
ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿನ ಸರ್ಕಾರಿ ಜಮೀನುಗಳ ಒತ್ತುವರಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ನೀಡಲಾಗಿದ ಮಧ್ಯಂತರ ತಡೆ ಏಕಪಕ್ಷೀಯ ಆದೇಶವಾಗಿದೆ ಎಂದು ರಾಜ್ಯ ಸರ್ಕಾರ ಸೋಮವಾರ ಬಲವಾಗಿ ಆಕ್ಷೇಪಿಸಿದೆ.
ಎಸ್‌ಐಟಿ ರಚನೆಗೆ ತಡೆ ನೀಡಿರುವ ನ್ಯಾಯಮೂರ್ತಿ ಇ ಎಸ್ ಇಂದಿರೇಶ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಸೋಮವಾರ ಹಾಜರಾದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ ಶೆಟ್ಟಿ ಅವರು “ಈ ಪ್ರಕರಣದಲ್ಲಿ ಸರ್ಕಾರದ ವಾದ ಆಲಿಸದೆ ಮಧ್ಯಂತರ ಆದೇಶ ನೀಡಲಾಗಿದೆ. ಆದ್ದರಿಂದ, ಸರ್ಕಾರದ ವಾದವನ್ನು ಆಲಿಸಿ ಸೂಕ್ತ ಆದೇಶ ಹೊರಡಿಸಬೇಕು” ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠವು “ನಿಮ್ಮ ಮನವಿಯನ್ನು ಪರಿಗಣಿಸಲಾಗುವುದು” ಎಂದು ತಿಳಿಸಿ ವಿಚಾರಣೆಯನ್ನು ಜೂನ್ 26ಕ್ಕೆ ಮುಂದೂಡಿತು. ಮಧ್ಯಂತರ ಆದೇಶ ಮುಂದುವರಿದಿದೆ.
ಎಸ್‌ಐಟಿ ರಚಿಸಿರುವ ಆದೇಶ ರದ್ದುಪಡಿಸಬೇಕು ಎಂದು ಕೋರಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಜೂನ್ 19ರಂದು ನಡೆಸಿದ್ದ ನ್ಯಾಯಾಲಯವು ಪ್ರತಿವಾದಿಗಳಾದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ರಾಮನಗರ ತಹಶೀಲ್ದಾರ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ಎಸ್‌ಐಟಿ ರಚನೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿತ್ತು.
ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳು ಕೇತಗಾನಹಳ್ಳಿಯ ಸರ್ವೇ ನಂಬರ್ 8, 9, 10, 16, 17 ಮತ್ತು 79ರಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು 2020ರಲ್ಲಿ ಹೈಕೋರ್ಟ್ ಆದೇಶಿಸಿತ್ತು. ಆದರೆ, ಇದನ್ನು ಜಾರಿಗೊಳಿಸಿಲ್ಲ ಎಂದು ಸಮಾಜ ಪರಿವರ್ತನಾ ಸಮುದಾಯ, ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ 2025ರ ಜನವರಿ 28ರಂದು ಆದೇಶಿಸಲಾಗಿದೆ.