ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್) ಕಚ್ಚಾ ಸಾಮಗ್ರಿ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಚನ್ನಗಿರಿಯ ಶಾಸಕ ವಿರೂಪಾಕ್ಷಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿತು.
ಅರ್ಜಿದಾರ ಮಾಡಾಳ್ ವಿರೂಪಾಕ್ಷಪ್ಪ ಅವರು ಐದು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಆದೇಶವಾದ 48 ಗಂಟೆಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು. ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಬೇಕು. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ಪ್ರತಿವಾದಿ ಲೋಕಾಯುಕ್ತ ಪೊಲೀಸರು ಆಕ್ಷೇಪಣೆ ಸಲ್ಲಿಸಬೇಕು ಎಂದಿರುವ ನ್ಯಾಯಾಲಯವು ಅರ್ಜಿದಾರ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ ಎಂದಿದ್ದು, ಮಾರ್ಚ್ 17ಕ್ಕೆ ವಿಚಾರಣೆ ಮುಂದೂಡಿದೆ.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಸ್ ಸುಮನ್ “ಅವರು ಮಾಡಾಳ್ ವಿರೂಪಾಕ್ಷಪ್ಪ ಅವರು ಯಾವುದೇ ರೀತಿಯಲ್ಲಿಯೂ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಬಂಧಿತ ಪುತ್ರ ಪ್ರಶಾಂತ್ ಜೊತೆಗೆ ದೂರವಾಣಿ ಅಥವಾ ಯಾವುದರ ಮೂಲಕವು ಮಾತನಾಡಿಲ್ಲ. ವಿನಾ ಕಾರಣವನ್ನು ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ” ಎಂದು ಆಕ್ಷೇಪಿಸಿದರು.
ಲೋಕಾಯುಕ್ತರನ್ನು ಪ್ರತಿನಿಧಿಸಿದ್ದ ವಕೀಲರು “ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಹಣ ಪಡೆಯುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ. ಅವರ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆಯಾಗಿದೆ. ಹೆಚ್ಚಿನ ತನಿಖೆಗಾಗಿ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಯತ್ನಿಸಲಾಗುತ್ತಿದೆ. ಅವರು ಪತ್ತೆಯಾಗಿಲ್ಲ. ಹೀಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬಾರದು” ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠವು ಆದೇಶ ಮಾಡಿದೆ.