
ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗ ಈಚೆಗೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರು ತಮ್ಮ ಅಮಾನತು ಪ್ರಶ್ನಿಸಿ ಈಚೆಗೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದಾರೆ.
ಜೂನ್ 4ರ ಘಟನೆಯಲ್ಲಿ ಆರ್‌ಸಿಬಿ ವಿಜಯೋತ್ಸವಕ್ಕೂ ಮುನ್ನ 11 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಜ್ಯ ಸರ್ಕಾರವು ಬೆಂಗಳೂರು ಜಿಲ್ಲಾಧಿಕಾರಿ ಜಿ ಜಗದೀಶ್ ಅವರ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿತ್ತು. ಅಲ್ಲದೇ, ಮೂವರು ಐಪಿಎಸ್ ಅಧಿಕಾರಿಗಳೂ ಸೇರಿ ಐವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜೂನ್ 5ರಂದು ಅಮಾನತುಗೊಳಿಸಿತ್ತು.
ಅಖಿಲ ಭಾರತ ಸೇವೆಗಳು (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು 1969, ನಿಯಮ 3(1)(ಎ) ಅಡಿ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಕೇಂದ್ರೀಯ ವಿಭಾಗದ ಡಿಸಿಪಿ ಶೇಖರ್ ಎಚ್. ತೆಕ್ಕಣ್ಣವರ್ ಅವರನ್ನು ಅಮಾನತು ಮಾಡಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ಪ್ರಕ್ರಿಯೆ) ನಿಯಮಗಳು 1965, ನಿಯಮ 5ರ ಅಡಿ ಕಬ್ಬನ್ ಪಾರ್ಕ್ ಎಸಿಪಿ ಸಿ ಬಾಲಕೃಷ್ಣ ಮತ್ತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಎ ಕೆ ಗಿರೀಶ್ ಅವರ ಕರ್ತವ್ಯ ಲೋಪದಿಂದ ಮೇಲ್ನೋಟಕ್ಕೆ ದುರ್ಘಟನೆ ಸಂಭವಿಸಿದೆ ಎಂದು ಸರ್ಕಾರವು ಅಮಾನತು ಮಾಡಿತ್ತು.