ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಜುಲೈ 4ಕ್ಕೆ ವಿಚಾರಣೆ ಮುಂದೂಡಿದ ಬೆಂಗಳೂರಿನ ವಿಚಾರಣಾಧೀನ ನ್ಯಾಯಾಲಯ

ಆರೋಪಿಗಳ ಜೊತೆ ಮಾತುಕತೆ ನಡೆಸಲು ವಕೀಲರಿಗೆ ಅವಕಾಶ ಒದಗಿಸುವಂತೆ ಜೈಲು ಅಧಿಕಾರಿಗಳಿಗೆ ಆದೇಶ ಮಾಡಲಾಗುವುದು. ಆದರೆ, ಮುಂದಿನ ಬಾರಿಯಿಂದ ಯಾವುದೇ ಕಾರಣಕ್ಕೂ ವಿಚಾರಣೆ ಮುಂದೂಡಲಾಗದು ಎಂದು ಸ್ಪಷ್ಟಪಡಿಸಿದ ನ್ಯಾಯಾಲಯ.
Journalist Gowri Lankesh
Journalist Gowri Lankesh

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಅವರ ಕೊಲೆ ಆರೋಪಿಗಳ ವಿಚಾರಣೆಯನ್ನು ಜುಲೈ 4ರಿಂದ 8ರವರೆಗೆ ನಿರಂತರವಾಗಿ ನಡೆಸಲಾಗುವುದು ಎಂದು ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಹೇಳಿದೆ.

ಗೌರಿ ಲಂಕೇಶ್‌ ಹತ್ಯೆ ನಡೆದು ನಾಲ್ಕೂವರೆ ವರ್ಷಗಳ ಬಳಿಕ ಮೊದಲ ಸಾಕ್ಷಿಯಾಗಿರುವ ಕವಿತಾ ಲಂಕೇಶ್‌ ವಿಚಾರಣೆಯನ್ನು ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಚಂದ್ರಶೇಖರ ಮೃತ್ಯುಂಜಯ ಜೋಶಿ ಅವರು ನಡೆಸಿದರು. ಗೌರಿ ಸಹೋದರಿ ಕವಿತಾ ಲಂಕೇಶ್‌ ಅವರಿಗೆ ಸಾಕ್ಷ್ಯ ನುಡಿಯಲು ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಪ್ರಕರಣದ ಎಲ್ಲಾ ಆರೋಪಿಗಳನ್ನು ವರ್ಚುವಲ್‌ ವ್ಯವಸ್ಥೆಯ ಮೂಲಕ ಮಾತ್ರ ಹಾಜರುಪಡಿಸಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದ ಏಳು ಆರೋಪಿಗಳು ಮಹಾರಾಷ್ಟ್ರದ ಆರ್ಥರ್‌ ಜೈಲಿನಲ್ಲಿ ಇರುವ ಹಿನ್ನೆಲೆಯಲ್ಲಿ ಅಲ್ಲಿನ ಜೈಲು ಅಧಿಕಾರಿಗಳಿಗೂ ಈ ವಿಚಾರ ತಿಳಿಸಲಾಗುವುದು. ಆರೋಪಿಗಳ ಜೊತೆ ಮಾತುಕತೆ ನಡೆಸಲು ವಕೀಲರಿಗೆ ಅವಕಾಶ ಒದಗಿಸುವಂತೆ ಜೈಲು ಅಧಿಕಾರಿಗಳಿಗೆ ಆದೇಶ ಮಾಡಲಾಗುವುದು. ಆದರೆ, ಮುಂದಿನ ಬಾರಿಯಿಂದ ಯಾವುದೇ ಕಾರಣಕ್ಕೂ ವಿಚಾರಣೆ ಮುಂದೂಡಲಾಗದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಯಾವೆಲ್ಲಾ ಸಾಕ್ಷಿಗಳನ್ನು ವಿಚಾರಣೆಗೆ ಆಹ್ವಾನಿಸಲಾಗುತ್ತದೆ ಎಂಬುದಕ್ಕೆ ಸಂಬಂಧಿಸಿದಂತೆ ವಿಶೇಷ ಸರ್ಕಾರಿ ಅಭಿಯೋಜಕರು ಜೂನ್‌ 6ರಂದು ಮೆಮೊ ಸಲ್ಲಿಸಬೇಕು. ಅದನ್ನು ಆಧರಿಸಿ, ಯಾರನ್ನು ಪಾಟೀ ಸವಾಲಿಗೆ ಒಳಪಡಿಸಬೇಕು ಎಂಬುದನ್ನು ಆರೋಪಿಗಳು ಪರ ವಕೀಲರು ತಿಳಿಸಲಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಇಂದು ವಿಚಾರಣೆಯ ವೇಳೆ 18 ಆರೋಪಿಗಳ ಪೈಕಿ 11 ಮಂದಿಯನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಗೆ ಹಾಜರುಪಡಿಸಲಾಗಿತ್ತು. ಉಳಿದ ಏಳು ಮಂದಿ ಆರೋಪಿಗಳು ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಮತ್ತು ಎಡಪಂಥೀಯ ಚಿಂತಕ ಗೋವಿಂದ ಪಾನ್ಸರೆ ಅವರ ಕೊಲೆಯಲ್ಲೂ ಆರೋಪಿಗಳಾಗಿರುವುದರಿಂದ ಅವರನ್ನು ಮುಂಬೈನ ಆರ್ಥರ್‌ ಜೈಲಿನಲ್ಲಿ ಇರಿಸಲಾಗಿದ್ದು, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಮೊದಲಿಗೆ ಆರೋಪಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಏಳು ಆರೋಪಿಗಳು ಗೈರಾಗಿದ್ದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಲಾಯಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ವಿಶೇಷ ಸರ್ಕಾರಿ ಅಭಿಯೋಜಕ ಎಸ್‌ ಬಾಲಕೃಷ್ಣನ್‌ ಅವರು ಸಾಕ್ಷಿಯಾಗಿರುವ ಕವಿತಾ ಲಂಕೇಶ್‌ ಅವರು ಗೌರಿ ಹತ್ಯೆಯ ಸಂದರ್ಭದಲ್ಲಿ ಸ್ಥಳದಲ್ಲಿರಲಿಲ್ಲ. ಹೀಗಾಗಿ, ಆರೋಪಿಗಳನ್ನು ಕವಿತಾ ಗುರುತಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದಕ್ಕಾಗಿ ಪ್ರಕರಣದ ವಿಚಾರಣೆಯನ್ನು ವಿಳಂಬ ಮಾಡಬಾರದು ಎಂದು ಪೀಠವನ್ನು ಕೋರಿದರು.

ಆಗ ನ್ಯಾ. ಜೋಶಿ ಅವರು ಆರೋಪಿಗಳ ಹಾಜರಾತಿ ಅಗತ್ಯತೆಯ ಬಗ್ಗೆ ಅವರ ವಕೀಲರಿಗೆ ಒಪ್ಪಿಗೆ ಇದ್ದರೆ ಪ್ರಕ್ರಿಯೆ ಮುಂದುವರಿಸಬಹುದು ಎಂದರು. ಇದಕ್ಕೆ ಒಪ್ಪದ ಆರೋಪಿಗಳ ಪರ ವಕೀಲರು ವಿಚಾರಣೆಯ ವೇಳೆ ಆರೋಪಿಗಳನ್ನು ಭೌತಿಕವಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಕೋರಿದರು. ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು.

ಆರೋಪಿಗಳನ್ನು ವರ್ಚುವಲ್‌ ವ್ಯವಸ್ಥೆಯ ಮೂಲಕ ಮಾತ್ರ ಹಾಜರುಪಡಿಸಲಾಗುತ್ತದೆ. ಮಹಾರಾಷ್ಟ್ರದ ಜೈಲು ಅಧಿಕಾರಿಗಳಿಗೂ ಈ ವಿಚಾರ ತಿಳಿಸಲಾಗುವುದು ಎಂದು ನ್ಯಾಯಾಧೀಶರು ಹೇಳಿದರು. ಇದಕ್ಕೆ ಆರೋಪಿಗಳ ಪರ ವಕೀಲರು ಆರೋಪಿಗಳನ್ನು ಭೇಟಿ ಮಾಡಲು ನಮಗೆ ಅವಕಾಶ ನೀಡುತ್ತಿಲ್ಲ. ಆರೋಪಿಗಳನ್ನು ಭೇಟಿ ಮಾಡಲು ನಮಗೆ ಹಕ್ಕಿದೆ ಎಂದು ಪೀಠದ ಗಮನಸೆಳೆದರು.

ಆಗ ಪೀಠವು ಆರೋಪಿಗಳನ್ನು ಭೇಟಿ ಮಾಡಲು ಅನುಮತಿಸಲಾಗುವುದು. ಆರೋಪಿಗಳ ಜೊತೆ ಮಾತುಕತೆ ನಡೆಸಲು ಅವಕಾಶ ಮಾಡುವಂತೆ ಜೈಲು ಅಧಿಕಾರಿಗಳಿಗೆ ಆದೇಶ ಮಾಡಲಾಗುವುದು. ಆದರೆ, ಮುಂದಿನ ಬಾರಿಯಿಂದ ಯಾವುದೇ ಕಾರಣಕ್ಕೂ ವಿಚಾರಣೆ ಮುಂದೂಡಲಾಗದು ಎಂದು ಹೇಳಿತು. ಗೌರಿ ಕೊಲೆ ಪ್ರಕರಣದಲ್ಲಿ ಒಟ್ಟು 527 ಸಾಕ್ಷಿಗಳು ಇದ್ದಾರೆ.

ಪ್ರಕರಣದ ಹಿನ್ನೆಲೆ: 2017ರ ಸೆಪ್ಟೆಂಬರ್‌ 5ರಂದು ಗೌರಿ ಲಂಕೇಶ್‌ ಅವರು ಕೆಲಸ ಮುಗಿಸಿ ಮನೆಗೆ ಮರಳಿದ್ದಾಗ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಹತ್ಯೆಯ ಸಂಚು ರೂಪಿಸಿದ ಪ್ರಮುಖ ರೂವಾರಿ ಎಂದು ಅಮೋಲ್ ಕಾಳೆ ಮೇಲೆ ಆರೋಪವಿದ್ದರೆ, ಗುಂಡು ಹಾರಿಸಿದ ಆರೋಪ ಪರಶುರಾಮ್ ವಾಗ್ಮೋರೆ ಮೇಲೂ ಹಾಗೂ ಆತನನ್ನು ಕೂರಿಸಿಕೊಂಡು ಬೈಕ್ ಚಲಾಯಿಸಿ ತಪ್ಪಿಸಿಕೊಳ್ಳಲು ನೆರವಾದ ಆರೋಪವು ಗಣೇಶ್ ಮಿಸ್ಕಿನ್ ಮೇಲೂ ಇದೆ. ಆರೋಪಿಗಳ ಪರವಾಗಿ 60ಕ್ಕೂ ಹೆಚ್ಚು ವಕೀಲರು ವಕಾಲತ್ತು ವಹಿಸಿದ್ದರು. ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಕಾರಣಕ್ಕೆ ಹತ್ಯೆ ಪ್ರಕರಣದ ವಿಚಾರಣೆ ತಡವಾಗಿತ್ತು.

ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡವು (ಎಸ್‌ಐಟಿ) 18 ಆರೋಪಿಗಳನ್ನು ಬಂಧಿಸಿ ಅವರು ವಿರುದ್ದ 8,500 ಪುಟಗಳ ಆರೋಪ ಪಟ್ಟಿ ಸಲ್ಲಿಸಿದೆ.

ಧಾರವಾಡದಲ್ಲಿ ಎಂ ಎಂ ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ್‌ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್‌ಐಟಿ ಪತ್ತೆ ಹಚ್ಚಿತ್ತು. ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಅವರ ಮೇಲಿನ ಗುಂಡಿನ ದಾಳಿಯಲ್ಲಿ ಬಳಸಿದ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿತ್ತು.

ಗೌರಿ ಲಂಕೇಶ್‌ ಅವರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ, ಅಮೋಲ್ ಕಾಳೆ ಸಹಚರ ಮೋಹನ್ ನಾಯಕ್‌ ವಿರುದ್ದ ದಾಖಲಾಗಿದ್ದ ಕರ್ನಾಟಕ ಸಂಘಟಿತ ಅಪರಾಧಗಳ ಕಾಯಿದೆ (ಕೋಕಾ) ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಗೌರಿ ಲಂಕೇಶ್‌ ಸಹೋದರಿ ಕವಿತಾ ಲಂಕೇಶ್‌‌ ಪ್ರಶ್ನಿಸಿದ್ದರು. ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು.

Also Read
ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ವಿರುದ್ಧ ಆರೋಪ ರೂಪಿಸಿದ ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ

ಅಮೋಲ್ ಕಾಳೆ, ಪರಶುರಾಮ್ ವಾಗ್ಮೊರೆ, ಗಣೇಶ್ ಮಿಸ್ಕಿನ್, ಅಮಿತ್ ಬಾಡ್, ಅಮಿತ್ ದೆಗ್ವೇಕರ್, ಭರತ್ ಕುರಣೆ, ಸುರೇಶ್ ಹೆಚ್ ಎಲ್, ರಾಜೇಶ್ ಬಂಗೇರ, ಸುಧನ್ವ ಗೊಂದಲೇಕರ್, ಶರದ್ ಕಲಾಸ್ಕರ್, ಮೋಹನ್ ನಾಯಕ್, ವಾಸುದೇವ್ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ ಎಡವೆ, ವಿಕಾಸ್‌ ಪಾಟೀಲ್‌, ಶ್ರೀಕಾಂತ್ ಪಂಗರ್ಕರ್, ಕೆ ಟಿ ನವೀನ್ ಕುಮಾರ್ ಮತ್ತು ರುಶಿಕೇಶ್ ದಿಯೋದಿಕರ್‌ ಪ್ರಕರಣದ ಆರೋಪಿಗಳಾಗಿದ್ದಾರೆ.

ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯಿದೆಯ ಸೆಕ್ಷನ್‌ಗಳಾದ 25(1), 25(1B), 27(1) ಮತ್ತು ಕೋಕಾ ಕಾಯಿದೆಯ ಸೆಕ್ಷನ್‌ಗಳಾದ 3(1)(I), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.

Kannada Bar & Bench
kannada.barandbench.com