ಕರ್ನಾಟಕ ಹೈಕೋರ್ಟ್‌ನ 37ನೇ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್‌ ಅವಸ್ಥಿ ಪ್ರಮಾಣ ವಚನ ಸ್ವೀಕಾರ

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ನ್ಯಾಯಮೂರ್ತಿ ಅವಸ್ಥಿ ಅವರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
Justice Ritu Raj Awasthi took oath as CJ of Karnataka High Court
Justice Ritu Raj Awasthi took oath as CJ of Karnataka High Court

ಕರ್ನಾಟಕ ಹೈಕೋರ್ಟ್‌ನ 37ನೇ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್‌ ಅವಸ್ಥಿ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ನ್ಯಾಯಮೂರ್ತಿ ಅವಸ್ಥಿ ಅವರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ರಿತು ರಾಜ್ ಅವಸ್ಥಿ ಅವರ ಹೆಸರನ್ನು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಸೆಪ್ಟೆಂಬರ್‌ 16ರಂದು ಶಿಫಾರಸ್ಸು ಮಾಡಿತ್ತು. ನ್ಯಾ. ರಿತು ರಾಜ್ ಅವಸ್ಥಿ ಅವರ ನೇಮಕಾತಿಯೂ ಸೇರಿದಂತೆ ದೇಶಾದ್ಯಂತ ವಿವಿಧ 13 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರವು ಅಕ್ಟೋಬರ್ 9ರಂದು ಅಧಿಸೂಚನೆ ಹೊರಡಿಸಿತ್ತು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಮುಖ್ಯ ನ್ಯಾಯಮೂರ್ತಿ ಅವಸ್ಥಿ ಅವರಿಗೆ ಹೂಗುಚ್ಛ ಹಾಗೂ ಪುಸ್ತಕವನ್ನು ನೀಡಿ ಸ್ವಾಗತಿಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪರಿಚಯ:

ನ್ಯಾ. ರಿತುರಾಜ್‌ ಅವಸ್ಥಿ ಅವರು 1960ರಲ್ಲಿ ಜನಿಸಿದ್ದು, ಲಖನೌ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಬಳಿಕ 1987ರಲ್ಲಿ ವಕೀಲರಾಗಿ ಸೇವೆ ಆರಂಭಿಸಿದರು.

ಅಲಾಹಾಬಾದ್‌ ಹೈಕೋರ್ಟ್‌ ಲಖನೌ ಪೀಠದ ನ್ಯಾಯಮೂರ್ತಿಯಾಗಿ ಹಲವು ವರ್ಷ ಕರ್ತವ್ಯ ನಿರ್ವಹಿಸಿರುವ ನ್ಯಾಯಮೂರ್ತಿ ಅವಸ್ಥಿ ಅವರು ಶಿಕ್ಷಣ, ಸಿವಿಲ್‌ ವಿಚಾರಗಳಲ್ಲಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿದ್ದಾರೆ.

Also Read
ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ಥಿ: ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು

ಲಖನೌನಲ್ಲಿ ಭಾರತದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆಗಿಯೂ ನ್ಯಾ. ರಿತುರಾಜ್‌ ಅವಸ್ಥಿ ಸೇವೆ ಸಲ್ಲಿಸಿದ್ದಾರೆ. 2009ರಲ್ಲಿ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಅವರ ಸೇವೆಯನ್ನು 2010ರಲ್ಲಿ ಖಾಯಂಗೊಳಿಸಲಾಗಿತ್ತು.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅಭಯ್‌ ಶ್ರೀನಿವಾಸ್‌ ಓಕ್‌ ಅವರು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದ ಹಿನ್ನೆಲೆಯಲ್ಲಿ ಹಿರಿಯ ನ್ಯಾಯಮೂರ್ತಿಯಾಗಿದ್ದ ಸತೀಶ್‌ ಚಂದ್ರ ಶರ್ಮಾ ಅವರನ್ನು ಆಗಸ್ಟ್‌ 31ರಿಂದ ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. ಈಚೆಗೆ ನ್ಯಾ. ಸತೀಶ್‌ ಚಂದ್ರ ಶರ್ಮಾ ಅವರನ್ನು ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ತೆಲಂಗಾಣ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.

Related Stories

No stories found.
Kannada Bar & Bench
kannada.barandbench.com