ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಿರುವುದು ಮತ್ತು ರಾಜಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಕ್ರೋಢೀಕೃತ ವರದಿ ಸಲ್ಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಬೆಂಗಳೂರು ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ ಬಿಬಿಎಂಪಿ ಪ್ರತಿನಿಧಿಸಿದ್ದ ವಕೀಲ ವಿ ಶ್ರೀನಿಧಿ ಅವರು “ಕಳೆದ ವಿಚಾರಣೆಯಲ್ಲಿ ನ್ಯಾಯಾಲಯ ನಿನ್ನೆ ಎತ್ತಿದ್ದ ಪ್ರಶ್ನೆಗಳು ಮತ್ತು ಅವುಗಳಿಗೆ ಪ್ರತಿಕ್ರಿಯೆಯನ್ನು ಬಿಬಿಎಂಪಿ ಆಯುಕ್ತರು ನೀಡಿದ್ದಾರೆ” ಎಂದು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಆಗ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಮಹಾಲೇಖಪಾಲರ ವರದಿ ಎಲ್ಲಿ ಎಂದರು. ಇದಕ್ಕೆ ಶ್ರೀನಿಧಿ ಅವರು ಪೀಠಕ್ಕೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ನ್ಯಾ. ಶೆಟ್ಟಿ ಅವರು ಆನ್‌ಲೈನ್‌ನಲ್ಲಿ ಸಿಗಬಹುದೇ ಪರಿಶೀಲಿಸಿ ಎಂದರು.
ಅಂತಿಮವಾಗಿ ಸಮಗ್ರವಾದ ವರದಿ ಸಲ್ಲಿಸುವಂತೆ ಬಿಬಿಎಂಪಿಗೆ ನಿರ್ದೇಶಿಸಿದ ಪೀಠವು ವಿಚಾರಣೆಯನ್ನು ಸೋಮವಾರಕ್ಕೆ (ಸೆ.19) ಮುಂದೂಡಿತು.
ಗುರುವಾರದ ವಿಚಾರಣೆಯಲ್ಲಿ ಪೀಠವು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿದಂತೆ ಸಿಎಜಿ ವರದಿಯಲ್ಲಿನ ಉಲ್ಲೇಖದ ಕುರಿತು ತಿಳಿಸುವಂತೆ ಬಿಬಿಎಂಪಿಗೆ ನಿರ್ದೇಶಿಸಿತ್ತು.