ಭ್ರಷ್ಟಾಚಾರ ಪ್ರಕರಣ: ಬಿಎಸ್‌ವೈ, ಪುತ್ರ ವಿಜಯೇಂದ್ರ ಒಳಗೊಂಡು ಒಂಭತ್ತು ಮಂದಿಗೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್‌

ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್‌ ಯಾದವ್‌ ನೇತೃತ್ವದ ಏಕಸದಸ್ಯ ಪೀಠವು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದ್ದು, ಪ್ರತಿಕ್ರಿಯಿಸುವಂತೆ ಆದೇಶಿಸಿದೆ.
ex CM B S Yediyurappa and Karnataka HC
ex CM B S Yediyurappa and Karnataka HC
Published on

ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ ಬಿ ಎಸ್‌ ಯಡಿಯೂರಪ್ಪನವರು ಸಾಂವಿಧಾನಿಕ ಹುದ್ದೆಯಲ್ಲಿರುವುದರಿಂದ ಅವರ ಪ್ರಾಸಿಕ್ಯೂಷನ್‌ಗೂ ಮುನ್ನ ರಾಜ್ಯಪಾಲರ ಪೂರ್ವಾನುಮತಿ ಪಡೆಯಲಾಗಿಲ್ಲ ಎಂದು ಖಾಸಗಿ ದೂರನ್ನು ವಜಾ ಮಾಡಿದ್ದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಹ್ಯಾಂಡ್‌ ಸಮನ್ಸ್‌ ಜಾರಿ ಮಾಡಿದೆ.

ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಅವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ಪೀಠವು ಬಿ ಎಸ್‌ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ ಸೇರಿದಂತೆ ಒಂಭತ್ತು ಮಂದಿಗೆ ತುರ್ತು ನೋಟಿಸ್‌ ಜಾರಿ ಮಾಡಿದ್ದು, ಪ್ರತಿಕ್ರಿಯಿಸುವಂತೆ ಆದೇಶ ಮಾಡಿದೆ. ವಿಚಾರಣೆಯನ್ನು ಆಗಸ್ಟ್‌ ಎರಡನೇ ವಾರಕ್ಕೆ ಮುಂದೂಡಿದೆ.

“ಸಾರ್ವಜನಿಕ ಸೇವಕರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರಿಂದ ಪೂರ್ವಾನುಮತಿ ಅಗತ್ಯವಿಲ್ಲ ಎಂದು ಮೇಲ್ನೋಟಕ್ಕೆ ಅನಿಸಿದೆ” ಎಂದು ಅರ್ಜಿದಾರರ ವಾದವನ್ನು ಆಲಿಸಿದ ಪೀಠವು ನೋಟಿಸ್‌ ಜಾರಿ ಮಾಡುವಾಗ ಹೇಳಿತು.

ಅರ್ಜಿದಾರರ ಪರ ವಕೀಲ ವಿಕಾಸ್‌ ಉಪಾಧ್ಯಾಯ ಅವರು “ಆರ್‌.ಆರ್‌ ಚಾರಿ ಪ್ರಕರಣ ಒಳಗೊಂಡು ಒಟ್ಟು ಮೂರು ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ ಹೇಳಿರುವಂತೆ ಸಾರ್ವಜನಿಕ ಸೇವಕರ ವಿಚಾರಣೆಗೆ ಸಂಬಂಧಿಸಿದಂತೆ ರಾಜ್ಯಪಾಲರ ಪೂರ್ವಾನುಮತಿಯ ಅಗತ್ಯವಿಲ್ಲ. ಪ್ರಕರಣದ ವಿಚಾರಣೆ ನಡೆಸುವ ಸಂಬಂಧ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಬೇಕು” ಎಂದು ಕೋರಿದರು.

Also Read
[ಬಿಎಸ್‌ವೈ ಡಿನೋಟಿಫಿಕೇಷನ್‌ ಪ್ರಕರಣ] ತನಿಖಾಧಿಕಾರಿಯ 'ಕಾಟಾಚಾರದ' ತನಿಖೆಯ ಬಗ್ಗೆ ನ್ಯಾಯಾಲಯ ಹೇಳಿದ್ದೇನು?

ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್‌ 200 ಮತ್ತು ಸಿಆರ್‌ಪಿಸಿ ಸೆಕ್ಷನ್‌ 156(3) ಅಡಿ ಅರ್ಜಿದಾರರಾದ ಟಿ ಜೆ ಅಬ್ರಹಾಂ ಅವರು ಸಲ್ಲಿಸಿರುವ ಖಾಸಗಿ ದೂರುಗಳು ನಿರ್ವಹಣೆಗೆ ಅರ್ಹವಲ್ಲ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ ಜಯಂತ್‌ ಕುಮಾರ್‌ ಆದೇಶಿಸಿದ್ದರು. ವಿಚಾರಣಾಧೀನ ನ್ಯಾಯಾಲಯದ ಈ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

ಕೊಲ್ಕತ್ತಾ ಮೂಲದ ಶೆಲ್‌ ಕಂಪೆನಿಗಳಲ್ಲಿ ಯಡಿಯೂರಪ್ಪ ಕುಟುಂಬ ಸದಸ್ಯರು ಅಕ್ರಮವಾಗಿ ಹಣ ಹೂಡಿಕೆ ಮಾಡಿದ್ದಾರೆ. ವಿಜಯೇಂದ್ರ ಹಾಗೂ ಪ್ರಕರಣದಲ್ಲಿ ಮತ್ತೊಬ್ಬ ಪ್ರತಿವಾದಿಯಾದ ಶಶಿಧರ ಮರಡಿ ಅವರು ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಂ ಅವರ ಜೊತೆ ಸಂಪರ್ಕ ಹೊಂದಿದ್ದು, ಸರ್ಕಾರಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ಯಡಿಯೂರಪ್ಪ ಮೇಲೆ ಅವರ ಆಪ್ತರು ಒತ್ತಡ ಹಾಕಿದ್ದರು. ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಒತ್ತಡ ಹಾಕುವ ಮೂಲಕ ಅಧಿಕಾರ ದುರ್ಬಳಕೆ ಮಾಡಲಾಗಿದೆ. ಹೀಗಾಗಿ ಆರೋಪಿಗಳಾದ ಬಿ ಎಸ್‌ ಯಡಿಯೂರಪ್ಪ, ಬಿ ವೈ ವಿಜಯೇಂದ್ರ, ಶಶಿಧರ ಮರಡಿ, ಸಂಜಯ್‌ ಶ್ರೀ, ಚಂದ್ರಕಾಂತ ರಾಮಲಿಂಗಂ, ಶಾಸಕ ಎಸ್‌ ಟಿ ಸೋಮಶೇಖರ್‌, ಐಎಎಸ್‌ ಅಧಿಕಾರಿ ಡಾ. ಜಿ ಸಿ ಪ್ರಕಾಶ್, ಕೆ ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು. ಇದಕ್ಕೆ ಸಂಬಂಧಿಸಿದಂತೆ ವಾಟ್ಸಾಪ್‌ ಸೇರಿದಂತೆ ಹಲವು ದಾಖಲೆಗಳಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

Kannada Bar & Bench
kannada.barandbench.com