ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ ನಿರಾಕರಿಸಿದ ಹೈಕೋರ್ಟ್‌

ವಾರಕ್ಕೊಮ್ಮೆ ಪವಿತ್ರಾ, ನಾಗರಾಜ್‌ ಮತ್ತು ಲಕ್ಷ್ಮಣಗೆ ಮನೆ ಊಟ ಪಡೆಯಲು ಜೈಲು ಅಧಿಕಾರಿಗಳಿಗೆ ನಿರ್ದೇಶಿಸಿ ಬೆಂಗಳೂರಿನ ಸತ್ರ ನ್ಯಾಯಾಲಯ ಹೊಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.
Darshan Thoogudeepa and Pavithra GowdaImage
Darshan Thoogudeepa and Pavithra GowdaImage source: Instagram, Facebook
Published on

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜೈಲಿನಲ್ಲಿರುವ ಪವಿತ್ರಾ ಗೌಡ, ನಾಗರಾಜ್‌ ಮತ್ತು ಲಕ್ಷ್ಮಣ್‌ಗೆ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದ ಬೆಂಗಳೂರಿನ ಸತ್ರ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ತಡೆಯಾಜ್ಞೆ ನೀಡಿದೆ.

ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು 2025ರ ಡಿಸೆಂಬರ್‌ 29 ಮತ್ತು 2026ರ ಜನವರಿ 12ರಂದು ಹೊರಡಿಸಿರುವ ಆದೇಶ ರದ್ದು ಕೋರಿ ಪ್ರಕರಣದ ತನಿಖಾಧಿಕಾರಿಗಳಾದ ನಗರದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಆರೋಪಿಗಳಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಕಲ್ಪಿಸಬಾರದು ಎಂದು ಸುಪ್ರಿಂ ಕೋರ್ಟ್‌ ಆದೇಶಿಸಿದೆ. ಆದೇಶ ಉಲ್ಲಂಘನೆಯಾದರೆ ಅಧಿಕಾರಿಗಳು ಕ್ರಮ ಎದುರಿಸಬೇಕಾಗುತ್ತದೆ. ಇನ್ನೂ ವಿಶೇಷ ಸಂದರ್ಭದಲ್ಲಿ ಮಾತ್ರ ಮನೆ ಊಟಕ್ಕೆ ಅವಕಾಶವಿದೆ. ಕಾನೂನು ಮುಂದೆ ಎಲ್ಲರೂ ಒಂದೇ. ಒಬ್ಬೊಬ್ಬರಿಗೆ ಒಂದು ರೀತಿಯ ಸೌಲಭ್ಯ ಕಲ್ಪಿಸುವುದು ಕಾನೂನುಬಾಹಿರವಾಗುತ್ತದೆ. ಜೈಲು ಕೈಪಿಡಿಯ ನಿಯಮಗಳನ್ನು ಉಪೇಕ್ಷಿಸಿ ಮೂವರು ಆರೋಪಿಗಳಿಗೆ ಮನೆ ಊಟ ಒದಗಿಸಲು ಸತ್ರ ನ್ಯಾಯಾಲಯ ಆದೇಶಿಸಿರುವುದು ಸರಿಯಲ್ಲ ಎಂದು ಸರ್ಕಾರಿ ಅಭಿಯೋಜಕರು ವಾದಿಸಿದ್ದಾರೆ. ಈ ವಾದ ಪರಿಗಣಿಸಿ 57ನೇ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲಾಗುತ್ತಿದೆ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಪವಿತ್ರಾಗೌಡ, ನಾಗರಾಜು ಮತ್ತು ಲಕ್ಷ್ಮಣ್‌ಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

Also Read
ಜೈಲಿನಲ್ಲಿರುವ ಕೈದಿಗಳಿಗೆ ಮನೆ ಊಟ: ಮಾರ್ಗಸೂಚಿ ರೂಪಿಸಲು ಹೈಕೋರ್ಟ್‌ ನಿರ್ಧಾರ; ನಾಳೆ ವಿಚಾರಣೆ

ಇದಕ್ಕೂ ಮುನ್ನ, ಅರ್ಜಿದಾರರ ಪರ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಪ್ರಕರಣದ ಆರೋಪಿಗಳಿಗೆ ಯಾವುದೇ ವಿಶೇಷ ಸೌಲಭ್ಯ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ, ಪವಿತ್ರಾ ಗೌಡ ಸೇರಿ ಮೂವರು ಆರೊಪಿಗಳಿಗೆ ವಾರಕೊಮ್ಮೆ ಮನೆ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಜೈಲು ಅಧಿಕಾರಿಗಳಿಗೆ ಸತ್ರ ನ್ಯಾಯಾಲಯವು ನಿರ್ದೇಶಿಸಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆಯಾದರೆ ಅಧಿಕಾರಿಗಳು ಕ್ರಮ ಎದುರಿಸಬೇಕಾಗುತ್ತದೆ. ಇನ್ನೂ ಜೈಲು ಆಹಾರ ಗುಣಮಟ್ಟದ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಎಫ್‌ಎಸ್‌ಎಸ್‌ಎಐ) ಪ್ರಾಧಿಕಾರವು ನಾಲ್ಕು ಸ್ಟಾರ್‌ನ ಸರ್ಟಿಫಿಕೇಟ್‌ ನೀಡಿದೆ. ವೈದ್ಯರು ಸೂಚಿಸಿದರೆ ಮಾತ್ರ ಮನೆ ಊಟಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಹೀಗಾಗಿ, ಸತ್ರ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಬೇಕು” ಎಂದು ಕೋರಿದರು.

ವಿಚಾರಣೆಯ ಒಂದು ಹಂತದಲ್ಲಿ ಪೀಠವು “ಸುಪ್ರೀಂ ಕೋರ್ಟ್‌ ತೀರ್ಪಿದ್ದರೂ ವಿಚಾರಣಾ ನ್ಯಾಯಾಲಯ ಹೇಗೆ ಆದೇಶ ಮಾಡಿತು” ಎಂದು ಪ್ರಶ್ನಿಸಿತು.

Kannada Bar & Bench
kannada.barandbench.com