

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಸಣಾಪುರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾನಸಿಕ ಅಸ್ವಸ್ಥ ಯುವಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರತಿಯೊಬ್ಬ ವ್ಯಕ್ತಿಯನ್ನೂ ಹಿಡಿದು ಪ್ರಕರಣ ದಾಖಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಗುರುವಾರ ಪೊಲೀಸರಿಗೆ ತಾಕೀತು ಮಾಡಿದೆ.
ಯಳಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಚಾಮರಾಜನಗರ ತಾಲ್ಲೂಕಿನ ಮಸಣಾಪುರದ ಚಂದ್ರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.
“ಹಲ್ಲೆ ನಡೆಸಲಾದ ಘಟನೆಯ ವಿಡಿಯೊ ಇದೆ. ಅದರ ನೆರವಿನಿಂದ ಎಲ್ಲ ಹಲ್ಲೆಕೋರರನ್ನೂ ಹಿಡಿದು ಕೇಸು ದಾಖಲಿಸಬೇಕು. ಇಂತಹ ಪ್ರಕರಣದ ತನಿಖೆ ಆಮೆ ವೇಗದಲ್ಲಿ ನಡೆಯುವಂತಾಗಬಾರದು. ಈವರೆಗೂ ನಡೆದಿರುವ ತನಿಖೆಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ” ಎಂದು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಿದೆ.
“ತನಿಖೆಯ ನೆಪದಲ್ಲಿ ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂಬ ಮಧ್ಯಂತರ ಆದೇಶವು ಕೇವಲ ಅರ್ಜಿದಾರ ಚಂದ್ರುಗೆ ಮಾತ್ರ ಅನ್ವಯಿಸಲಿದೆ. ಉಳಿದ ಆರೋಪಿಗಳು ತನಿಖೆಗೆ ಸಹಕರಿಸಬೇಕು” ಎಂದು ತಿಳಿಸಿರುವ ಪೀಠವು ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ.
ಅರ್ಜಿದಾರ ಯುವಕನ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತಾ–2023ರ ಸೆಕ್ಷನ್ 299, 324(4), ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ತಿದ್ದುಪಡಿ ಕಾಯಿದೆ–2015ರ 3(1)(ಟಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.