ಮುಂಬೈ ಪೊಲೀಸರು ದಾಖಲಿಸಿರುವ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕಿರೀಟ್ ಸೋಮಯ್ಯ ಅವರು ಬಾಂಬೆ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಯುದ್ಧವಿಮಾನ ವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ಅನ್ನು ನೌಕಾ ಸೇವೆಯಿಂದ ನಿವೃತ್ತಿಗೊಳಿಸಿದ ನಂತರ ಕಳಚಿಹಾಕದೆ ರಕ್ಷಿಸಿ ವಸ್ತುಸಂಗ್ರಹಾಲಯವಾಗಿ ಮಾರ್ಪಡಿಸಲು ಸಂಗ್ರಹಿಸಿದ್ದ ₹ 50 ಕೋಟಿಗೂ ಹೆಚ್ಚು ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸೋಮಯ್ಯ ಮತ್ತು ಅವರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ನೌಕೆಯನ್ನು ಉಳಿಸಿ ಅದನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲಾಗುವುದು ಎಂದು ಹೇಳಿ ನಿಧಿ ಸಂಗ್ರಹಿಸಲಾಗಿತ್ತು. ತಾನು ದೇಣಿಗೆ ನೀಡಿದ ಹಣಕ್ಕೆ ರಸೀತಿ ನೀಡಿಲ್ಲ ಎಂದು ಸೇನಾ ಅಧಿಕಾರಿಯೊಬ್ಬರು ಟ್ರಾಂಬೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮುಂಬೈ ಪೊಲೀಸರು ಸಮನ್ಸ್ ನೀಡಿದ ನಂತರ, ಸಮನ್ಸ್‌ಗೆ ಪ್ರತಿಕ್ರಿಯಿಸುವ ಬದಲು, ಅರ್ಜಿದಾರರು ನಿರೀಕ್ಷಣಾ ಜಾಮೀನಿಗಾಗಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು. ಹೆಚ್ಚುವರಿ ಸೆಷನ್ಸ್ ರಾಜಕೀಯ ದ್ವೇಷದಿಂದ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು ಈ ಹಿನ್ನೆಲೆಯಲ್ಲಿ ತಮಗೆ ರಕ್ಷಣೆ ನೀಡಬೇಕು ಎಂದು ಅವರು ಕೋರಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಆರ್ ಎನ್ ರೋಕಡೆ ಸೋಮವಾರ ಸೋಮಯ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರು.