ನ್ಯಾಯಮೂರ್ತಿಗಳಿಬ್ಬರ ಸಂಘರ್ಷ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ನೀಡಿದ ಸುಪ್ರೀಂ
ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಸೀಟು ಪಡೆಯಲು ನಕಲಿ ಪ್ರಮಾಣಪತ್ರ ಸಲ್ಲಿಕೆ ಮಾಡುತ್ತಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇಂದು (ಶನಿವಾರ) ವಿಶೇಷ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಹಗರಣಕ್ಕೆ ಸಂಬಂಧಪಟ್ಟಂತೆ ಕಲ್ಕತ್ತಾ ಹೈಕೋರ್ಟ್ ನಡೆಸುತ್ತಿದ್ದ ಎಲ್ಲಾ ವಿಚಾರಣೆಗಳಿಗೆ ತಡೆ ನೀಡಿದೆ (24.01.2024 ಮತ್ತು 25.01.2024 ರ ಕಲ್ಕತ್ತಾ ಹೈಕೋರ್ಟ್ನ ಆದೇಶಗಳು ಮತ್ತು ಪೂರಕ ವಿಷಯಗಳು).
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರಿದ್ದ ಏಕಸದಸ್ಯ ಪೀಠ ಮತ್ತು ನ್ಯಾಯಮೂರ್ತಿ ಸೌಮೆನ್ ಸೇನ್ ನೇತೃತ್ವದ ವಿಭಾಗೀಯ ಪೀಠ ನಡೆಸುತ್ತಿದ್ದ ಎಲ್ಲಾ ವಿಚಾರಣೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಸೂರ್ಯಕಾಂತ್ ಹಾಗೂ ಅನಿರುದ್ಧ ಬೋಸ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ತಡೆ ಹಿಡಿದಿದೆ.
"...ಕಲ್ಕತ್ತಾ ಹೈಕೋರ್ಟ್ ವಿಭಾಗೀಯ ಪೀಠ ಮತ್ತು ಏಕಸದಸ್ಯ ಪೀಠ ನಡೆಸುತ್ತಿದ್ದ ವಿಚಾರಣೆಗೆ ತಡೆಯಾಜ್ಞೆ ಇರಲಿದೆ. ಸಿಬಿಐ ತನಿಖೆಗೆ ನಿರ್ದೇಶಿಸಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿದ್ದ ಏಕಸದಸ್ಯ ಪೀಠ ನೀಡಿದ ನಿರ್ದೇಶನಕ್ಕೆ ತಡೆ ನೀಡಲಾಗುತ್ತಿದೆ " ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಪ್ರಕರಣವನ್ನು ತಾನೇ ವಿಚಾರಣೆ ನಡೆಸುವುದಾಗಿ ಮೌಖಿಕವಾಗಿ ತಿಳಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ (ಜನವರಿ 29) ಮುಂಡೂಡಿದೆ.
ರಾಜ್ಯದಲ್ಲಿ ನಕಲಿ ಜಾತಿ ಪ್ರಮಾಣಪತ್ರ ಹಾವಳಿ ಪ್ರಶ್ನಿಸಿದ್ದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕೆ ಎಂಬ ಬಗ್ಗೆ ಕಲ್ಕತ್ತಾ ಹೈಕೋರ್ಟ್‌ನ ಎರಡು ನ್ಯಾಯಪೀಠಗಳು ವ್ಯತಿರಿಕ್ತ ನಿಲುವು ತಳೆದಿದ್ದವು. ಸಿಬಿಐ ತನಿಖೆಗೆ ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಈಚೆಗೆ ಆದೇಶಿಸಿದ್ದರು. ಈ ಆದೇಶಕ್ಕೆ ಅದೇ ದಿನ ವಿಭಾಗೀಯ ಪೀಠ ತಡೆ ನೀಡಿತ್ತು. ಆದರೆ ಅಂದು ಮಧ್ಯಾಹ್ನ ಮತ್ತೆ ವಿಚಾರಣೆ ನಡೆಸಿದ್ದ ನ್ಯಾ. ಅಭಿಜಿತ್ ಅವರು ವಿಭಾಗೀಯ ಪೀಠದ ಆದೇಶ ನಿರ್ಲಕ್ಷಿಸಿದರು. ಸಿಬಿಐ ಅಧಿಕಾರಿ ಪ್ರಕರಣದ ದಾಖಲೆಗಳನ್ನು ಪಡೆಯಲು ಅನುಮತಿಸಿದ್ದರು. ಜೊತೆಗೆ ವಿಭಾಗೀಯ ಪೀಠದ ನೇತೃತ್ವ ವಹಿಸಿದ್ದ ನ್ಯಾ. ಸೌಮೆನ್ ಸೇನ್ ಅವರು ʼರಾಜ್ಯದ ರಾಜಕೀಯ ಪಕ್ಷವೊಂದರ ಪರ ಕೆಲಸ ಮಾಡುತ್ತಿದ್ದಾರೆʼ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಲು ಶುಕ್ರವಾರ ನಿರ್ಧರಿಸಿತ್ತು.
ಇಂದಿನ (ಶನಿವಾರ) ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಟಾರ್ನಿ ಜನರಲ್ ಆರ್.ವೆಂಕಟರಮಣಿ ವಾದ ಮಂಡಿಸಿದರು. ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಿದ್ದರು.
ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಅವರು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವಂತೆ ಮಾಡಿರುವ ಪ್ರಕರಣ ಇದೇ ಮೊದಲಲ್ಲ. ಕಳೆದ ವರ್ಷ ಏಪ್ರಿಲ್‌ನಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಬಗ್ಗೆ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದರು. ಇದಕ್ಕಾಗಿ ಅವರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ನಂತರ ಅದೇ ದಿನ ಸಂಜೆ ವಿಶೇಷ ವಿಚಾರಣೆ ನಡೆಸಿದ ಅದು ಸಂದರ್ಶನದ ವರದಿಯ ಪ್ರತಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಿ ನ್ಯಾಯಮೂರ್ತಿ ಗಂಗೋಪಾಧ್ಯಾಯ ಹೊರಡಿಸಿದ ಆದೇಶವನ್ನು ತಡೆ ಹಿಡಿದಿತ್ತು.