ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ, ರಾಜ್ಯ ಸರ್ಕಾರಕ್ಕೆ ರಾಜಧನ ಖೋತಾ ಮತ್ತು ಇತರೆ ತೆರಿಗೆಗಳ ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಮೂವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ಆದೇಶಿಸಿದ್ದು, ಸಮನ್ಸ್ ಜಾರಿ ಮಾಡಿದೆ.
ತನಿಖಾಧಿಕಾರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿರುವ 63ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಅಥವಾ ಹಾಲಿ ಮತ್ತು ಮಾಜಿ ಸಂಸದರು, ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಪ್ರೀತ್ ಜೆ ಆದೇಶ ಮಾಡಿದ್ದಾರೆ.
“ಆರೋಪಿಗಳಾದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ರೆಡ್ಡಿ ಆಪ್ತ ಕಾರ್ಯದರ್ಶಿ ಮತ್ತು ದೇವಿ ಎಂಟರ್‌ಪ್ರೈಸಸ್ ಪಾಲುದಾರ ಕೆ ಮೆಹಫೂಜ್ ಅಲಿ ಖಾನ್ ಮತ್ತು ಓಬಳಾಪುರಂ ಮೈನಿಂಗ್ ಕಂಪೆನಿ ನಿರ್ದೇಶಕ ಮತ್ತು ಶ್ರೀ ಮಿನರಲ್ಸ್‌ನ ಪಾಲುದಾರ ಬಿ ವಿ ಶ್ರೀನಿವಾಸ ರೆಡ್ಡಿ ಅವರ ವಿರುದ್ಧ ಗಣಿ ಮತ್ತು ಖನಿಜ ಅಭಿವೃದ್ಧಿ ಮತ್ತು ನಿಯಂತ್ರಣಗಳ ಕಾಯಿದೆ 1957ರ ಸೆಕ್ಷನ್ 21 ಮತ್ತು 23 ಜೊತೆಗೆ 4(1), 4(1ಎ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು” ಎಂದು ನ್ಯಾಯಾಲಯವು ಆದೇಶದಲ್ಲಿ ದಾಖಲಿಸಿದೆ.
2009-10ನೇ ಸಾಲಿನಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ, ಮೆಹಫೂಜ್ ಅಲಿ ಖಾನ್ ಮತ್ತು ಶ್ರೀನಿವಾಸ ರೆಡ್ಡಿ ಸೇರಿದಂತೆ ಹಲವರ ಮನೆ, ಸಂಸ್ಥೆ, ಕಚೇರಿಗಳ ಮೇಲೆ ದಾಳಿ ನಡೆಸಿ, ಡಿಜಿಟಲ್ ದತ್ತಾಂಶ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬಿಣದ ಅದಿರನ್ನು ಹೊರತೆಗೆದು, ಅದನ್ನು ಅಕ್ರಮವಾಗಿ ಸಾಗಿಸಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿತ್ತು.
ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅಗತ್ಯ ಅನುಮತಿ ಪಡೆಯದೇ ಮತ್ತು ಸರ್ಕಾರಕ್ಕೆ ರಾಜಧನ ಮತ್ತಿತರ ಶುಲ್ಕ ಪಾವತಿಸದೆ ಆರೋಪಿಗಳು 1,25,419 ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಎನ್ ಶೇಕ್‌ಸಾಬ್ ಮೈನ್ಸ್ ಮತ್ತು ತಿರುಮಲ ಕನ್ವೇಯರ್ ಸಿಸ್ಟಮ್ಸ್‌ಗೆ ಮಾರಾಟ ಮಾಡಿದ್ದರು ಎಂಬುದು ತನಿಖೆಯ ಸಂದರ್ಭದಲ್ಲಿ ಪತ್ತೆಯಾಗಿತ್ತು. 1,25,419 ಮೆಟ್ರಿಕ್ ಟನ್ ಕಬ್ಬಿಣದ ಅದಿರಿನ ಪೈಕಿ 44,695 ಮೆಟ್ರಿಕ್ ಟನ್ ಕಬ್ಬಿಣದ ಅದಿರು ಮಾರಾಟ ಮಾಡಿದ್ದಕ್ಕೆ ಸಂಬಂಧಿಸಿದಂತೆ ಗದಿಗನೂರ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಬಾಕಿ ಇರುವ 80,724 ಮೆಟ್ರಿಕ್ ಟನ್ ಕಬ್ಬಿಣದ ಅದಿರಿಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ. ಶ್ರೀ ಮಿನರಲ್ಸ್ ಮೂಲಕ ಆರ್‌ಬಿಎಸ್‌ಎಸ್‌ಎನ್ ಕಂಪೆನಿಗೆ 4,557 ಮೆಟ್ರಿಕ್ ಟನ್ ಕಬ್ಬಿಣದ ಅದಿರು ಮಾರಿದ್ದರ ಪೈಕಿ 1,069 ಮೆಟ್ರಿಕ್ ಟನ್ ಕಬ್ಬಿಣದ ಅದಿರಿಗೆ ಸಂಬಂಧಿಸಿದಂತೆ ಯಾವುದೇ ಅನುಮತಿ ಅಥವಾ ಪರವಾನಗಿಯನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆಯಲಾಗಿರಲಿಲ್ಲ. ಈ ಮೂಲಕ ರಾಜ್ಯ ಸರ್ಕಾರಕ್ಕೆ 23,89,650 ರೂಪಾಯಿ ಆರ್ಥಿಕ ನಷ್ಟ ಉಂಟುಮಾಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಆರೋಪಪಟ್ಟಿ ಮತ್ತು ಸಂಬಂಧಿತ ದಾಖಲೆಯನ್ನು ತನಿಖಾಧಿಕಾರಿಯು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
2015ರಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 379, 409, 420, 468 ಮತ್ತು 471 ಜೊತೆಗೆ ಸೆಕ್ಷನ್ 120ಬಿ ಅಡಿ ದಾಖಲಾಗಿರುವ ಪ್ರಕರಣಗಳು ಹಾಲಿ ಖಾಸಗಿ ದೂರಿಗೆ ಸಂಬಂಧಿಸಿದ್ದಾಗಿದೆ. ಹೀಗಾಗಿ, ವಿಚಾರಣೆಯ ಸಂದರ್ಭದಲ್ಲಿ ತನಿಖಾಧಿಕಾರಿ ಸಲ್ಲಿಸಿರುವ ದಾಖಲೆಗಳನ್ನು ಪರಿಗಣಿಸುವಂತೆ ಅರ್ಜಿದಾರರು ಕೋರಿದ್ದಾರೆ. ತನಿಖಾಧಿಕಾರಿ ಸಲ್ಲಿಸಿರುವ ದಾಖಲೆಗಳಲ್ಲಿ ಮೇಲ್ನೋಟಕ್ಕೆ ವಾಸ್ತವ ಅಂಶಗಳಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟು, ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ.