ಬಹುಕೋಟಿ ಐ ಮಾನಿಟರಿ ಅಡ್ವೈಸರಿ (ಐಎಂಎ) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ತನಿಖಾ ಸಂಸ್ಥೆಗಳಾದ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯದೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದ್ದು, ಈ ಸಂಬಂಧದ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಲೇವಾರಿ ಮಾಡಿದೆ.
ಐಎಂಎ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಹೂಡಿಕೆದಾರರ ಹಣ ಹಿಂದಿರುಗಿಸಲು ಸರ್ಕಾರ ಮತ್ತು ಐಎಎಂ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಇಕ್ಬಾಲ್ ಅಹ್ಮದ್ ಮತ್ತಿತರರು ಸಲ್ಲಿಸಿದ್ದ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
“ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ತನಿಖೆ ಪೂರ್ಣಗೊಳಿಸಿ ವಿಚಾರಣಾಧೀನ ನ್ಯಾಯಾಲಯಕ್ಕೆ ಅಂತಿಮ ತನಿಖಾ ವರದಿ ಸಲ್ಲಿಸಿದೆ. ಹಾಗಾಗಿ ಪಿಐಎಲ್‌ಗಳನ್ನು ಸಲ್ಲಿಸಿದ್ದ ಉದ್ದೇಶವು ಈಡೇರಿಕೆಯಾಗಿದೆ. ವಿಚಾರಣಾ ನ್ಯಾಯಾಲಯದ ಮುಂದೆ ಪ್ರಕರಣ ಇರುವಾಗ ಹೈಕೋರ್ಟ್‌ನಲ್ಲಿ ಈ ಅರ್ಜಿಗಳು ಬಾಕಿ ಉಳಿಸಿಕೊಳ್ಳುವ ಅಗತ್ಯ ಇಲ್ಲ” ಎಂದು ಪೀಠ ಅಭಿಪ್ರಾಯಪಟ್ಟಿತು.
“ಸಕ್ಷಮ ಪ್ರಾಧಿಕಾರವು ಕೇಂದ್ರೀಯ ತನಿಖಾ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಪ್ರಕರಣ ಸಂಬಂಧ ಅಗತ್ಯವಿರುವ ಮುಂದಿನ ಕಾನೂನು ಕ್ರಮ ಕೈಗೊಳ್ಳಬಹುದು” ಎಂದು ನಿರ್ದೇಶಿಸಿದ ಪೀಠವು ಎಲ್ಲಾ ಅರ್ಜಿಗಳನ್ನು ಇತ್ಯರ್ಥಪಡಿಸಿತು.
ಇದಕ್ಕೂ ಮುನ್ನ ಸಿಬಿಐ ಪರ ವಕೀಲ ಪಿ ಪ್ರಸನ್ನ ಕುಮಾರ್ ಅವರು “ಪ್ರಕರಣದ ಕುರಿತು ಈಗಾಗಲೇ ಸಿಬಿಐ ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಸದ್ಯ ಪ್ರಕರಣವು ವಿಚಾರಣಾ ನ್ಯಾಯಾಲಯದ ಮುಂದಿದೆ” ಎಂದರು. ಜಾರಿ ನಿರ್ದೇಶನಾಲಯದ ಪರ ವಕೀಲರು “ಪ್ರಕರಣದ ಸಂಬಂಧ ಪ್ರಾಸಿಕ್ಯೂಷನ್ ಕ್ರಮ ಜರುಗಿಸಲಾಗುತ್ತಿದೆ. ಈ ಸಂಬಂಧ ವರದಿ ಸಲ್ಲಿಸಲಾಗಿದೆ” ಎಂದು ಪೀಠದ ಗಮನಸೆಳೆದರು.
ಅರ್ಜಿದಾರರ ಪರ ವಕೀಲ ಜಿ ಆರ್ ಮೋಹನ್ ಅವರು “ಪ್ರಕರಣ ಸಂಬಂಧ ಐಎಂಎ ಕಂಪೆನಿಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ʼಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತರಕ್ಷಣಾ ಕಾಯಿದೆ-2004ʼ (ಕೆಪಿಐಡಿ ಕಾಯಿದೆ) ಅನ್ವಯ ಹೈಕೋರ್ಟ್ ಸಕ್ಷಮ ಪ್ರಾಧಿಕಾರ ನೇಮಕಕ್ಕೆ ಆದೇಶಿಸಿದೆ. ಅದರಂತೆ ಸಕ್ಷಮ ಪ್ರಾಧಿಕಾರದ ಅಧಿಕಾರಿ ನೇಮಕಗೊಂಡಿದ್ದು, ಈಗಾಗಲೇ ಐಎಂಎಗೆ ಸಂಬಂಧಿಸಿದ ಕೆಲ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಅವರು ಇನ್ನೂ ಕ್ರಮ ಕೈಗೊಳ್ಳಬೇಕಿದೆ” ಎಂದರು.