ಜಿ ಪಂ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

"ಆರೋಪಪಟ್ಟಿಯಲ್ಲಿನ ಒಂದೇ ಒಂದು ಅಂಶವನ್ನು ಪರಿಗಣಿಸಿಲ್ಲ. ದೂರನ್ನಷ್ಟೇ ಆಧರಿಸಿ ಅರ್ಜಿ ವಜಾಗೊಳಿಸಲಾಗಿದೆ" ಎಂದ ನ್ಯಾಯಾಲಯ.
Prajwal Revanna & Karnataka HC
Prajwal Revanna & Karnataka HC
Published on

ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿತು.

ಪ್ರಜ್ವಲ್‌ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ಪ್ರಕಟಿಸಿತು.

ಅರ್ಜಿದಾರರ ಪರ ವಕೀಲ ಜಿ ಅರುಣ್‌ ಅವರು ಅರ್ಜಿ ಹಿಂಪಡೆಯಲಾಗುವುದು. ಈ ಪ್ರಕರಣದಲ್ಲಿ ಆರೋಪ ಪಟ್ಟಿ ನೀಡಲಾಗಿಲ್ಲ ಎಂದರು. ಆಗ ಪೀಠವು ಹಾಲಿ ಪ್ರಕರಣದಲ್ಲಿ ಆರೋಪ ಪಟ್ಟಿಯನ್ನು ಪರಿಗಣಿಸಿಯೇ ಇಲ್ಲ. ದೂರನ್ನಷ್ಟೇ ಆಧರಿಸಿ, ವಜಾ ಮಾಡಲಾಗಿದೆ ಎಂದರು.

ಪ್ರಕರಣದ ಹಿನ್ನೆಲೆ: 2021ರಲ್ಲಿ ಬಿಸಿಎಂ ಹಾಸ್ಟೆಲ್‌ನಲ್ಲಿ ಬಾಲಕಿಯರಿಗೆ ಹಾಸ್ಟೆಲ್‌ ಸೌಲಭ್ಯ ಕಲ್ಪಿಸುವ ಕುರಿತು ಚರ್ಚಿಸಲು ಪ್ರಜ್ವಲ್‌ ಅವರ ಕಚೇರಿಗೆ ಸಂತ್ರಸ್ತೆ ತೆರಳಿದ್ದರು. ಬ್ಯುಸಿ ಇರುವುದರಿಂದ ಮಾರನೆಯ ದಿನ ಬರುವಂತೆ ಪ್ರಜ್ವಲ್‌ ಸೂಚಿಸಿದ್ದರು.

ಅದರಂತೆ ಮಾರನೇಯ ದಿನ ಸಂತ್ರಸ್ತೆ ತೆರಳಿದಾಗ ಆಕೆಗೆ ಗನ್‌ ತೋರಿಸಿ, ಬೆದರಿಸಿ ಅತ್ಯಾಚಾರ ಎಸಗಿದ್ದರು. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಆನಂತರ ಹಲವು ಬಾರಿ ವಿಡಿಯೋ ಕರೆ ಮಾಡಿ ನಗ್ನವಾಗುವಂತೆ ಸೂಚಿಸಿ, ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದರು. ಈ ವಿಚಾರವನ್ನು ಬಹಿರಂಗಪಡಿಸಿದರೆ ಗಂಭೀರ ಕ್ರಮದ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತೆ ದೂರಿದ್ದರು.

Also Read
ಅತ್ಯಾಚಾರ ಪ್ರಕರಣಗಳ ಆರೋಪಿ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌

ಸಂತ್ರಸ್ತೆಯು ಪ್ರಕರಣದ ಸಂಬಂಧ 01.05.2024ರಂದು ವಿಶೇಷ ತನಿಖಾ ದಳ (ಎಸ್‌ಐಟಿ) ಮುಖ್ಯಸ್ಥರಿಗೆ ದೂರು ನೀಡಿದ್ದರು. ಇದರ ಆಧಾರದಲ್ಲಿ ಬೆಂಗಳೂರಿನ ಸಿಐಡಿಯ ಸೈಬರ್‌ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್‌), 506, 354-ಎ(1)(ii), 354-ಬಿ, 354-ಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್‌ ನಿರೀಕ್ಷಣಾ ಜಾಮೀನು ಕೋರಿದ್ದರು.

ಈ ಹಿಂದೆ ಅಕ್ಟೋಬರ್‌ 21ರಂದು ಪ್ರಜ್ವಲ್‌ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಹೈಕೋರ್ಟ್‌ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನೂ ಸುಪ್ರೀಂ ಕೋರ್ಟ್‌ ವಜಾ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Kannada Bar & Bench
kannada.barandbench.com