[ತೃತೀಯ ಲಿಂಗಿಗಳಿಗೆ ಸಮತಲ ಮೀಸಲಾತಿ] ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ ನೀಡಿದ ಹೈಕೋರ್ಟ್‌

ಸರ್ಕಾರದ ತಿದ್ದುಪಡಿ ನಿಯಮವು ಕೇವಲ ಸರ್ಕಾರಿ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತದೆ. ಸರ್ಕಾರದ ಇತರೆ ಪ್ರಾಧಿಕಾರ ಹಾಗೂ ನಿಗಮ-ಮಂಡಳಿಗಳ ನೇಮಕಾತಿಯಲ್ಲಿ ಈ ತಿದ್ದುಪಡಿ ನಿಯಮವನ್ನು ಜಾರಿಗೆ ತರಲು ನಿರ್ದೇಶನ ನೀಡಬೇಕು ಎಂದು ಕೋರಿದ ಅರ್ಜಿದಾರರು.
Karnataka HC and LGBT
Karnataka HC and LGBT
Published on

ಸರ್ಕಾರದ ಪ್ರಾಧಿಕಾರ, ನಿಗಮ ಮತ್ತು ಮಂಡಳಿಗಳ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸುವಂತೆ ಸಲಹೆ ನೀಡುವಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಎರಡು ವಾರಗಳ ಕಾಲಾವಕಾಶ ನೀಡಿದೆ.

ಲೈಂಗಿಕ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಗಮ ಸರ್ಕಾರೇತರ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ʼಜೀವಾʼ ಎನ್‌ಜಿಓ ಸಲ್ಲಿಸಿರುವ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ಕಾಲಾವಕಾಶ ನೀಡಿದೆ.

ವಿಚಾರಣೆ ವೇಳೆ ಜೀವಾ ಎನ್‌ಜಿಒ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ ಅವರು “ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲಾ ವರ್ಗಗಳಲ್ಲಿ ಶೇ. 1ರಷ್ಟು ಸಮತಲ ಮೀಸಲಾತಿ ಕಲ್ಪಿಸಲು ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆಗೊಳಿಸಿದೆ. ಈ ಸಂಬಂಧ 2021ರ ಜುಲೈ 6ರಂದು ಅಂತಿಮ ಅಧಿಸೂಚನೆ ಪ್ರಕಟಿಸಿದೆ” ಎಂದು ಪೀಠದ ಗಮನಕ್ಕೆ ತಂದರು.

Also Read
ನಿಗಮ, ಮಂಡಳಿಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿದ ಕರ್ನಾಟಕ ಹೈಕೋರ್ಟ್‌

ಅಲ್ಲದೇ, ಸರ್ಕಾರದ ತಿದ್ದುಪಡಿ ನಿಯಮವು ಕೇವಲ ಸರ್ಕಾರಿ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತದೆ. ಸರ್ಕಾರದ ಇತರೆ ಪ್ರಾಧಿಕಾರ ಹಾಗೂ ನಿಗಮ-ಮಂಡಳಿಗಳ ನೇಮಕಾತಿಯಲ್ಲಿ ಈ ತಿದ್ದುಪಡಿ ನಿಯಮವನ್ನು ಜಾರಿಗೆ ತರಲು ನಿರ್ದೇಶನ ನೀಡಬೇಕು ಎಂಬುದು ನಮ್ಮ ಮನವಿಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಪ್ರಾಧಿಕಾರ, ನಿಗಮ-ಮಂಡಳಿಗಳಿಗೆ ಸಲಹೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೆಪ್ಟೆಂಬರ್‌ 22ರಂದು ನಾಲ್ಕು ವಾರ ಕಾಲಾವಕಾಶ ನೀಡಿ ಹೈಕೋರ್ಟ್ ಆದೇಶಿಸಿತ್ತು. ಈ ಕುರಿತು ಸದ್ಯ ಸರ್ಕಾರ ಉತ್ತರಿಸಬೇಕಿದೆ ಎಂದು ತಿಳಿಸಿದರು.

ಇದಕ್ಕೆ ಸರ್ಕಾರಿ ವಕೀಲರು ಉತ್ತರಿಸಿ, ನ್ಯಾಯಾಲಯದ ಆದೇಶ ಪಾಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿಗೆ ಒಪ್ಪಿದ ಪೀಠ, 2021ರ ಸೆಪ್ಟೆಂಬರ್‌ 22ರಂದು ನ್ಯಾಯಾಲಯ ನೀಡಿದ ಆದೇಶ ಪಾಲಿಸಲು ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

Kannada Bar & Bench
kannada.barandbench.com