ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಪ್ರಕರಣ: ಆರೋಪಿ ಪ್ರಭಾವಿ ಎಂಬ ಕಾರಣಕ್ಕೆ ಅನುಮತಿ ವಿಳಂಬ ಸಲ್ಲ ಎಂದ ಹೈಕೋರ್ಟ್‌

ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ರೆಡ್ಡಿ ಗಳಿಸಿರುವ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡಲು ವಿಶೇಷ ನ್ಯಾಯಾಲಯದ ಮೆಟ್ಟಿಲೇರಲು ಮುಖ್ಯ ಕಾರ್ಯದರ್ಶಿ ಅವರಿಗೆ ಅನುಮತಿ ಕೋರಿ 2022ರ ಆ.30ರಂದು ಮನವಿ ಮಾಡಲಾಗಿದೆ ಎಂದು ತಿಳಿಸಿರುವ ಪೀಠ.
Karnataka HC, CBI and G. Janardhana Reddy
Karnataka HC, CBI and G. Janardhana Reddy

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಹೆಚ್ಚುವರಿ ಆಸ್ತಿಗಳ ಜಪ್ತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಕಾಲಾವಕಾಶ ನೀಡಬೇಕು ಎಂಬ ರಾಜ್ಯ ಸರ್ಕಾರದ ಕೋರಿಕೆಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಾನ್ಯ ಮಾಡಿದೆ.

ಜನಾರ್ದನ ರೆಡ್ಡಿ ಅವರಿಗೆ ಸೇರಿದ ಹೆಚ್ಚುವರಿ ಆಸ್ತಿಗಳ ಜಪ್ತಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು ತುರ್ತಾಗಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೇಂದ್ರೀಯ ತನಿಖಾ ದಳವು (ಸಿಬಿಐ) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಲು ಕಾಲಾವಕಾಶ ನೀಡಬೇಕು ಎಂಬ ಸರ್ಕಾರದ ಮನವಿಯನ್ನು ಹೈಕೋರ್ಟ್‌ ಪುರಸ್ಕರಿಸಿತು.

ಸಿಬಿಐ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.

ವಿಚಾರಣೆ ವೇಳೆ ಪೀಠವು “ರೆಡ್ಡಿಗೆ ಸೇರಿದ ಸುಮಾರು 65 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳ ಮುಟ್ಟುಗೋಲಿಗೆ ಈಗಾಗಲೇ ಅನುಮತಿ ನೀಡಲಾಗಿದೆ. 19 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿಗೆ ಅನುಮತಿ ನೀಡಲು ವಿಳಂಬ ಏಕೆ? ಆರೋಪಿ ಪ್ರಭಾವಿ ಎಂಬ ಕಾರಣಕ್ಕೆ ಅನುಮತಿ ನೀಡಲು ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ” ಎಂದು ಹೇಳಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರು “ಸಿಬಿಐ ಕೋರಿಕೆ ಪರಿಗಣಿಸಲು ಯಾವ ಕಾರಣಕ್ಕೆ ವಿಳಂಬವಾಗಿದೆ ಎಂಬುದರ ಕುರಿತು ರಾಜ್ಯ ಸರ್ಕಾರದಿಂದ ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಹೀಗಾಗಿ, ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ಪೀಠವು ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿತು. ಸಿಬಿಐ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್‌ ಹಾಜರಿದ್ದರು.

Also Read
ಜನಾರ್ದನ ರೆಡ್ಡಿಗೆ ಸೇರಿದ ಹೆಚ್ಚುವರಿ ಆಸ್ತಿ ಜಪ್ತಿ ಪ್ರಕ್ರಿಯೆ ಅನುಮತಿಗೆ ವಿಳಂಬ; ಹೈಕೋರ್ಟ್‌ ಕದತಟ್ಟಿದ ಸಿಬಿಐ

ಕ್ರಿಮಿನಲ್‌ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ 1944ರ ವಿವಿಧ ನಿಬಂಧನೆಗಳ ಅಡಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಜನಾರ್ದನ ರೆಡ್ಡಿ ಗಳಿಸಿರುವ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡಲು ವಿಶೇಷ ನ್ಯಾಯಾಲಯದ ಮೆಟ್ಟಿಲೇರಲು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಅನುಮತಿ ಕೋರಿ 2022ರ ಆಗಸ್ಟ್‌ 30ರಂದು ಮನವಿ ಮಾಡಲಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ವಿವರಿಸಿದೆ.

Related Stories

No stories found.
Kannada Bar & Bench
kannada.barandbench.com