
ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡುವ ಮುನ್ನ ದೂರುದಾರರಿಗೆ ಅಥವಾ ಸಂತ್ರಸ್ತೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಬೇಕೇ ಎಂಬ ವಿಚಾರವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ [ಸುರೇಶ್ ಬಾಬು ಕೆವಿ ಮತ್ತು ಕೇರಳ ಸರ್ಕಾರ ನಡುವಣ ಪ್ರಕರಣ].
ಮೇಲ್ಮನವಿದಾರ-ಆರೋಪಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿ ಕೇರಳ ಹೈಕೋರ್ಟ್ ಕಳೆದ ಏಪ್ರಿಲ್‌ನಲ್ಲಿ ನೀಡಿದ್ದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು.
ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ ಬಳಿಕ ತನಿಖೆಗೆ ಆರೋಪಿ ಅಡ್ಡಿಪಡಿಸಿಲ್ಲ ಎಂಬುದನ್ನು ಪರಿಗಣಿಸಿದ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡುವ ಮುನ್ನ ಸಂತ್ರಸ್ತೆಯ ವಾದ ಆಲಿಸಿಲ್ಲ ಎಂಬ ಏಕೈಕ ಕಾರಣಕ್ಕೆ ಆರೋಪಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿತ್ತು.
ಇದರ ವಿರುದ್ಧ ಆರೋಪಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರಿದ್ದ ವಿಭಾಗೀಯ ಪೀಠ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿತು.
ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 (2) (ಎನ್) (ಅತ್ಯಾಚಾರ) ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿತ್ತು.
ಆರೋಪಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಆರ್ ಬಸಂತ್ ವಿಚಾರಣಾ ನ್ಯಾಯಾಲಯ ಸಂತ್ರಸ್ತೆಯ ವಾದ ಆಲಿಸಿಲ್ಲ ಎಂಬ ತಾಂತ್ರಿಕ ಕಾರಣಕ್ಕೆ ಹೈಕೋರ್ಟ್ ಆರೋಪಿಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತಿಲ್ಲ ಎಂದರು.
ಸಂಪೂರ್ಣ ಸನ್ನಿವೇಶವನ್ನು ಗಮನಿಸಿದ ಸುಪ್ರೀಂಕೋರ್ಟ್ಆ ರೋಪಿ ಎತ್ತಿರುವ ತಕರಾರರನ್ನು ಪರಿಶೀಲಿಸಲು ಒಪ್ಪಿತು. ಆರೋಪಿ ಪರ ವಕೀಲರಾದ ಶ್ರೀರಾಮ್ ಪರಾಕ್ಕಟ್, ಶರತ್ ಜನಾರ್ದನ ವಾದ ಮಂಡಿಸಿದ್ದರು.