
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಗದು ರಾಶಿ ಪತ್ತೆಯಾದ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ರಚಿಸಿದ್ದ ಆಂತರಿಕ ಸಮಿತಿಯ ಮೂವರು ಸದಸ್ಯರು ಇಂದು ತಂತಮ್ಮ ನ್ಯಾಯಾಲಯಗಳಲ್ಲಿ ವಿಚಾರಣೆ ಪುನರಾರಂಭಿಸಿದರು.
ಆರೋಪದ ಬಗ್ಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ ಎಸ್ ಸಂಧವಾಲಿಯಾ ಹಾಗೂ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಅವರಿರುವ ಸಮಿತಿ ಮಾರ್ಚ್ 25ರಂದು ತನಿಖೆ ಆರಂಭಿಸಿತ್ತು.
ಅಂದಿನಿಂದ ಈ ಮೂವರು ನ್ಯಾಯಾಲಯ ಕಲಾಪಗಳಲ್ಲಿ ಭಾಗಿಯಾಗಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುವುದಕ್ಕಾಗಿ ಅವರು ದೆಹಲಿಯ ಚಾಣಕ್ಯಪುರಿಯಲ್ಲಿರುವ ಹರಿಯಾಣ ಸರ್ಕಾರಿ ಅತಿಥಿ ಗೃಹದಲ್ಲಿ ತಂಗಿದ್ದರು ಎಂದು ವರದಿಯಾಗಿತ್ತು.
ಮಾರ್ಚ್ 25 ರಂದು, ಈ ಮೂವರು ನ್ಯಾ. ವರ್ಮಾ ಅವರ ದೆಹಲಿಯ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದರು. ಈ ತಿಂಗಳ ಆರಂಭದಲ್ಲಿ ಸಮಿತಿಯು ಆಯುಕ್ತ ಸಂಜಯ್ ಅರೋರಾ ಸೇರಿದಂತೆ ವಿವಿಧ ದೆಹಲಿ ಪೊಲೀಸ್ ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು.
ಸಮಿತಿಯು ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗರ್ಗ್, ಮೂವರು ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ನ್ಯಾಯಾಧೀಶರ ಮೂವರು ಭದ್ರತಾ ಸಿಬ್ಬಂದಿಯ ಹೇಳಿಕೆಗಳನ್ನು ಪಡೆದಿತ್ತು.
ಮಾರ್ಚ್ 14ರ ಸಂಜೆ ಅಗ್ನಿ ಅವಗಢಕ್ಕೆ ತುತ್ತಾದ ನ್ಯಾ.ವರ್ಮಾ ಅವರ ದೆಹಲಿ ನಿವಾಸದಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸುವಾಗ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿದ್ದವು. ಘಟನೆಯಿಂದಾಗಿ ನ್ಯಾ. ವರ್ಮಾ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು.