

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ತನ್ನನ್ನು ಗಡಿಪಾರು ಮಾಡಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ವಜಾಗೊಳಿಸಿದೆ.
ಪುತ್ತೂರು ವಿಭಾಗಾಧಿಕಾರಿ ಮೂರನೇ ಬಾರಿಗೆ ಹೊರಡಿಸಿದ್ದ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠ ಪ್ರಕಟಿಸಿದೆ.
ನಿಯಮಗಳ ಪ್ರಕಾರ ಅರ್ಜಿದಾರರು 2026ರ ಮಾರ್ಚ್ 13ರಂದು ಹೊರಡಿಸಲಾಗಿರುವ ಗಡಿಪಾರು ಆದೇಶ ಪ್ರಶ್ನಿಸಿ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಮೊದಲಿಗೆ ಗೃಹ ಕಾರ್ಯದರ್ಶಿಗೆ ಮೇಲ್ಮನವಿ ಸಲ್ಲಿಸಬೇಕು. ಇಲಾಖೆ ಮನವಿಯನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಆದ್ದರಿಂದ, ಈ ಅರ್ಜಿಯನ್ನು ಪುರಸ್ಕರಿಸಲಾಗದು ಎಂದು ನ್ಯಾಯಾಲಯ ತಿಳಿಸಿದೆ.
ಅರ್ಜಿದಾರರು ಮೇಲ್ಮನವಿ ಸಲ್ಲಿಸಬೇಕಿರುವ ಕಾರಣ ಸದ್ಯಕ್ಕೆ ಎರಡು ವಾರ ಗಡಿಪಾರು ಆದೇಶಕ್ಕೆ ಸಂಬಂಧಿಸಿದಂತೆ ತಿಮರೋಡಿ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಿದೆ. ಅರ್ಜಿದಾರರ ಪರ ವಕೀಲ ಎಂ ಆರ್ ಬಾಲಕೃಷ್ಣ ವಾದ ಮಂಡಿಸಿದ್ದರು.
ಅರ್ಜಿದಾರರು 1997ರಿಂದಲೂ ಹಲವು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ತಾನು ಸೌಜನ್ಯಾ ಸಾವಿನ ಪ್ರಕರಣಕ್ಕೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿಕೊಳ್ಳುತ್ತಾ ಸ್ಥಳೀಯವಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿದ್ದಾರೆ. ಇದರಿಂದಾಗಿ, ಬೆಳ್ತಂಗಡಿ ಪೊಲೀಸರು ಇತರ ಕೆಲಸಗಳಿಗಿಂತ ಹೆಚ್ಚಾಗಿ ಈ ವ್ಯಕ್ತಿಯಿಂದ ಉಂಟಾಗುತ್ತಿರುವ ಉಪದ್ರವಗಳ ನಿವಾರಣೆಯಲ್ಲೇ ಸಮಯ ಕಳೆಯುವಂತಾಗಿದೆ ಎಂದು ಸರ್ಕಾರ ಆಕ್ಷೇಪಿಸಿತ್ತು.