ಅತ್ಯಾಚಾರ ಪ್ರಕರಣಗಳ ಆರೋಪಿ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌

ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ; ಬೆಂಗಳೂರಿನ ಸೈಬರ್‌ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ & ಲೈಂಗಿಕ ದೌರ್ಜನ್ಯ ಸಂಬಂಧದ ಎರಡು ಪ್ರತ್ಯೇಕ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ.
Prajwal Revanna & Karnataka HC
Prajwal Revanna & Karnataka HC
Published on

ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದೆ. ಇನ್ನೊಂದು ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶ ಪ್ರಕಟ ಮಾತ್ರ ಬಾಕಿ ಉಳಿದಿದೆ.

ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ವಜಾ ಮಾಡಿದೆ. ವಿಸ್ತೃತ ಆದೇಶಗಳು ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮನೆಕೆಲಸದಾಕೆ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದರು. ಈ ಪ್ರಕರಣದಲ್ಲಿ ಪ್ರಜ್ವಲ್‌ ಎರಡನೇ ಆರೋಪಿಯಾಗಿದ್ದಾರೆ. ಮೊದಲನೇ ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಈಗಾಗಲೇ ಜಾಮೀನು ಮಂಜೂರಾಗಿದೆ.

Also Read
ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿನ ಕೆಲಸದಾಕೆಯ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣ ಮತ್ತು ಪುತ್ರನಿಗೆ ಪ್ರತಿಷ್ಠಿತ ಶಾಲೆಯಲ್ಲಿ ಪ್ರವೇಶ ಕಲ್ಪಿಸುವ ನೆಪದಲ್ಲಿ ಹಾಸನದ ಮಹಿಳೆಯ ನಗ್ನ ಚಿತ್ರ/ವಿಡಿಯೊ ಸೆರೆ ಹಿಡಿದ ಆರೋಪಕ್ಕೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಪ್ರಜ್ವಲ್‌ ಅರ್ಜಿಗಳನ್ನು ಹೈಕೋರ್ಟ್‌ ತಿರಸ್ಕರಿಸಿದೆ. ಈ ಎರಡೂ ಪ್ರಕರಣಗಳು ಬೆಂಗಳೂರಿನ ಸಿಐಡಿ ಸೈಬರ್‌ ಠಾಣೆಯಲ್ಲಿ ದಾಖಲಾಗಿವೆ.

ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಇನ್ನೆರಡು ದಿನದಲ್ಲಿ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.

Also Read
ಮನೆಕೆಲಸ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಕಾಯ್ದಿರಿಸಿದ ಹೈಕೋರ್ಟ್‌

ಪ್ರಜ್ವಲ್‌ ಪರವಾಗಿ ವಕೀಲ ಜಿ ಅರುಣ್‌ ವಕಾಲತ್ತು ಹಾಕಿದ್ದು, ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದಿಸಿದ್ದರು. ರಾಜ್ಯ ಸರ್ಕಾರದ ವಿಶೇಷ ತನಿಖಾ ದಳದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ವಾದ ಮಂಡಿಸಿದ್ದರು.

Kannada Bar & Bench
kannada.barandbench.com