ಕೆರೆ ಜಾಗದಲ್ಲಿ ಅಕ್ರಮವಾಗಿ ಕಾಲೇಜು ಕಟ್ಟಡ ನಿರ್ಮಾಣ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಇನ್‌ಫಿನಿಟಿ ಲರ್ನಿಂಗ್ ಫೌಂಡೇಷನ್ ಅಧ್ಯಕ್ಷ ಬಿ ಸುಮಂತ್ ಕುಮಾರ್ ಜೈನ್ 2020ರಲ್ಲಿ ನಾಲ್ಕು ಮಹಡಿಯ ಕಟ್ಟಡ ನಿರ್ಮಿಸಿದ್ದಾರೆ. ಅಲ್ಲಿ ಎಕ್ಸೆಲ್ ಪಿಯು ಕಾಲೇಜು ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿರುವ ಅರ್ಜಿದಾರರು.
Chief Justice N V Anjaria and K V Aravind, Karnataka HC
Chief Justice N V Anjaria and K V Aravind, Karnataka HC
Published on

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಪ್ರದೇಶದಲ್ಲಿ ಖಾಸಗಿ ವ್ಯಕ್ತಿ ಅಕ್ರಮವಾಗಿ ಕಾಲೇಜು ಕಟ್ಟಡ ನಿರ್ಮಿಸಿರುವುದನ್ನು ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.

ತೆಂಕಕಾರಂದೂರು ಗ್ರಾಮದ ನಿವಾಸಿ ಅಶೋಕ್ ಆಚಾರ್ಯ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ, ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ ಉಪ ವಿಭಾಗದ ಸಹಾಯಕ ಕಾರ್ಯಕಾರಿ ಎಂಜಿನಿಯರ್, ಸಣ್ಣ ನೀರಾವರಿ ಹಾಗೂ ಎಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ ಉಪ ವಿಭಾಗದ ಕಾರ್ಯಕಾರಿ ಎಂಜಿನಿಯರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕುವೆಟ್ಟು ಗ್ರಾಮ ಪಂಚಾಯಿತಿ ಪಿಡಿಒ, ಕಟ್ಟಡದ ಮಾಲೀಕ ಬಿ. ಸುಮಂತ್ ಕುಮಾರ್ ಜೈನ್‌ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟೆಂಬರ್‌ 18ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ಕೆರೆ ಪ್ರದೇಶದ 30 ಮೀಟರ್ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂಬ ನಿಯಮವಿದೆ. ಗುರುವಾಯನ ಕೆರೆ ಪ್ರದೇಶಕ್ಕೆ ಹೊಂದಿಕೊಂಡಂತೆ ಸರ್ವೇ ನಂ. 13/2, 13/10, 13/16, 13/17ಗಳಲ್ಲಿ ಕೆರೆಯ ಜಾಗವನ್ನು ಒತ್ತುವರಿ ಮಾಡಿ ಇನ್‌ಫಿನಿಟಿ ಲರ್ನಿಂಗ್ ಫೌಂಡೇಷನ್ ಅಧ್ಯಕ್ಷ ಬಿ. ಸುಮಂತ್ ಕುಮಾರ್ ಜೈನ್ 2020ರಲ್ಲಿ ನಾಲ್ಕು ಮಹಡಿಯ ಕಟ್ಟಡ ನಿರ್ಮಿಸಿದ್ದಾರೆ. ಅಲ್ಲಿ ಎಕ್ಸೆಲ್ ಪಿಯು ಕಾಲೇಜು ನಡೆಸುತ್ತಿದ್ದಾರೆ. ಮೇಲಾಗಿ ಈಗ ಕೆರೆಗೆ ಹೊಂದಿಕೊಂಡ ಸರ್ವೇ ನಂ.168/2 ಮತ್ತು 168/3ಗಳಲ್ಲಿ ಬಹುಮಹಡಿ ಕಟ್ಟಡ ನಿರ್ಮಿಸಲಾಗುತ್ತಿದೆ. ಆದ್ದರಿಂದ ಈ ಅಕ್ರಮ ಕಟ್ಟಡ ತೆರವುಗೊಳಿಸಬೇಕು ಹಾಗೂ ಪ್ರಗತಿಯಲ್ಲಿರುವ ಕಟ್ಟಡ ನಿರ್ಮಾಣ ಕಾರ್ಯಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Kannada Bar & Bench
kannada.barandbench.com