ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಪ್ರಕಟಿಸಿದೆ.
ಹಾಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದು, ಅವರಿಂದ ತೆರವಾಗುವ ಮುಖ್ಯ ನ್ಯಾಯಮೂರ್ತಿ ಕಚೇರಿಯ ಕರ್ತವ್ಯ ನಿಭಾಯಿಸುವಂತೆ ರಾಷ್ಟ್ರಪತಿಗಳು ನ್ಯಾ. ದಿನೇಶ್ ಕುಮಾರ್ ಅವರನ್ನು ನೇಮಿಸಿದ್ದಾರೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಂಚ್ರ ವರಾಳೆ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿರುವ ಹಿನ್ನೆಲೆಯಲ್ಲಿ ನ್ಯಾ. ಪಿ ಎಸ್ ದಿನೇಶ್ ಕುಮಾರ್ ಅವರ ಹೆಸರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಕಳೆದ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.
ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು 2015ರಿಂದ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದು, 2024ರ ಫೆಬ್ರವರಿ 24ರಂದು ನಿವೃತ್ತರಾಗಲಿದ್ದಾರೆ.