

ಅಕ್ರಮವಾಗಿ ಗಣಿ ಗುತ್ತಿಗೆ ಪರವಾನಗಿಗಳನ್ನು ನೀಡಿದ ಹಾಗೂ ಕಾನೂನುಬಾಹಿರವಾಗಿ ಗಣಿ ಗುತ್ತಿಗೆ ನವೀಕರಣ ಮಾಡಿರುವ ಆರೋಪದಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಆದೇಶಿಸುವಂತೆ ಮತ್ತು ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಏಪ್ರಿಲ್ 17ಕ್ಕೆ ಮುಂದೂಡಿದೆ.
ಬೆಂಗಳೂರಿನ ಉದ್ಯಮಿ ಎಂ ಪಿ ವೇಣುಗೋಪಾಲ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸಿದ್ದರಾಮಯ್ಯ ಪರ ಹಾಜರಿದ್ದ ಹಿರಿಯ ವಕೀಲ ಕೆ ಶಶಿಕಿರಣ್ ಶೆಟ್ಟಿ ಅವರು “ಅರ್ಜಿದಾರರ ಪರ ವಕೀಲರು ಸತತ ಗೈರು ಹಾಜರಾದ ಹಿನ್ನೆಲೆಯಲ್ಲಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ಈ ಹಿಂದೆ ವಜಾಗೊಳಿಸಿತ್ತು. ವಕೀಲರ ಮನವಿಯಂತೆ ಅರ್ಜಿಯನ್ನು ವಿಚಾರಣೆಗೆ ಮರು ಪರಿಗಣಿಸಲಾಗಿದೆ. ಆದರೆ, ಐದಾರು ಬಾರಿ ಕಾಲಾವಕಾಶ ಕೇಳಿದ್ದಾರೆ, ಈ ದಿನವೂ ಸಹ ಮತ್ತೆ ಕಾಲಾವಕಾಶ ಕೇಳುತ್ತಿದ್ದಾರೆ” ಎಂದರು.
ಇದೇ ವಿಚಾರವಾಗಿ ಈ ಹಿಂದೆ ರಾಮಮೂರ್ತಿ ಗೌಡ ಎಂಬುವರು ಖಾಸಗಿ ದೂರು (ಪಿಸಿಆರ್) ಸಲ್ಲಿಸಿದ್ದರು. ಆ ಖಾಸಗಿ ದೂರಿನಲ್ಲಿದ್ದ ವಿಷಯ ಮತ್ತು ಅಂಶಗಳನ್ನೇ ಪುಟ ಸಂಖ್ಯೆಗಳ ಸಮೇತ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ನಕಲು ಮಾಡಲಾಗಿದೆ. ಆ ಖಾಸಗಿ ದೂರಿನಲ್ಲೂ ಸಿದ್ದರಾಮಯ್ಯ ಸೇರಿ ಈಗಿನ ಪಿಐಎಲ್ ನಲ್ಲಿರುವ ಎಲ್ಲರನ್ನೂ ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಇದನ್ನು ಪರಿಗಣಿಸಿದ ಪೀಠ, ಖಾಸಗಿ ದೂರಿನ ಅಂಶಗಳನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ನಕಲು ಮಾಡಲಾಗಿದೆ ಎಂದು ಸಿಎಂ ಪರ ವಕೀಲರು ಹೇಳುತ್ತಿದ್ದಾರೆ. ಆದ್ದರಿಂದ ಖಾಸಗಿ ದೂರಿನ ಬಗ್ಗೆ ಸ್ಪಷ್ಟನೆ ನೀಡುವಂತೆ ಅರ್ಜಿದಾರರ ಪರ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.