ಕಾರ್ಕಳ ಅನಂತಶಯನ ದೇವಾಲಯಕ್ಕೆ ಆಡಳಿತಾಧಿಕಾರಿ ನೇಮಕ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ದೇವಸ್ಥಾನಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ಆಯುಕ್ತರು 2025ರ ಡಿ.29ರಂದು ಹೊರಡಿಸಿರುವ ಆದೇಶವನ್ನು ದೇವಸ್ಥಾನದ ಮೊಕ್ತೇಸರ ವೇದವ್ಯಾಸ್ ಭಟ್ ಪ್ರಶ್ನಿಸಿದ್ದಾರೆ.
High Court of Karnataka
High Court of Karnataka
Published on

ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಅನಂತಶಯನ ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.

ದೇವಸ್ಥಾನಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ಆಯುಕ್ತರು 2025ರ ಡಿಸೆಂಬರ್ 29ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ದೇವಸ್ಥಾನದ ಮೊಕ್ತೇಸರರಾಗಿ ಆಯ್ಕೆಯಾಗಿರುವ ಕಾರ್ಕಳದ ವೇದವ್ಯಾಸ್ ಭಟ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ಪೀಠವು ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ಆಯುಕ್ತರು ಹಾಗೂ ಉಪ ಆಯುಕ್ತರು ಮತ್ತು ಆಡಳಿತಾಧಿಕಾರಿಗೆ ನೋಟಿಸ್ ಜಾರಿಗೊಳಿಸಿತು.

ಇದೇ ವಿಚಾರವಾಗಿ 2018ರಲ್ಲಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಈಗ ಸಲ್ಲಿಸಲಾಗಿರುವ ಅರ್ಜಿಯೊಂದಿಗೆ ಸೇರಿ ವಿಚಾರಣೆ ನಡೆಸುವ ಸಂಬಂಧ ರೋಸ್ಟರ್ ಪೀಠದ ಮುಂದೆ ಅರ್ಜಿಯನ್ನು ನಿಗದಿಪಡಿಸಿ ಆದೇಶಿಸಲು ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಮಂಡಿಸುವಂತೆ ರಿಜಿಸ್ಟ್ರಿಗೆ ನಿರ್ದೇಶನ ನೀಡಿದ ಪೀಠ ವಿಚಾರಣೆಯನ್ನು ಮುಂದೂಡಿತು.

ಸ್ಥಳೀಯ ಸಂಪ್ರದಾಯ ಮತ್ತು ಗ್ರಾಮಸ್ಥರ ಅಭಿಪ್ರಾಯದಂತೆ ದೇವಸ್ಥಾನಕ್ಕೆ 2002ರಲ್ಲಿ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಲಾಗಿತ್ತು. 2012ರಲ್ಲಿ ದೇವಸ್ಥಾನವನ್ನು ಮುಜರಾಯಿ ವ್ಯಾಪ್ತಿಯಿಂದ ಹೊರಗಿಡಲು ಮನವಿ ಮಾಡಲಾಗಿತ್ತು. ಸ್ಥಳೀಯರ ನಡುವೆ ವ್ಯಾಜ್ಯ ಉಂಟಾಗಿದ್ದರಿಂದ 2018ರ ಡಿಸೆಂಬರ್‌ 14ರಂದು ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅರ್ಜಿ ವಿಚಾರಣೆಗೆ ಬಾಕಿ ಇದೆ. ಈ ನಡುವೆ ವ್ಯವಸ್ಥಾಪನಾ ಮಂಡಳಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿತ್ತು. 2024ರ ಡಿಸೆಂಬರ್‌ 14ರಂದು ಇದನ್ನೂ ಸಹ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದೂ ಆ ಅರ್ಜಿಯು ಬಾಕಿ ಇದೆ. ಈ ನಡುವೆ ದೇವಸ್ಥಾನಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ 2025ರ ಡಿಸೆಂಬರ್‌ 29ರಂದು ಆದೇಶ ಹೊರಡಿಸಲಾಗಿದೆ. ಇದನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

Kannada Bar & Bench
kannada.barandbench.com