ಕೋಟ್ಯಂತರ ರೂಪಾಯಿಯನ್ನು ಅಕ್ರಮವಾಗಿ ಮೂರನೇ ವ್ಯಕ್ತಿಗೆ ವರ್ಗಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಕನ್ನಡದ ಖಾಸಗಿ ಸುದ್ದಿ ವಾಹಿನಿಯೊಂದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಗಂಗಾಧರಪ್ಪ ಮುನೀಂದ್ರ ಕುಮಾರ್ ಅಲಿಯಾಸ್ ಜಿ ಎಂ ಕುಮಾರ್‌ಗೆ ಬೆಂಗಳೂರಿನ ಸತ್ರ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನನ್ನು ರದ್ದುಪಡಿಸಿರುವ ಕರ್ನಾಟಕ ಹೈಕೋರ್ಟ್, ಆರೋಪಿಯನ್ನು ಕೂಡಲೇ ವಶಕ್ಕೆ ಪಡೆದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವಂತೆ ಸಿಸಿಬಿ ಪೊಲೀಸರಿಗೆ ಆದೇಶಿಸಿದೆ.
ಕುಮಾರ್‌ಗೆ ನೀಡಲಾಗಿರುವ ಜಾಮೀನು ಪ್ರಶ್ನಿಸಿ ಈಗಲ್ ಸೈಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ನಿರ್ದೇಶಕ ಅಶ್ವಿನ್ ಮಹೇಂದ್ರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ಏಕಸದಸ್ಯ ಪೀಠ ಪುರಸ್ಕರಿಸಿದ್ದು, ಕುಮಾರ್‌ಗೆ 19ರಂದು ಮಂಜೂರಾಗಿದ್ದ ಜಾಮೀನನ್ನು ರದ್ದುಪಡಿಸಿದೆ.
ಆರೋಪಿಯ ಬಂಧನದ ಬಗ್ಗೆ ಕೈಗೊಳ್ಳಲಾದ ಕ್ರಮಗಳ ವರದಿಯನ್ನು ತನಿಖಾಧಿಕಾರಿಯು ವಿಜಯನಗರ ಪೊಲೀಸ್ ಠಾಣೆ ಅಥವಾ ಸಿಸಿಬಿ ಪೊಲೀಸರಿಗೆ ನೀಡಬೇಕು ಎಂದು ಪೀಠ ಆದೇಶದಲ್ಲಿ ವಿವರಿಸಿದೆ. ಅಶ್ವಿನ್ ಮಹೇಂದ್ರ ಪರ ಪಿ ಉಸ್ಮಾನ್ ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ: ಖಾಸಗಿ ಸುದ್ದಿ ವಾಹಿನಿ ನಡೆಸುತ್ತಿರುವ ಈಗಲ್ ಸೈಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಿಂದ ಕೋಟ್ಯಂತರ ರೂಪಾಯಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪದ ಪ್ರಕರಣದಲ್ಲಿ ಜಿ ಎಂ ಕುಮಾರ್ ವಿರುದ್ಧ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ 2022ರಲ್ಲಿ ದೂರು ದಾಖಲಾಗಿತ್ತು. ನಂಬಿಕೆ ದ್ರೋಹ ಮತ್ತು ವಂಚನೆ ಅಪರಾಧದ ತನಿಖೆ ನಡೆಸಿದ್ದ ಪೊಲೀಸರು ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಈ ಸಂಬಂಧ ಜಿ ಎಂ ಕುಮಾರ್ ನಿರೀಕ್ಷಣಾ ಜಾಮೀನು ಕೋರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ 2023ರ ಆಗಸ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿತ್ತು. ನಂತರ ಪೊಲೀಸರು ಆರೋಪಿಯನ್ನು 2023ರ ನವೆಂಬರ್ 25ರಂದು ಬಂಧಿಸಿದ್ದರು. ಕೋರ್ಟ್ ನ್ಯಾಯಾಂಗ ವಶಕ್ಕೆ ಒಪ್ಪಿಸಿತ್ತು. ಅನಾರೋಗ್ಯದ ಕಾರಣ ನೀಡಿದ್ದ ಆರೋಪಿಯು ಜೈಲುವಾಸದ ಬದಲಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ, ಬೆಂಗಳೂರಿನ 56ನೇ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ 2023ರ ಡಿಸೆಂಬರ್ 13ರಂದು ಕುಮಾರ್‌ಗೆ ಜಾಮೀನು ಮಂಜೂರು ಮಾಡಿತ್ತು.