ಪ್ರಜ್ವಲ್‌ ವಿರುದ್ಧದ ಅತ್ಯಾಚಾರ ಪ್ರಕರಣದ ಸ್ವತಂತ್ರ ತನಿಖೆ ಕೋರಿಕೆ: ವಿಚಾರಣೆ ಮುಂದೂಡಿದ ಹೈಕೋರ್ಟ್‌

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಪಾಧ್ಯಕ್ಷ ಎಸ್‌ ಎಚ್‌ ಲಿಂಗೇಗೌಡ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಮೂರ್ತಿ ಅವರ ಮುಂದೆ ವಿಚಾರಣೆಗೆ ಬಂದಿತ್ತು.
Karnataka HC and Prajwal Revanna
Karnataka HC and Prajwal Revanna

ಜೆಡಿಎಸ್‌ ಉಚ್ಚಾಟಿತ ಮುಖಂಡ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಜೂನ್‌ 12ಕ್ಕೆ ಮುಂದೂಡಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಪಾಧ್ಯಕ್ಷ ಎಸ್‌ ಎಚ್‌ ಲಿಂಗೇಗೌಡ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ, ಕಾಲಾವಕಾಶದ ಕೊರತೆಯಿಂದ ಪೀಠವು ಅರ್ಜಿ ವಿಚಾರಣೆಯನ್ನು ಜೂನ್‌ 12ಕ್ಕೆ ಮುಂದೂಡಿತು.

ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ದೇಶಾದ್ಯಂತ ಸುದ್ದಿಯ ಕೇಂದ್ರಬಿಂದುವಾಗಿರುವ ಹಾಸನದ ಮಾಜಿ ಸಂಸದ ಸದಸ್ಯ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ದೂರು ನೀಡಲು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಈ ವೇಳೆ ಪೊಲೀಸರು ಪ್ರಕರಣ ಸಂಬಂಧ ಈಗಾಗಲೇ ದೂರು ದಾಖಲಾಗಿದ್ದು, ಮತ್ತೊಂದು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಹೊಳೆನರಸೀಪುರ ಪೊಲೀಸರು ಹಿಂಬರಹ ಕೊಟ್ಟಿದ್ದರು.

Also Read
ಸಂಸದ ಪ್ರಜ್ವಲ್‌ ವಿರುದ್ಧದ ಲೈಂಗಿಕ ಪ್ರಕರಣ: ಸ್ವತಂತ್ರ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಆ ಹಿಂಬರಹ ರದ್ದುಪಡಿಸಿ ಎಫ್‌ಐಆರ್‌ ದಾಖಲಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಬೇಕು. ವಿಡಿಯೋ ಮಾಡಿರುವವರು ಮತ್ತು ವಿಡಿಯೋವನ್ನು ಇತರರಿಗೆ ಹಂಚಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣದ ನ್ಯಾಯಾಂಗ ತನಿಖೆ ಸೇರಿದಂತೆ ಸ್ವತಂತ್ರ ತನಿಖಾ ಸಂಸ್ಥೆಗಳಿಗೆ ವಹಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Kannada Bar & Bench
kannada.barandbench.com