ಅಕ್ರಮ ಮರಳು ಗಣಿಗಾರಿಕೆ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಸರ್ಕಾರದ ಪರ ವಕೀಲರು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಮತ್ತು ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೋರಿದರು. ಅರ್ಜಿಗೆ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಾಲಯ.
Home Minister G Parameshwar
Home Minister G Parameshwar
Published on

“ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ಒಂದು ದೊಡ್ಡ ದಂಧೆಯಾಗಿದ್ದು ಬಲಾಢ್ಯರು ಮತ್ತು ಪ್ರಭಾವಿಗಳು ಇದರಲ್ಲಿ ಇದ್ದಾರೆ” ಎಂದು ಅಕ್ರಮ ಮರಳು ಗಣಿಗಾರಿಕೆ ತಡೆಯುವ ವಿಚಾರದಲ್ಲಿ ಅಸಹಾಯಕತೆ ವ್ಯಕ್ತಪಡಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ವಿಧಾನಸಭೆ ಅಧಿವೇಶನದಲ್ಲಿ ನೀಡಿದ ಹೇಳಿಕೆ ಉಲ್ಲೇಖಿಸಿ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಆಧರಿಸಿ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ.

ಗೃಹ ಸಚಿವರ ಹೇಳಿಕೆ ಬಗ್ಗೆ ಜನವರಿ 28ರಂದು ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಆಧರಿಸಿ ಜನವರಿ 29ರಂದು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಳ್ಳಲು ನ್ಯಾಯಮೂರ್ತಿ ಡಿ ಕೆ ಸಿಂಗ್ ಅವರ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿತ್ತು. ಅಲ್ಲದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣಾ ವ್ಯಾಪ್ತಿ ಹೊಂದಿರುವ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಈ ಅರ್ಜಿ ಮಂಡಿಸಿಸುವಂತೆ ಹೈಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಈ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾ. ಸಿ ಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ರಾಜ್ಯ ಸರ್ಕಾರದ ಪರ ವಕೀಲರು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಮತ್ತು ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೋರಿದರು. ಅರ್ಜಿಗೆ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಪೀಠವು ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿತು.

ಗೃಹ ಸಚಿವರ ಹೇಳಿಕೆ ಏನಿತ್ತು: ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಅವರಿಗೆ ಬೆದರಿಕೆ ಹಾಕಿದ ವಿಚಾರಕ್ಕೆ ಗೃಹ ಸಚಿವರು ಸದನದಲ್ಲಿ ಪ್ರತಿಕ್ರಿಯೆ ನೀಡಿದ್ದರು. ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಅಕ್ರಮ ಮರಳು ಗಣಿಗಾರಿಕೆ ಒಂದು ದೊಡ್ಡ ದಂಧೆ. ಇದು ಸ್ವಲ್ಪ ಮುಜುಗರದ ಸಂಗತಿಯಾಗಿರುವುದರಿಂದ ನಾನು ಯಾವುದೇ ವಿವರಣೆಯನ್ನು ನೀಡುವುದಿಲ್ಲ ಅಥವಾ ಯಾರ ಹೆಸರನ್ನೂ ಹೆಸರಿಸುವುದಿಲ್ಲ. ನಾನು ಸೀಮಿತವಾಗಿ ಉತ್ತರವನ್ನು ಮಾತ್ರ ನೀಡಿದ್ದೇನೆ, ಆದರೆ ಇದು ಅನೇಕ ಪ್ರಭಾವಿ ಜನರನ್ನು ಒಳಗೊಂಡಿದೆ. ಈ ವಿಷಯವನ್ನು ಚರ್ಚಿಸಲು ನಾನು ಸಭೆ ಕರೆಯುತ್ತೇನೆ ಎಂದಿದ್ದರು.

Also Read
ಗೃಹ ಸಚಿವರೇ ಅಸಹಾಯಕರಾದರೆ ಸರ್ಕಾರ ಅಕ್ರಮ ಮರಳು ಗಣಿಗಾರಿಕೆ ತಡೆಯಲಿದೆ ಎಂಬ ಯಾವುದೇ ಭರವಸೆ ಹೊಂದಲಾಗದು: ಹೈಕೋರ್ಟ್‌

ಹೈಕೋರ್ಟ್ ಏನು ಹೇಳಿತ್ತು: ಗೃಹ ಸಚಿವರ ಹೇಳಿಕೆಯ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ್ದ ಹೈಕೋರ್ಟ್, ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ಎಲ್ಲ ಪಕ್ಷಗಳ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂದು ಗೃಹ ಸಚಿವರು ಸದನದಲ್ಲಿ ಹೇಳಿದ್ದನ್ನು ಮಾಧ್ಯಮಗಳು ವರದಿ ಮಾಡಿವೆ, ಇದಕ್ಕೆ ಕಡಿವಾಣ ಹಾಕುವ ವಿಚಾರದಲ್ಲಿ ಗೃಹ ಸಚಿವರು ಅಸಹಾಯಕತೆ ವ್ಯಕ್ತಪಡಿಸಿದ ಬಗ್ಗೆಯೂ ಮಾಧ್ಯಮಗಳು ವರದಿ ಮಾಡಿವೆ. ಮೈನಿಂಗ್ ಮಾಫಿಯಾಗೆ ಕಡಿವಾಣ ಹಾಕಲು ಈ ರೀತಿ ಒಬ್ಬ ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದರೆ, ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ರಾಜ್ಯದ ಆಡಳಿತ ಯಂತ್ರದಿಂದ ತಡೆಯಬಹುದು ಎಂಬ ನಿರೀಕ್ಷೆಯಿಲ್ಲ. ಇದೊಂದು ಗಂಭೀರ ವಿಷಯವಾಗಿದ್ದು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಕೇಂದ್ರ ತನಿಖಾ ದಳ ಅಥವಾ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಯಬೇಕಾಗಿದೆ ಎಂದು ನ್ಯಾ. ಡಿ ಕೆ ಸಿಂಗ್ ನೇತೃತ್ವದ ವಿಭಾಗೀಯ ಪೀಠ ಜನವರಿ 29ರಂದು ಹೇಳಿತ್ತು.

Kannada Bar & Bench
kannada.barandbench.com