ಲೋಕಾಯುಕ್ತ ಸಂಸ್ಥೆಯ ವರದಿಯ ಅನುಸಾರ ರಾಜ್ಯ ಸರ್ಕಾರವು ನಾಲ್ಕು ಇಲಾಖೆಗಳಲ್ಲಿನ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರವು ಮುಂದಿನ ವಿಚಾರಣೆಯ ಒಳಗೆ ಅಫಿಡವಿಟ್ ಸಲ್ಲಿಸಬೇಕು ಎಂದು ಮಂಗಳವಾರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು ಮೂಲದ ಸಾಮಾಜಿಕ ಕಾರ್ಯಕರ್ತ ಸಾಯಿ ದತ್ತ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಸರ್ಕಾರದ ಪರ ವಕೀಲರು “ಲೋಕಾಯುಕ್ತರು 24 ಇಲಾಖೆಯ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುವಂತೆ ವರದಿ ಸಲ್ಲಿಸಿದ್ದಾರೆ. ಈ ಸಂಬಂಧ 19 ಇಲಾಖೆಗಳಲ್ಲಿನ ತಪ್ಪಿತಸ್ಥ ಅಧಿಕಾರಿ ಮತ್ತು ಸಿಬ್ಬಂದಿಯ ವಿರುದ್ಧ ಕ್ರಮ ಜರುಗಿಸಲಾಗಿದೆ. ಈಗ ಎರಡು ಇಲಾಖೆಗಳಲ್ಲಿನ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿರುವ ಅನುಪಾಲನಾ ವರದಿಯನ್ನು ಸಲ್ಲಿಸಲಾಗುವುದು. ಕಂದಾಯ ಇಲಾಖೆಯಲ್ಲಿ ಸಾಕಷ್ಟು ದತ್ತಾಂಶ ಸಂಗ್ರಹಿಸಬೇಕಿದೆ. ನವೆಂಬರ್ ಅಂತ್ಯದ ವೇಳೆಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯಾಲಯದ ಆದೇಶವನ್ನು ಅನುಪಾಲನೆ ಮಾಡಲಾಗುವುದು” ಎಂದು ಪೀಠಕ್ಕೆ ವಿವರಿಸಿದರು.
ವಿಚಾರಣೆ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲ ಜಿ ಆರ್ ಮೋಹನ್ ಅವರು “ಲೋಕಾಯುಕ್ತ ಕಾಯಿದೆಯ ಸೆಕ್ಷನ್ 12 (1) ರ ಅಡಿ ಲೋಕಾಯುಕ್ತ ಅಥವಾ ಉಪಲೋಕಾಯುಕ್ತರು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತಾರೆ. ಕಾಯಿದೆಯ 12 (2)ರ ಪ್ರಕಾರ ಸಕ್ಷಮ ಪ್ರಾಧಿಕಾರವು ವಿಚಾರಣಾ ವರದಿಯಲ್ಲಿ ನಿರ್ದಿಷ್ಟಪಡಿಸಿದ ಸಮಯದಲ್ಲಿ ತೆಗೆದುಕೊಂಡ ಕ್ರಮದ ವರದಿಯನ್ನು ಸಲ್ಲಿಸಬೇಕು. ರಾಜ್ಯ ಸರ್ಕಾರವು ನ್ಯಾಯಾಲಯದ ಹಿಂದಿನ ಆದೇಶವನ್ನು ಭಾಗಶಃ ಮಾಡಿದ್ದು, ಈ ಕುರಿತು ಅಫಿಡವಿಟ್ ಸಲ್ಲಿಸಿದ್ದಾರೆ. ಹಲವು ಇಲಾಖೆಗಳ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಯಾವುದೇ ತೆರನಾದ ಕ್ರಮಕೈಗೊಂಡಿಲ್ಲ” ಎಂದು ಪೀಠದ ಗಮನಸೆಳೆದರು.
ಅಲ್ಲದೇ, ನೋಡಲ್ ಅಧಿಕಾರಿಯನ್ನು ನೇಮಿಸಿದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಆಗಸ್ಟ್ 23ರಂದು ಲೋಕಾಯುಕ್ತರು ಸಲ್ಲಿಸಿರುವ ತನಿಖಾ ವರದಿಗೆ ಸಂಬಂಧಿಸಿದಂತೆ ಕ್ರಮಕೈಗೊಂಡಿರುವ ಮಾಹಿತಿ ನೀಡಲು ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್‌ಗೆ ತಿಳಿಸಿತ್ತು.
342 ಪ್ರಕರಣಗಳಲ್ಲಿ ಕ್ರಮಕೈಗೊಂಡಿರುವ ಕುರಿತು ಸಂಬಂಧಪಟ್ಟ ಪ್ರಾಧಿಕಾರಗಳು ವರದಿ ಸಲ್ಲಿಸಿಲ್ಲ ಎಂದು ಮಾಹಿತಿ ಹಕ್ಕು ಕಾಯಿದೆ ಅಡಿ ಸಲ್ಲಿಸಲಾದ ಮನವಿಯಿಂದ ಬಹಿರಂಗವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. ಕರ್ನಾಟಕ ನಾಗರಿಕ ಸೇವೆಗಳ (ಸಿಸಿಎ) ಕಾನೂನಿನ ನಿಯಮ 14 (2) (ಡಿ) ಪ್ರಕಾರ ಕ್ರಮ ಕೈಗೊಳ್ಳಲು 932 ಪ್ರಕರಣಗಳಲ್ಲಿ ಸಕ್ಷಮ ಅಧಿಕಾರಿಗಳ ಒಪ್ಪಿಗೆಗಾಗಿ ಕಾಯಲಾಗುತ್ತಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.