

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ಅಧ್ಯಕ್ಷರನ್ನಾಗಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾತ್ರ ನೇಮಕ ಮಾಡಬೇಕು ಎಂಬುದು ದೋಷಪೂರಿತ ವಾದ ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಹೇಳಿದ್ದು, ಒಂದು ತಿಂಗಳಲ್ಲಿ ಸರ್ಕಾರದ ಕಾರ್ಯದರ್ಶಿ ಮಟ್ಟದ ಅಧಿಕಾರಿಯನ್ನು ಕೆಕೆಆರ್‌ಡಿಬಿ ಕಾರ್ಯದರ್ಶಿಯನ್ನಾಗಿ ನೇಮಿಸಬೇಕು ಎಂದು ನಿರ್ದೇಶಿಸಿದೆ.
ಕೆಕೆಆರ್‌ಡಿಬಿ ಅಧ್ಯಕ್ಷರಾಗಿರುವ ಡಾ. ಅಜಯ್ ಸಿಂಗ್ ನೇಮಕಾತಿ ಮತ್ತು ಕೊಪ್ಪಳ ಜಿಲ್ಲಾಧಿಕಾರಿ ನಳಿನಿ ಅತುಲ್ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಿಸಿರುವುದು ಹಾಗೂ ಕೆಕೆಆರ್‌ಡಿಬಿಯಲ್ಲಿನ ಅಕ್ರಮದ ತನಿಖೆಗೆ ನಿರ್ದೇಶಿಸುವಂತೆ ಕೋರಿ ಅಹಿಂದ ಚಿಂತಕರ ವೇದಿಕೆಯ ಸಾಯಿಬಣ್ಣಾ ಜಮಾದಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರ ವಿಭಾಗೀಯ ಪೀಠವು ಇತ್ಯರ್ಥಪಡಿಸಿದೆ.
ಕೆಕೆಆರ್‌ಡಿಬಿ ಅಧ್ಯಕ್ಷರನ್ನಾಗಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಮಾತ್ರ ನೇಮಿಸಬೇಕು ಎಂಬ ಅರ್ಜಿದಾರರ ಪರ ವಕೀಲರ ವಾದಕ್ಕೆ ವಿರುದ್ಧವಾಗಿ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ 2013 ಆದೇಶಕ್ಕೆ ತಿದ್ದುಪಡಿ ಮಾಡಿ 2020ರ ಜನವರಿ 27ರಂದು ಹೊರಡಿಸಿರುವ ಆದೇಶವನ್ನು ಉಲ್ಲೇಖಿಸಿದರು. ತಿದ್ದುಪಡಿಯಲ್ಲಿ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳ ಪೈಕಿ ಒಂದು ಜಿಲ್ಲಾ ಉಸ್ತುವಾರಿ ಸಚಿವರು ಎಂದಿದ್ದನ್ನು ಕೈಬಿಟ್ಟು, ನಾಮನಿರ್ದೇಶನ ಮಾಡಲ್ಪಟ್ಟ ಸದಸ್ಯರನ್ನು ಅಧ್ಯಕ್ಷರನ್ನಾಗಿ ನೇಮಿಸಬಹುದು ಎಂದು ತಿದ್ದುಪಡಿ ಮಾಡಲಾಗಿದೆ ಎಂದರು.
ಇದನ್ನು ಒಪ್ಪಿದ ಪೀಠವು ಸಚಿವರನ್ನು ಮಾತ್ರ ಕೆಕೆಆರ್‌ಡಿಬಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂಬ ಅರ್ಜಿದಾರರ ವಾದ ದೋಷಪೂರಿತವಾಗಿದೆ ಎಂದಿತು.
ಇನ್ನು ಕೊಪ್ಪಳ ಜಿಲ್ಲಾಧಿಕಾರಿ ನಳಿನಿ ಅತುಲ್ ಅವರನ್ನು ಕೆಕೆಆರ್‌ಡಿಬಿ ಕಾರ್ಯದರ್ಶಿಯನ್ನಾಗಿ ಮಾಡಿರುವುದು ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಆದೇಶ 2013ಕ್ಕೆ ವಿರುದ್ಧವಾಗಿದೆ. ಈ ಸಂಬಂಧ ತಿದ್ದುಪಡಿ ನಾಲ್ಕು ವಾರಗಳಲ್ಲಿ ಅಗತ್ಯವಾದ ಆದೇಶ ಹೊರಡಿಸಲಾಗುವುದು ಎಂದು ಅಡ್ವೊಕೇಟ್ ಜನರಲ್ ತಿಳಿಸಿದರು.
ಈ ಹೇಳಿಕೆಯನ್ನು ದಾಖಲಿಸಿಕೊಂಡ ಪೀಠವು ನಾಲ್ಕು ವಾರಗಳಲ್ಲಿ ಕೆಕೆಆರ್‌ಡಿಬಿಗೆ ಸೂಕ್ತ ಅರ್ಹತೆ ಹೊಂದಿರುವ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಬೇಕು ಎಂದು ನಿರ್ದೇಶಿಸಿತು.
ಅರ್ಜಿದಾರರ ಪರ ವಕೀಲರು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ ವಿ ರಮಣ ರೆಡ್ಡಿ ಅವರ ವರದಿ ಆಧರಿಸಿ ₹1,800 ಕೋಟಿಗೂ ಅಧಿಕ ಮೊತ್ತವನ್ನು ದುರ್ಬಳಕೆ ಮಾಡಿಕೊಳ್ಳಲಾಗಿರುವುದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿದರು.
ಹಣ ದುರ್ಬಳಕೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ನಡೆಯುತ್ತಿದ್ದು, ಶೀಘ್ರದಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ಹೇಳಲಾಗಿದೆ ಎಂದು ದಾಖಲಿಸಿತು. ಅಲ್ಲದೇ, ಸರ್ಕಾರದ ಪರವಾಗಿ ಮಂಡಿಸಲಾಗಿರುವ ಹೇಳಿಕೆಗೆ ಪ್ರತಿವಾದಿಗಳು ಬದ್ಧವಾಗಿರಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.