ಅಕ್ರಮ ಗನ್‌ ತಯಾರಿಕೆ, ಸ್ಫೋಟಕ ಸಂಗ್ರಹ ಪ್ರಕರಣ: ಆರೋಪಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು

ಒಂದು ವರ್ಷ ಮೂರು ತಿಂಗಳಿನಿಂದ ಜೈಲಿನಲ್ಲಿದ್ದೇನೆ. ಈಗಾಗಲೇ ತನಿಖೆ ಪೂರ್ಣಗೊಂಡು ಆರೋಪ ಪಟ್ಟಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಬೇಕು ಎಂಬ ಆರೋಪಿಯ ಕೋರಿಕೆ ಮಾನ್ಯ ಮಾಡಿದ ನ್ಯಾಯಾಲಯ.
Karnataka High Court
Karnataka High Court
Published on

ಅಕ್ರಮವಾಗಿ ಗನ್‌ಗಳನ್ನು ತಯಾರಿಸಿ ಮಾರಾಟ ಮಾಡಿದ ಹಾಗೂ ಸ್ಫೋಟಕಗಳನ್ನು ಸಂಗ್ರಹಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಒಂದು ವರ್ಷಕ್ಕೂ ಅಧಿಕ ಸಮಯದಿಂದ ನ್ಯಾಯಾಂಗ ಬಂಧನದಲ್ಲಿರುವ ವ್ಯಕ್ತಿಯೊಬ್ಬರಿಗೆ ಈಚೆಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ತುಮಕೂರಿನ ಊರ್ಡಿಗೆರೆ ಹೋಬಳಿಯ ದುರ್ಗದಹಳ್ಳಿಯ ಕೃಷ್ಣಪ್ಪ (43) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಮಾನ್ಯ ಮಾಡಿದೆ.

ವೃತ್ತಿಯಲ್ಲಿ ಕಾರ್ಪೆಂಟರ್ ಆಗಿರುವ ಅರ್ಜಿದಾರನ ವಿರುದ್ಧ ಸಿಂಗಲ್ ಬ್ಯಾರೆಲ್ ಗನ್‌ಗಳನ್ನು ತಯಾರಿಸಿ, ಪರವಾನಗಿ ಹೊಂದಿರದ ವ್ಯಕ್ತಿಗಳಿಗೆ (ಪ್ರಕರಣದ ಇತರ ಆರೋಪಿಗಳು) ಮಾರಾಟ ಮಾಡಿದ ಆರೋಪವಿದೆ. ಆತನಿಂದ ಕೆಲವು ಗನ್‌ಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. 2022ರ ಜನವರಿ 12ರಿಂದ ಅಂದರೆ ಕಳೆದ 1 ವರ್ಷ 3 ತಿಂಗಳಿಂದ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಪ್ರಕರಣದ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ. ವಿಚಾರಣಾಧೀನ ನ್ಯಾಯಾಲಯದ ವಿಚಾರಣೆಗಾಗಿ ಅರ್ಜಿದಾರನನ್ನು ಬಂಧಿಸಿಟ್ಟುಕೊಳ್ಳುವ ಅವಶ್ಯಕತೆ ಕಂಡುಬರುತ್ತಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.

ಆರೋಪಿಯು 2 ಲಕ್ಷ ರೂಪಾಯಿ ಮೊತ್ತದ ಬಾಂಡ್ ಹಾಗೂ ಅಷ್ಟೇ ಮೊತ್ತದ ಇಬ್ಬರ ಭದ್ರತೆ ಒದಗಿಸಬೇಕು. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷಿಗಳ ನಾಶಕ್ಕೆ ಯತ್ನಿಸಬಾರದು. ವಿಳಂಬರಹಿತವಾಗಿ ಪ್ರಕರಣದ ವಿಚಾರಣೆ ಎದುರಿಸಬೇಕು. ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಬಿಟ್ಟು ತೆರಳಬಾರದು ಎಂಬ ಷರತ್ತುಗಳನ್ನು ವಿಧಿಸಿರುವ ಹೈಕೋರ್ಟ್, ಆರೋಪಿ ಕೃಷ್ಣಪ್ಪನಿಗೆ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಹಿನ್ನೆಲೆ: ಅರ್ಜಿದಾರ ಹಾಗೂ ಮತ್ತೊಬ್ಬ ವ್ಯಕ್ತಿ ಗನ್‌ಗಳ ತಯಾರಿಕೆ, ಮಾರಾಟ ಹಾಗೂ ಸ್ಫೋಟಕಗಳ ಸಂಗ್ರಹದಂತಹ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಆಧಾರದಲ್ಲಿ 2022ರ ಜನವರಿ 12ರಂದು ಅರ್ಜಿದಾರನ ಮನೆಯ ಮೇಲೆ ಕ್ಯಾತಸಂದ್ರ ಠಾಣೆಯ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಪರವಾನಗಿ ಇಲ್ಲದ ಗನ್‌ಗಳು ಹಾಗೂ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿತ್ತು.

ಆರೋಪಿ ತಯಾರಿಸಿದ್ದ ಗನ್‌ಗಳನ್ನು ಪ್ರಕರಣದ 2ರಿಂದ 9ನೇ ಆರೋಪಿಗಳಿಗೆ ಮಾರಾಟ ಮಾಡಿದ್ದ ಹಿನ್ನೆಲೆಯಲ್ಲಿ ಅದೇ ದಿನ ಎಲ್ಲ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದರು. ಪ್ರಕರಣದ ಇತರೆ ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದರಾದರೂ, ಮೊದಲ ಆರೋಪಿ ಕೃಷ್ಣಪ್ಪಗೆ ಜಾಮೀನು ದೊರೆತಿರಲಿಲ್ಲ. ಇದರಿಂದ, ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿಯು ಕಳೆದ ಒಂದು ವರ್ಷ ಮೂರು ತಿಂಗಳಿನಿಂದ ಜೈಲಿನಲ್ಲಿದ್ದೇನೆ. ಈಗಾಗಲೇ ತನಿಖೆ ಪೂರ್ಣಗೊಂಡು ಆರೋಪ ಪಟ್ಟಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದರು.

Kannada Bar & Bench
kannada.barandbench.com