ವಿಜಯಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಎಸ್.ಪಾಟೀಲ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.
ಸಚಿವ ಶಿವಾನಂದ ಪಾಟೀಲ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸುವಂತೆ ಕೋರಿ ಬಸನಗೌಡ ಪಾಟೀಲ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
ವಿಚಾರಣೆ ವೇಳೆ ಯತ್ನಾಳ್ ಪರ ವಕೀಲ ವೆಂಕಟೇಶ್ ಪಿ.ದಳವಾಯಿ ಅವರು “ದೂರಿನಲ್ಲಿ ತಿಳಿಸಿರುವಂತೆ ಸಚಿವ ಶಿವಾನಂದ ಪಾಟೀಲರ ಬಗ್ಗೆ ಅರ್ಜಿದಾರರು ವೈಯಕ್ತಿಕ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಐಪಿಸಿ ಸೆಕ್ಷನ್ 171ಜಿ ಮತ್ತು ಜನಪ್ರತಿನಿಧಿ ಕಾಯಿದೆ–1950ರ ಸೆಕ್ಷನ್ 123 (4) ಪ್ರಕಾರ ಅಭ್ಯರ್ಥಿ ವಿರುದ್ಧ ಮಾನಹಾನಿ ಹೇಳಿಕೆ ನೀಡಿದರೆ ಅಪರಾಧವಾಗುತ್ತದೆ. ಆದರೆ, ಬಾಗಲಕೋಟೆ ಕ್ಷೇತ್ರದಲ್ಲಿ ಸಂಯುಕ್ತಾ ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೇ ಹೊರತು ಶಿವಾನಂದ ಪಾಟೀಲ ಅಲ್ಲ. ಹೀಗಾಗಿ, ಈ ನಿಯಮವನ್ನು ಯತ್ನಾಳ್ ಅವರಿಗೆ ಅನ್ವಯಿಸಿ ಪ್ರಕರಣ ನಡೆಸುವುದು ಕಾನೂನಿನ ದುರ್ಬಳಕೆ ಆಗುತ್ತದೆ. ಹೀಗಾಗಿ, ಅರ್ಜಿದಾರರ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಪಡಿಸಬೇಕು” ಎಂದು ಕೋರಿದರು.
ಪ್ರಕರಣದ ಹಿನ್ನೆಲೆ: ಕಳೆದ ಲೋಕಸಭೆ ಚುನಾವಣಾ ಸಮಾವೇಶದ ಸಂದರ್ಭದಲ್ಲಿ ಯತ್ನಾಳ್ ನನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿವಾನಂದ ಪಾಟೀಲ್ ಅವರು, ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಅದನ್ನು ವಿಚಾರಣೆಗೆ ಪರಿಗಣಿಸಿದ್ದ ವಿಚಾರಣಾಧೀನ ನ್ಯಾಯಾಲಯ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ 2024ರ ಜುಲೈ 6ರಂದು ಆದೇಶಿಸಿತ್ತು. ಇದರಿಂದ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.