ಅಕ್ರಮ ಅದಿರು ಟ್ರೇಡಿಂಗ್: ಸಚಿವ ನಾಗೇಂದ್ರ ವಿರುದ್ಧದ 16 ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಿಚಾರಣೆ ನಡೆಸಬೇಕಾದ ಪ್ರಕರಣಗಳನ್ನು ಸತ್ರ ನ್ಯಾಯಾಲಯ ತನ್ನಲ್ಲಿ ಉಳಿಸಿಕೊಂಡಿದೆ. 2009ರಲ್ಲಿ ನಡೆದಿದೆ ಎನ್ನಲಾದ ಅಪರಾಧಕ್ಕೆ, 2023ರಲ್ಲಿ ದೂರು ದಾಖಲಿಸಲಾಗಿದೆ ಎಂದು ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು.
Minister B Nagendra
Minister B Nagendra

ಅಕ್ರಮ ಕಬ್ಬಿಣದ ಅದಿರು ಮಾರಾಟಕ್ಕೆ ಸಂಬಂಧಿಸಿದಂತೆ ಯುವಜನ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಅವರ ವಿರುದ್ಧ ದಾಖಲಾಗಿರುವ 16 ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಜುಲೈ 14ಕ್ಕೆ ಮುಂದೂಡಿದೆ.

ಸಚಿವ ನಾಗೇಂದ್ರ ಅವರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಜಾ ಮಾಡುವಂತೆ ಕೋರಿ ಪ್ರತ್ಯೇಕವಾಗಿ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಗಳ ವಿಚಾರಣೆಯನ್ನು ಒಟ್ಟಾಗಿಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಏಸಕದಸ್ಯ ಪೀಠವು ವಿಚಾರಣೆ ನಡೆಸಿತು.

“ಲೋಕಾಯುಕ್ತ ವಿಶೇಷ ತನಿಖಾ ದಳವನ್ನು (ಎಸ್‌ಐಟಿ) ಪ್ರತಿನಿಧಿಸಿರುವ ವಕೀಲ ಬಿ ಎಸ್‌ ಪ್ರಸಾದ್‌ ಅವರಿಗೆ ಈಗಷ್ಟೇ ಅರ್ಜಿಗಳನ್ನು ಪೂರೈಸಲಾಗಿದೆ. ಈ ಸಂಬಂಧ ಸೂಚನೆ ಪಡೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ. ಸಂಬಂಧಿತ ಎಲ್ಲಾ ಪ್ರಕರಣಗಳನ್ನೂ ಜುಲೈ 14ಕ್ಕೆ ಪಟ್ಟಿ ಮಾಡಬೇಕು. ಈ ಹಿಂದೆ ಸಂಬಂಧಿತ ಪ್ರಕರಣಗಳಲ್ಲಿ ವಿಚಾರಣೆ ಮುಂದೂಡಿರುವಂತೆ ಈ ಪ್ರಕರಣಗಳ ವಿಚಾರಣೆಯನ್ನೂ ಮುಂದೂಡಲಾಗಿದೆ. ಮುಂದಿನ ವಿಚಾರಣೆಯಲ್ಲಿ ಯಾವುದೇ ಕಾರಣಕ್ಕೂ ವಿಚಾರಣೆ ಮುಂದೂಡುವುದಿಲ್ಲ” ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಆದೇಶ ಮಾಡಿದೆ.

ಸಚಿವ ನಾಗೇಂದ್ರ ಅವರ ಪರವಾಗಿ ವಕಾಲತ್ತು ಹಾಕಿರುವ ವಕೀಲ ಜಯಶ್ಯಾಮ್‌ ಜಯಸಿಂಹ ರಾವ್‌ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ. ನಾಯಕ್‌ ಅವರು “(ವಿಶೇಷ) ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಿಚಾರಣೆ ನಡೆಸಬೇಕಾದ ಪ್ರಕರಣಗಳನ್ನು ಸತ್ರ ನ್ಯಾಯಾಲಯದ (ವಿಶೇಷ) ನ್ಯಾಯಾಧೀಶರು ತಮ್ಮಲ್ಲಿ ಉಳಿಸಿಕೊಂಡಿದ್ದಾರೆ. ಇದು ಸುಪ್ರೀಂ ಕೋರ್ಟ್‌ ತೀರ್ಪಿಗೆ ವಿರುದ್ಧವಾಗಿದೆ. 2009ರಲ್ಲಿ ನಡೆದಿದೆ ಎನ್ನಲಾದ ಅಪರಾಧಕ್ಕೆ, 2023ರಲ್ಲಿ ದೂರು ದಾಖಲಿಸಲಾಗಿದೆ. ಇದು ವ್ಯಾಪ್ತಿ ಮೀರಿದೆ. ಹೀಗಾಗಿ, ಸಂಜ್ಞೇಯ ಪರಿಗಣಿಸುವ ವ್ಯಾಪ್ತಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಇಲ್ಲ. ಈ ಹಿಂದೆ, ಇದೇ ಆರೋಪಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳ ವಿಚಾರಣೆಯನ್ನು ಮುಂದೂಡಲಾಗಿದೆ. ನಾವು ಇಲ್ಲಿ ಪ್ರಕರಣಗಳಿಗೆ ತಡೆ ಕೋರುತ್ತಿಲ್ಲ” ಎಂದು ನ್ಯಾಯಾಲಯಕ್ಕೆ ವಿವರಿಸಿದರು.

ಎಸ್‌ಐಟಿ ಪ್ರತಿನಿಧಿಸಿದ್ದ ವಕೀಲ ಬಿ ಎಸ್‌ ಪ್ರಸಾದ್‌ ಅವರು “ಈಗಷ್ಟೇ ಅರ್ಜಿಗಳನ್ನು ಪೂರೈಸಲಾಗಿದೆ. ಅರ್ಜಿದಾರರು ವಿಚಾರಣೆಯಲ್ಲಿ ಭಾಗಿಯಾಗಲಿ” ಎಂದು ಪೀಠಕ್ಕೆ ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಅಂತಿಮವಾಗಿ ವಿಚಾರಣೆಯನ್ನು ಜುಲೈ 14ಕ್ಕೆ ನಿಗದಿಪಡಿಸಿದೆ.

ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಿರುವ ಮ್ಯಾಜಿಸ್ಟ್ರೇಟ್‌ ಮತ್ತು ಸತ್ರ ನ್ಯಾಯಾಲಯದಲ್ಲಿ ಅಕ್ರಮ ಅದಿರು ಮಾರಾಟ ಮತ್ತು ಇತರೆ ಆರೋಪದ ಮೇಲೆ ಸಚಿವ ನಾಗೇಂದ್ರ ವಿರುದ್ದ ದಾಖಲಾಗಿರುವ 16 ಪ್ರಕರಣಗಳು ಬಾಕಿ ಇವೆ.

ಗಣಿ ಮತ್ತು ಖನಿಜ ಅಭಿವೃದ್ಧಿ ಮತ್ತು ನಿಯಂತ್ರಣಗಳ (ಎಂಎಂಡಿಆರ್‌) ಕಾಯಿದೆ 1957ರ ಸೆಕ್ಷನ್‌ 21 ಮತ್ತು 23 ಜೊತೆಗೆ 4(1), 4(1ಎ) ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿ ಸಚಿವ ನಾಗೇಂದ್ರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಸಂಬಂಧ ಆರೋಪ ಪಟ್ಟಿಯನ್ನೂ ವಿಚಾರಣಾಧೀನ ನ್ಯಾಯಾಲಯಗಳಿಗೆ ಲೋಕಾಯುಕ್ತ ಎಸ್‌ಐಟಿ ಸಲ್ಲಿಸಿದೆ. ಈ ಪ್ರಕರಣಗಳು ವಿವಿಧ ಹಂತದಲ್ಲಿ ವಿಚಾರಣೆಗೆ ಒಳಪಟ್ಟಿವೆ. ಇವುಗಳನ್ನು ವಜಾ ಮಾಡುವಂತೆ ಕೋರಿ ಸಚಿವ ನಾಗೇಂದ್ರ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Related Stories

No stories found.
Kannada Bar & Bench
kannada.barandbench.com