.
2025ರ ಫೆಬ್ರವರಿ 7ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಯಡಿಯೂರಪ್ಪ ವಿರುದ್ಧ ಸಕ್ಷಮ ನ್ಯಾಯಾಲಯವು ಮೊದಲ ಬಾರಿಗೆ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ವಜಾ ಮಾಡಿ, ಇದೇ ಪ್ರಕರಣದಲ್ಲಿ ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
“ಎಫ್‌ಐಆರ್, ಸಿಐಡಿ ತನಿಖೆ ನಡೆಸಿ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಅದನ್ನು ಆಧರಿಸಿ ಸಕ್ಷಮ ನ್ಯಾಯಾಲಯ 4.7.2024ರಂದು ಸಂಜ್ಞೇ ಪರಿಗಣಿಸಿರುವ ಆದೇಶ ಪ್ರಶ್ನಿಸಿದ್ದ ಬಿಎಸ್‌ವೈ ಅರ್ಜಿಯನ್ನು ಭಾಗಶಃ ಪುರಸ್ಕರಿಸಲಾಗಿದೆ. ಸಕ್ಷಮ ನ್ಯಾಯಾಲಯವು ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಯಡಿಯೂರಪ್ಪ ಅವರಿಗೆ ಸೀಮಿತವಾಗಿ ವಜಾ ಮಾಡಲಾಗಿದೆ. ಅಪರಾಧ, ತನಿಖೆ, ಅಂತಿಮ ವರದಿ ಎಲ್ಲವೂ ಹಾಗೆ ಉಳಿಯಲಿದೆ. ಈ ಆದೇಶದಲ್ಲಿ ಮಾಡಿರುವ ಅಭಿಪಾಯಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ವರದಿಗೆ ಸಂಬಂಧಿಸಿದಂತೆ ಆದೇಶ ಮಾಡಲು ಪ್ರಕರಣವನ್ನು ಮತ್ತೆ ಸಕ್ಷಮ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಸಂಜ್ಞೇ ಪರಿಗಣಿಸಿರುವ ಆದೇಶ ಹೊರತುಪಡಿಸಿ ಉಭಯ ಪಕ್ಷಕಾರರ ಪರ ಹಿರಿಯ ವಕೀಲರಾದ ಸಿ ವಿ ನಾಗೇಶ್ ಮತ್ತು ಪ್ರೊ. ರವಿವರ್ಮ ಕುಮಾರ್ ಅವರು ಎತ್ತಿರುವ ಯಾವುದೇ ವಾದಗಳಿಗೆ ಈ ನ್ಯಾಯಾಲಯವು ಉತ್ತರಿಸಿಲ್ಲ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಲಾಗಿದ್ದು, ಅರ್ಜಿದಾರರು ಸೂಕ್ತ ಸಂದರ್ಭದಲ್ಲಿ ಸೂಕ್ತ ವೇದಿಕೆಯಲ್ಲಿ ಪರಿಹಾರ ಪಡೆಯಬಹುದಾಗಿದೆ” ಎಂದು ನ್ಯಾ. ನಾಗಪ್ರಸನ್ನ ಅವರು ಆದೇಶ ಮಾಡಿದ್ದರು.
ಇದಾದ ಬಳಿಕ ವಿಚಾರಣಾಧೀನ ನ್ಯಾಯಾಲಯವು ಫೆಬ್ರವರಿ 28ರಂದು ಎರಡನೇ ಬಾರಿಗೆ ಹೈಕೋರ್ಟ್ ನಿರ್ದೇಶನದಂತೆ ಸಂಜ್ಞೇ ಪರಿಗಣಿಸಿತ್ತು. ಇದನ್ನು ಪ್ರಶ್ನಿಸಿ ಬಿಎಸ್‌ವೈ ಮತ್ತು ಇತರರು ಹೈಕೋರ್ಟ್ ಮೆಟ್ಟಿಲೇರಿದ್ದರು.