ಹೈಕೋರ್ಟ್‌ ಕಟ್ಟಡ ವಿಸ್ತರಣೆ: ರಾಜ್ಯ ಸರ್ಕಾರದ ಪ್ರಸ್ತಾವ ಪರಿಶೀಲಿಸಲು ಹೈಕೋರ್ಟ್‌ ಆಡಳಿತಕ್ಕೆ ತಿಂಗಳ ಕಾಲಾವಕಾಶ

ಕಬ್ಬನ್‌ ಪಾರ್ಕ್‌ನಲ್ಲಿರುವ ಚುನಾವಣೆ ಆಯೋಗದ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿ, ಅಲ್ಲಿಯೇ ಹೈಕೋರ್ಟ್‌ ಆಡಳಿತ ವ್ಯವಹಾರಗಳ ನಿರ್ವಹಣೆಗಾಗಿ 10 ಮಹಡಿ ಮತ್ತು 3 ಮಹಡಿಯ ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡುವ ಪ್ರಸ್ತಾವ ಸಲ್ಲಿಸಿರುವ ಸರ್ಕಾರ.
High Court of Karnataka
High Court of Karnataka

ಕರ್ನಾಟಕ ಹೈಕೋರ್ಟ್‌ ಕಟ್ಟಡ ವಿಸ್ತರಣೆಗೆ ಹೆಚ್ಚಿನ ಸ್ಥಳಾವಕಾಶ ಕಲ್ಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗಳು ಪರಿಶೀಲನೆಯಲ್ಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಶುಕ್ರವಾರ ಹೈಕೋರ್ಟ್‌ ಆಡಳಿತ ವಿಭಾಗ ಮಾಹಿತಿ ನೀಡಿದೆ.

ಬೆಂಗಳೂರಿನ ಹೈಕೋರ್ಟ್ ಕಟ್ಟಡದ ನೆಲಮಹಡಿಯಲ್ಲಿ ಇರುವ ಕಚೇರಿಗಳನ್ನು ಸ್ಥಳಾಂತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಕೋರಿ ವಕೀಲ ಎಲ್ ರಮೇಶ್ ನಾಯಕ್ ಮತ್ತು ಹೈಕೋರ್ಟ್ ಕಟ್ಟಡ ಸಂಕೀರ್ಣಕ್ಕೆ ಬೆಂಗಳೂರಿನ ಕೇಂದ್ರ ಭಾಗದಲ್ಲಿ 30ಕ್ಕೂ ಅಧಿಕ ಎಕರೆ ಜಮೀನು ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಕೋರಿ ಶರಣ ದೇಸಾಯಿ ಎಂಬುವರು ಪ್ರತ್ಯೇಕವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ವಿಚಾರಣೆ ವೇಳೆ ಹೈಕೋರ್ಟ್‌ ಆಡಳಿತ ವಿಭಾಗದ ಪರ ಹಾಜರಾದ ಹಿರಿಯ ವಕೀಲ ಎಸ್‌ ಎಸ್‌ ನಾಗಾನಂದ್‌ ಅವರು, ಹೈಕೋರ್ಟ್‌ ವಿಸ್ತರಣೆಗೆ ಸ್ಥಳಾವಕಾಶ ಒದಗಿಸುವ ಸಂಬಂಧ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗಳನ್ನು ಹೈಕೋರ್ಟ್‌ ಕಟ್ಟಡ ಸಮಿತಿಯು ಪರಿಶೀಲನೆ ನಡೆಸುತ್ತಿದೆ. ಹೀಗಾಗಿ, ಸರ್ಕಾರದ ಪ್ರಸ್ತಾವನೆಗಳ ಮೇಲೆ ಸಮಿತಿಯ ಅಭಿಪ್ರಾಯ ತಿಳಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು” ಎಂದು ಕೋರಿದರು.

ಆ ಮನವಿ ಪರಿಗಣಿಸಿದ ಪೀಠವು ನಾಲ್ಕು ವಾರಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಅರ್ಜಿಯು 2023ರ ಸೆ.21ರಂದು ವಿಚಾರಣೆಗೆ ಬಂದಿದ್ದ ವೇಳೆ ರಾಜ್ಯ ಸರ್ಕಾರ ಪರ ವಕೀಲರು, ಕಬ್ಬನ್‌ ಪಾರ್ಕ್‌ ನಲ್ಲಿರುವ ಚುನಾವಣೆ ಆಯೋಗದ ಹಳೆಯ ಕಟ್ಟಡವನ್ನು ನೆಲಸಮಗೊಳಿಸಿ, ಅಲ್ಲಿಯೇ ಹೈಕೋರ್ಟ್‌ ಆಡಳಿತ ವ್ಯವಹಾರಗಳ ನಿರ್ವಹಣೆಗಾಗಿ 10 ಮಹಡಿ ಮತ್ತು 3 ಮಹಡಿಯ ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡುವುದು ಹಾಗೂ ಹೈಕೋರ್ಟ್‌ ಆವರಣದಲ್ಲಿರುವ ಕ್ಯಾಂಟೀನ್‌ ಕಟ್ಟಡದ ಮೇಲೆ ಕಟ್ಟಡವೊಂದನ್ನು ನಿರ್ಮಾಣ ಮಾಡಲು ಸರ್ಕಾರ ಉದ್ದೇಶಿಸಿದೆ. ಜೊತೆಗೆ, ಇತರೆ ಮೂರು ಪ್ರಸ್ತಾವನೆಗಳಿದ್ದು, ಅವುಗಳನ್ನು ಹೈಕೋರ್ಟ್‌ಗೆ ಸಲ್ಲಿಸಿದೆ ಎಂದು ತಿಳಿಸಿದ್ದರು. ಇದರಿಂದ ಸರ್ಕಾರದ ಪ್ರಸ್ತಾವನೆಗಳನ್ನು ಹೈಕೋರ್ಟ್‌ ಕಟ್ಟಡ ಸಮಿತಿ ಪರಿಶೀಲನೆ ನಡೆಸಿ ಅಭಿಪ್ರಾಯ ತಿಳಿಸಬೇಕು ಎಂದು ಪೀಠ ಸೂಚಿಸಿತ್ತು.

Related Stories

No stories found.
Kannada Bar & Bench
kannada.barandbench.com