ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾಯಂಗೊಂಡಿರುವ ಎಸ್ ರಾಚಯ್ಯ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ಹೈಕೋರ್ಟ್ ಬೆಂಗಳೂರು ಪ್ರಧಾನ ಪೀಠದಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರು ನ್ಯಾಯಮೂರ್ತಿ ಎಸ್ ರಾಚಯ್ಯ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಹೈಕೋರ್ಟ್‌ನ ನ್ಯಾಯಮೂರ್ತಿಗಳು, ರಿಜಿಸ್ಟ್ರಾರ್ ಜನರಲ್ ಕೆ ಎಸ್ ಭರತ್ ಕುಮಾರ್ ಮತ್ತಿತರರು ಹಾಜರಿದ್ದರು.
ಎಸ್ ರಾಚಯ್ಯ ಅವರು 2021ರಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು. ಅವರನ್ನು ಕಾಯಂಗೊಳಿಸುವಂತೆ ಅಕ್ಟೋಬರ್ ಮೊದಲ ವಾರದಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಅದರಂತೆ ಅಕ್ಟೋಬರ್ 24ರಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.