
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆಗಾಗಿ ನೇಮಕ ಮಾಡಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ ಎನ್ ದೇಸಾಯಿ ಅವರ ನೇತೃತ್ವದ ವಿಚಾರಣಾ ಆಯೋಗವು ಒಂದು ವರ್ಷದ ಬಳಿಕ ರಾಜ್ಯ ಸರ್ಕಾರಕ್ಕೆ ಆರು ಸಂಪುಟಗಳ ವರದಿಯನ್ನು ಗುರುವಾರ ಸಲ್ಲಿಸಿದೆ.
ತಮ್ಮ ತಂಡದೊಂದಿಗೆ ಆಗಮಿಸಿದ ನ್ಯಾ. ದೇಸಾಯಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರದಿ ಸಲ್ಲಿಸಿದರು.
2024ರ ಜುಲೈ 15ರಂದು ತನಿಖಾ ಆಯೋಗ ರಚಿಸಿ ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರ ಆದೇಶಿಸಿತ್ತು. ಆನಂತರ ಮತ್ತೆ ನ್ಯಾ. ದೇಸಾಯಿ ಆಯೋಗದ ಕಾಲಾವಕಾಶವನ್ನು ಸರ್ಕಾರ ವಿಸ್ತರಿಸಿತ್ತು.
ಮುಡಾ ಹಗರಣವು ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೆಬ್ಬಿಸಿತ್ತು. ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ರಾಜಕೀಯ ಸಮರಕ್ಕೆ ಕಾರಣವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರ ಜಮೀನಿನಲ್ಲಿ ಮುಡಾ ಅನಿಧಿಕೃತವಾಗಿ ನಿವೇಶನಗಳನ್ನು ಮಾಡಿ ಮಾರಿದ್ದು ಇದಕ್ಕೆ ಪರ್ಯಾಯವಾಗಿ ಅವರಿಗೆ ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ಸೈಟುಗಳನ್ನು ನೀಡಿದ್ದು ವಿವಾದದ ಕೇಂದ್ರವಾಗಿದೆ. ಇಡೀ ಪ್ರಕರಣದಲ್ಲಿ ಮುಡಾ ನಿಯಮಗಳನ್ನು ಗಾಳಿಗೆ ತೂರಿ ಸೈಟುಗಳನ್ನು ಹಂಚಿಕೆ ಮಾಡಲಾಗಿದೆ ಎನ್ನುವುದು ವಿಪಕ್ಷಗಳ ಆರೋಪವಾಗಿದೆ.
ಈ ಮಧ್ಯೆ, ಮುಡಾ ಹಗರಣದ ತನಿಖೆ ನಡೆಸುತ್ತಿದ್ದ ವೇಳೆಯೇ ನಿವೃತ್ತ ನ್ಯಾಯಮೂರ್ತಿ ಪಿ ಎನ್ ದೇಸಾಯಿ ಅವರನ್ನು ಕೇಂದ್ರ ಸರ್ಕಾರವು ಮೂರು ವರ್ಷಗಳ ಕಾಲ ಸರ್ಕಾರದ ಎಲ್ಲಾ ನೇಮಕಾತಿಗಳಿಂದ ಡಿಬಾರ್ ಮಾಡಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು.