ಭಾರತೀಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ (ಎನ್‌ಎಲ್‌ಎಸ್‌ಐಯು) ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ಕಲ್ಪಿಸುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅನಿರುದ್ಧ ಬೋಸ್ ಸೋಮವಾರ ಹಿಂದೆ ಸರಿದಿದ್ದಾರೆ.
ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್ ಮತ್ತು ಯು ಯು ಲಲಿತ್ ಪ್ರಕರಣದ ವಿಚಾರಣೆಯಿಂದ ದೂರ ಉಳಿದ ನಂತರ ಅದೇ ನಿರ್ಧಾರ ತಳೆದ ಮೂರನೇ ನ್ಯಾಯಮೂರ್ತಿ ಬೋಸ್ ಆಗಿದ್ದಾರೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕದಲ್ಲಿ ನೆಲೆಸಿರುವ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳನ್ನು ಮೀಸಲಿಡುವ ಎನ್‌ಎಲ್‌ಎಸ್‌ಐಯು ನಿರ್ಧಾರವನ್ನು ತಡೆಹಿಡಿಯಲು ನ್ಯಾಯಾಲಯ ನಿರಾಕರಿಸಿತು.
ಸಂವಿಧಾನದ 14 ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಹೇಳಿ ಕರ್ನಾಟಕ ಹೈಕೋರ್ಟ್ 2020ರ ಸೆಪ್ಟೆಂಬರ್‌ನಲ್ಲಿ ಸ್ಥಳೀಯ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಎನ್‌ಎಲ್‌ಎಸ್‌ಐಯು ತಿದ್ದುಪಡಿ ಕಾಯಿದೆ ಮೂಲಕ ಜಾರಿಗೆ ತರಲಾಗಿರುವ ಮೀಸಲಾತಿ ಎನ್‌ಎಲ್‌ಎಸ್‌ಐಯುನ ಮೂಲ ಕಾಯಿದೆಯ ನಿಬಂಧನೆಗಳಿಗೆ ವಿರುದ್ಧವಾಗಿದ್ದು ವಿಶ್ವವಿದ್ಯಾಲಯದಲ್ಲಿ ಮೀಸಲಾತಿ ಜಾರಿಗೆ ತರುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ತೀರ್ಪಿನಲ್ಲಿ ತಿಳಿಸಿತ್ತು.
ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿತ್ತು. ಎನ್‌ಎಲ್‌ಎಸ್‌ಐಯು ರಾಜ್ಯದ ಸಂಸ್ಥೆಯಲ್ಲ. ಅದು ರಾಜ್ಯದ ನಿಯಂತ್ರಣದಲ್ಲಿಲ್ಲ ಎಂಬುದನ್ನು ಹೈಕೋರ್ಟ್ ಗಮನಿಸುವಲ್ಲಿ ತಪ್ಪಾಗಿದೆ ಎಂದು ರಾಜ್ಯ ಸರ್ಕಾರ ವಾದಿಸಿತ್ತು.